Tuesday, July 13, 2021

ಭದ್ರಾವತಿಯಲ್ಲಿ ೬ ಕೊರೋನಾ ಸೋಂಕು, ೨ ಬಲಿ

ಭದ್ರಾವತಿ, ಜು. ೧೩: ತಾಲೂಕಿನಲ್ಲಿ ಮಂಗಳವಾರ ೬ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
     ಒಟ್ಟು ೪೮೧ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೪ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಒಬ್ಬರು ಹಾಗು ನಗರ ಭಾಗದಲ್ಲಿ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ೭೪೪೫ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೭೩೮೩ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ೬೨ ಸಕ್ರಿಯ ಪ್ರಕರಣ ಬಾಕಿ ಇದ್ದು, ಇದುವರೆಗೂ ಸೋಂಕಿನಿಂದ ಒಟ್ಟು ೧೪೯ ಮಂದಿ ಮೃತಪಟ್ಟಿದ್ದಾರೆ.
    ನಗರ ಭಾಗದಲ್ಲಿ ಒಟ್ಟು ೪ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೬೬ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ಭಾಗದಲ್ಲಿ ೫ ಜೋನ್‌ಗಳು ಸಕ್ರಿಯವಾಗಿದ್ದು, ೪೪ ಜೋನ್‌ಗಳನ್ನು ಇದುವರೆಗೂ ತೆರವುಗೊಳಿಸಲಾಗಿದೆ.

ವಿರೋಧದ ನಡುವೆ ನವ ದಾಂಪತ್ಯಕ್ಕೆ ಕಾಲಿಟ್ಟ ಅಂಧ ಜೋಡಿಗಳು

ನವ ಜೋಡಿಗಳ ಹೊಸ ಬದುಕಿಗೆ ಮುನ್ನುಡಿ ಬರೆದ ಶ್ರೀ ರಾಮರಾಜ್ಯ ಸಂಘದ ಪದಾಧಿಕಾರಿಗಳು


ಎರಡು ಕುಟುಂಬಗಳ ವಿರೋಧದ ನಡುವೆಯೂ ಪ್ರೀತಿಸುತ್ತಿದ್ದ ಅಂಧ ಜೋಡಿಗಳ ವಿವಾಹ ನೆರವೇರಿಸುವ ಮೂಲಕ ಭದ್ರಾವತಿ ಜನ್ನಾಪುರದ ಶ್ರೀ ರಾಮರಾಜ್ಯ ಸಂಘದ ಪದಾಧಿಕಾರಿಗಳು ನವ ಜೋಡಿಗಳ ಹೊಸ ಬದುಕಿಗೆ ಮುನ್ನುಡಿ ಬರೆದಿದ್ದಾರೆ.
    ಭದ್ರಾವತಿ, ಜು. ೧೩: ಎರಡು ಕುಟುಂಬಗಳ ವಿರೋಧದ ನಡುವೆಯೂ ಪ್ರೀತಿಸುತ್ತಿದ್ದ ಅಂಧ ಜೋಡಿಗಳ ವಿವಾಹ ನೆರವೇರಿಸುವ ಮೂಲಕ ನಗರದ ಜನ್ನಾಪುರದ ಶ್ರೀ ರಾಮರಾಜ್ಯ ಸಂಘದ ಪದಾಧಿಕಾರಿಗಳು ನವ ಜೋಡಿಗಳ ಹೊಸ ಬದುಕಿಗೆ ಮುನ್ನುಡಿ ಬರೆದಿರುವ ಘಟನೆ ಬೆಳಕಿಗೆ ಬಂದಿದೆ.
    ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಆಶ್ರಯ ಪಡೆದು ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ವ್ಯಾಸಂಗದಲ್ಲಿ ತೊಡಗಿದ್ದ ದಿವ್ಯಾ ಹಾಗು ಜನ್ನಾಪುರದ ಹಂಚಟೆ ಡೆಂಟಲ್ ಆಸ್ಪತ್ರೆಯಲ್ಲಿ ಸಹಾಯಕನಾಗಿ ದುಡಿಯುತ್ತಿರುವ ಮಲ್ಲೇಶ್ ಇಬ್ಬರು ಕಳೆದ ೨ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ದಿವ್ಯ ಪೂರ್ಣ ಪ್ರಮಾಣದಲ್ಲಿ ಅಂಧತ್ವ ಹೊಂದಿದ್ದು, ಮಲ್ಲೇಶ್ ಭಾಗಶಃ ಅಂಧತ್ವ ಹೊಂದಿದ್ದಾನೆ.
    ದಿವ್ಯ ಪೋಷಕರಾದ ಚನ್ನಗಿರಿ ತಾಲೂಕಿನ ಸಂಗವಳ್ಳಿಯ ಚನ್ನಬಸಪ್ಪ ಮತ್ತು ಶಾರದ ದಂಪತಿ ಹಾಗು ಮಲ್ಲೇಶ್ ಪೋಷಕರಾದ ಜನ್ನಾಪುರದ ನಾಗರಾಜ ಮತ್ತು ಪುಷ್ಪ ದಂಪತಿ ಇಬ್ಬರ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಎರಡು ಕುಟುಂಬಗಳ ವಿರೋಧದ ನಡುವೆ ಕಳೆದ ೬ ದಿನಗಳ ಹಿಂದೆ ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗು ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪನವರ ಸಹಕಾರದೊಂದಿಗೆ ಶ್ರೀ ರಾಮರಾಜ್ಯ ಸಂಘದ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಪಿ. ಶ್ರೀನಿವಾಸ್, ಅಧ್ಯಕ್ಷ ಯುವರಾಜ್, ಉಪಾಧ್ಯಕ್ಷ ಶ್ರೀಕಾಂತ್, ರಾಜ್ಯ ಲೆಕ್ಕ ಪರಿಶೋಧನ ಮತ್ತು ಲೆಕ್ಕ ಪತ್ರ ಇಲಾಖೆ ಉದ್ಯೋಗಿ ಕೇಶವಮೂರ್ತಿ ಸೇರಿದಂತೆ ಇನ್ನಿತರರು ವಿವಾಹ ನೆರವೇರಿಸುವ ಮೂಲಕ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ.

Monday, July 12, 2021

ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ

ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರ ಕೊಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್


ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಭದ್ರಾವತಿ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
    ಭದ್ರಾವತಿ, ಜು. ೧೨: ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
    ನಗರದ ಹೊಸಮನೆ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರು ಇತ್ತೀಚೆಗೆ ಶಿವಮೊಗ್ಗದಲ್ಲಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಾಗ ಮೃತಪಟ್ಟಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರಕ್ಕೆ ಒತ್ತಾಯಿಸಿದ್ದರು.
    ನಗರಸಭಾ ಸದಸ್ಯರಾದ ಜಾರ್ಜ್, ಚನ್ನಪ್ಪ, ಕೆ. ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್, ರವಿಕುಮಾರ್, ಸರವಣ ಮೇಸ್ತ್ರಿ ಮತ್ತು ಟೈಲ್ಸ್ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜು. ೧೨: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ೩ ಸಾವಿರ ರು. ಆರ್ಥಿಕ ನೆರವನ್ನು ೧೦ ಸಾವಿರ ರು.ಗಳಿಗೆ ಹೆಚ್ಚಿಸಬೇಕು. ದಿನಸಿ ಸಾಮಗ್ರಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಅಲ್ಲದೆ ಹಗರಣಗಳು ನಡೆದಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ನಗರಸಭಾ ಸದಸ್ಯ ಜಾರ್ಜ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೆರೆಗಳ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆ : ತುರ್ತು ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಿ

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ


ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಜು. ೧೨: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ತುರ್ತು ಸಭೆ ಕರೆಯುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
     ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಕೆರೆಗಳಿದ್ದು, ಈ ಕೆರೆಗಳ ಅಂತರ್ಜಲ ಹೆಚ್ಚಿಸಿ ಪ್ರಾಣಿ, ಪಕ್ಷಿಗಳಿಗೆ, ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈಗಾಗಲೇ ಕೆಲವು ಕೆರೆಗಳ ಸಮೀಪದ ರೈತರು ಸರ್ಕಾರದಿಂದ ಯಾವುದೇ ಅನುದಾನ ನಿರೀಕ್ಷೆ ಮಾಡದೆ ಸ್ವ ಇಚ್ಚಿಯಿಂದ ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋ. ರು. ಉಳಿತಾಯವಾಗುತ್ತಿದೆ ಎಂದು ಮನವರಿಕೆ ಮಾಡಲಾಗಿದೆ.
    ಕೆರೆಗಳ ಸಂರಕ್ಷಣೆಯಲ್ಲಿ ತೊಡಗಿರುವ ರೈತರ ಕಾರ್ಯಕ್ಕೆ ಕೆಲವು ಸ್ಥಳೀಯರು ಅಡ್ಡಿ ಉಂಟು ಮಾಡುತ್ತಿದ್ದು, ಇದರಿಂದಾಗಿ ಕೆರೆಗಳ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ನೀರಾವರಿ ನಿಗಮ, ರಕ್ಷಣಾ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ತುರ್ತು ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೊಹಮ್ಮದ್ ಅನಿಫ್, ಮುರುಗೇಶ್, ನಗರಸಭಾ ಸದಸ್ಯರಾದ ಚನ್ನಪ್ಪ, ಸುದೀಪ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Sunday, July 11, 2021

ಬಿ.ವೈ ಗೋವಿಂದ ನಿಧನ

ಬಿ.ವೈ ಗೋವಿಂದ
   ಭದ್ರಾವತಿ, ಜು. ೧೧: ಗಾಂಧಿನಗರದ ನಿವಾಸಿ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಬಿ.ವೈ ಗೋವಿಂದ ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಬಿ.ವೈ ಗೋವಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿ ಹಾಗು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮೃತರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ ಸಂತಾಪ ಸೂಚಿಸಿದ್ದಾರೆ.

ಸಮಾಜದಲ್ಲಿ ಪತ್ರಕರ್ತರ ಸೇವೆ ಅಪಾರ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ಹಳೇನಗರದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ದಿನಾಚರಣೆ ಹಾಗು ಪತ್ರಿಕಾಭವನದ ಮುಂದುವರೆದ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಬದರಿನಾರಾಯಣ ಶ್ರೇಷ್ಠಿ ದಂಪತಿಯನ್ನು ಸನ್ಮಾಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೧೧: ಪತ್ರಕರ್ತರು ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದ್ದು, ಪತ್ರಕರ್ತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಭಾನುವಾರ ಹಳೇನಗರದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ದಿನಾಚರಣೆ ಹಾಗು ಪತ್ರಿಕಾಭವನದ ಮುಂದುವರೆದ ಕಾಮಗಾರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
     ಎಲ್ಲರಿಗೂ ಸಮಾಜದ ಪ್ರತಿಯೊಂದು ಮಾಹಿತಿಗಳು ತಲುಪಬೇಕಾದರೆ ಪತ್ರಕರ್ತರ ಅವಶ್ಯಕತೆ ಅನಿವಾರ್ಯವಾಗಿದೆ. ಸಮಾಜದಲ್ಲಿನ ಒಳಿತು, ಕೆಡಕು ಎಲ್ಲವನ್ನು ತಿಳಿಸಿಕೊಡುವ ಜೊತೆಗೆ ಪತ್ರಕರ್ತರು ಸಮಾಜದ ಸ್ವಾರ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಸಮಾಜದಲ್ಲಿ ಪ್ರತಿಕೆಗಳು ಹಾಗು ಪತ್ರಕರ್ತರು ಅನುಭವಿಸುತ್ತಿರುವ ಸಂಕಷ್ಟಗಳು ಬಹಳಷ್ಟಿವೆ. ಹಲವಾರು ಸಂಕಷ್ಟಗಳ ನಡುವೆಯೂ ಪತ್ರಕರ್ತರು ತಮ್ಮ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಪತ್ರಕರ್ತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜೊತೆಗೆ ಏಳಿಗೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
     ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಮಾತನಾಡಿ, ಸಮಾಜದೊಂದಿಗೆ ಪತ್ರಕರ್ತರು ಗುರುತಿಸಿಕೊಂಡಿರುವ ಪರಿ ಹಾಗು ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸುವ ಜೊತೆಗೆ ಸಂಘಟನೆಯ ಮಹತ್ವ ತಿಳಿಸಿದರು.
    ಪತ್ರಿಕಾಭವನ ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ ಮಾತನಾಡಿ, ಸಮಾಜದಲ್ಲಿ ಪತ್ರಕರ್ತರ ಜೊತೆಗೆ ಪತ್ರಿಕೆಗಳು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು. ಸುಭಾಷ್ ಸಿಂದ್ಯಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್ ನಿರೂಪಿಸಿದರು. ಹಿರಿಯ ಪತ್ರಕರ್ತ ಬದರಿನಾರಾಯಣ ಶ್ರೇಷ್ಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿದರು. ಸಹಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಅನಂತಕುಮಾರ್, ಹಿರಿಯ ಪತ್ರಕರ್ತರಾದ ನಾರಾಯಣ, ಗಣೇಶ್‌ರಾವ್ ಸಿಂಧ್ಯಾ, ಶಿವಶಂಕರ್, ಟಿ.ಎಸ್ ಆನಂದಕುಮಾರ್, ಸುದರ್ಶನ್, ಶೈಲೇಶ್‌ಕೋಠಿ, ಕೆ.ಇ ಪ್ರಶಾಂತ್, ರವೀಂದ್ರನಾಥ್(ಬ್ರದರ್), ಮೋಹನ್‌ಕುಮಾರ್, ಸಯ್ಯದ್‌ಖಾನ್ ಹಾಗು ಆರ್ಯವೈಶ್ಯ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.