ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಹಾಗು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜು. ೧೭: ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸದೆ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಪ್ರಸ್ತುತ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆ ಹಾಗು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖಂಡರು, ಡೀಸೆಲ್, ಪೆಟ್ರೋಲ್ ಹಾಗು ಅಡುಗೆ ಅನಿಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಪಕ್ಷವಾಗಿದ್ದು, ಕೇಂದ್ರ ಹಾಗು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಜನಪರ ಯೋಜನೆಗಳು ಇಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಂಡಿವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಜನಪರ ಯೋಜನೆಗಳನ್ನು ಮೊಟಕುಗೊಳಿಸಲಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ನೆಮ್ಮದಿಯಿಂದ ಬದುಕು ಸಾಗಿಸುವುದು ಅಸಾಧ್ಯವಾಗಿದೆ ಎಂದು ಆರೋಪಿಸಿದರು.
ತಕ್ಷಣ ಬೆಲೆ ಏರಿಕೆ ನಿಯಂತ್ರಿಸಬೇಕು. ಜನವಿರೋಧಿ ನೀತಿಗಳನ್ನು ಕೈಬಿಡಬೇಕು. ಜನಸಾಮಾನ್ಯರು ನೆಮ್ಮದಿಯಿಂದ ಬದಕಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ನಗರಸಭಾ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ಕಾಂತರಾಜ್, ಜಾರ್ಜ್, ಬಷೀರ್ ಅಹಮದ್, ಚನ್ನಪ್ಪ, ಶೃತಿ ವಸಂತಕುಮಾರ್, ರಿಯಾಜ್ ಅಹಮದ್, ಬಿ.ಎಂ ಮಂಜುನಾಥ್, ಮುಖಂಡರಾದ ಬಾಲಕೃಷ್ಣ, ಗೋವಿಂದಸ್ವಾಮಿ, ಬಿ.ಎಸ್ ಗಣೇಶ್, ಬಿ.ಎಂ ರವಿಕುಮಾರ್, ಪ್ರಕಾಶ್‌ರಾವ್ ದುರೆ, ಎಂ. ಶಿವಕುಮಾರ್, ಎಸ್.ಎಸ್ ಭೈರಪ್ಪ, ಎಸ್. ಮಹಾದೇವ ಕೂಡ್ಲಿಗೆರೆ, ರಮೇಶ್‌ನಾಯ್ಕ, ಆಂಜನಪ್ಪ, ರಾಜ್‌ಕುಮಾರ್, ಕೆ. ಐಸಾಕ್ ಲಿಂಕನ್, ಎಂ. ರವಿಕುಮಾರ್, ಸುಮಿತ್ರಾ ಅಂಬೋರೆ, ಗೀತಾ, ವರಲಕ್ಷ್ಮೀ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.