![](https://blogger.googleusercontent.com/img/b/R29vZ2xl/AVvXsEjTvYs-39ZdWuSOc4Lm39EM3OrOOSdiRhdmTXTSIRhyphenhypheniyDR_bkNJ5pmF4566j50WG5cpLNENT-eG7FZqCMh5DqZAb2cLpIN_4OX4m1UIvtWg1mBGjlx416dwXwCT1p5jlue-mZEP9CT9UvA/w400-h297-rw/D7-BDVT-750126.jpg)
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಶನಿವಾರ ಭದ್ರಾವತಿ ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
ಭದ್ರಾವತಿ, ಆ. ೭: ಶಿವಮೊಗ್ಗ ಜಿಲ್ಲೆಯನ್ನು ಕೃಷಿ ನೀರಾವರಿ ಜಿಲ್ಲೆಯನ್ನಾಗಿ ರೂಪಿಸುವ ಮೂಲಕ ಜಿಲ್ಲೆಯ ಮಹತ್ವ ಎತ್ತಿ ಹಿಡಿಯಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಶನಿವಾರ ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯಕ್ಕೆ ಗಂಗಾಪೂಜೆಯೊಂದಿಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಬಿ.ಎಸ್ ಯಡಿಯೂರಪ್ಪನವರು ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ಸುಮಾರು ೩ ಸಾವಿರ ಕೋ. ರು. ಹಾಗು ಇತರೆ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸಿದ್ದರು. ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು. ಯೋಜನೆಗಳಲ್ಲಿ ಗುಣಮಟ್ಟದ ಕಾಮಗಾರಿಗೆ ಹೆಚ್ಚಿನ ಗಮನ ನೀಡಬೇಕು. ನಾಲೆಗಳಲ್ಲಿ ಹೂಳು ತುಂಬಿಕೊಳ್ಳದಂತೆ ಹಾಗು ನೀರು ವ್ಯರ್ಥವಾಗದಂತೆ ಎಚ್ಚರ ವಹಿಸಬೇಕೆಂದರು.
ಮಧ್ಯ ಕರ್ನಾಟಕ ಭಾಗದ ಬರ ಪೀಡಿತ ಜಿಲ್ಲೆಗಳಿಗೆ ನೀರು ಹರಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರದಲ್ಲಿಯೇ ಮುಕ್ತಾಯಗೊಳ್ಳಲಿದ್ದು, ಬಹಳ ವರ್ಷಗಳ ಕನಸು ಈಡೇರಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಮಾತನಾಡಿ, ಪ್ರಸ್ತುತ ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ಜಲಾಶಯದಿಂದ ೧೪ ಟಿಎಂಸಿ ಹಾಗು ಭದ್ರಾ ಜಲಾಶಯದಿಂದ ೧೫ ಟಿಎಂಸಿ ನೀರನ್ನು ಬಳಸಿಕೊಳ್ಳುವ ಬಗ್ಗೆ ಸರ್ಕಾರ ಯೋಜನೆ ರೂಪಿಸಿಕೊಂಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಹೆಚ್ಚಿನ ಅನಾನುಕೂಲವಾಗಲಿದೆ. ತುಂಗಾ ಜಲಾಶಯದಲ್ಲಿ ಸಂಗ್ರಹವಾಗುವ ಹೆಚ್ಚಿನ ಪ್ರಮಾಣದ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಇದನ್ನು ತಪ್ಪಿಸಲು ತುಂಗಾ ಜಲಾಶಯದಿಂದಲೇ ೩೦ ಟಿಎಂಸಿ ಹೆಚ್ಚುವರಿ ನೀರನ್ನು ಈ ಯೋಜನೆಗೆ ಬಳಸಿಕೊಳ್ಳಬಹುದಾಗಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವಂತೆ ಸಂಸದರಿಗೆ ಮನವಿ ಮಾಡಿದರು.
ಪ್ರಮುಖರಾದ ಪದ್ಮನಾಭ ಭಟ್, ಎಸ್. ದತ್ತಾತ್ರಿ, ಎಸ್.ಎಸ್ ಜ್ಯೋತಿಪ್ರಕಾಶ್, ನಾಗಸಮುದ್ರ ಷಡಾಕ್ಷರಿ, ಸಾಲೂರು ರುದ್ರಮೂರ್ತಿ, ರಾಜಪ್ಪ, ಹನುಮಂತಪ್ಪ, ಮಂಜುನಾಥ, ಸ್ಥಳೀಯ ಮುಖಂಡರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಜಿ. ಆನಂದ ಕುಮಾರ್, ಮಂಗೋಟೆ ರುದ್ರೇಶ್, ಬಿ.ಜಿ ರಾಮಲಿಂಗಯ್ಯ, ಮಂಜುನಾಥ್, ಕೂಡ್ಲಿಗೆರೆ ಹಾಲೇಶ್, ವಿ.ಕದಿರೇಶ್, ಅನಿತಾ ಮಲ್ಲೇಶ್, ಅನುಪಮ ಚನ್ನೇಶ್, ಮಂಡಳಿ ನಿರ್ದೇಶಕ ವಿನಾಯಕ, ನೀರಾವರಿ ಇಲಾಖೆ ಮುಖ್ಯ ಅಭಿಯಂತರ ಶಿವಾನಂದ ಬಣಕಾರ್, ಅಧೀಕ್ಷಕ ಕಾರ್ಯಪಾಲಕ ಅಭಿಯಂತರ ಚಂದ್ರಹಾಸ, ವೆಂಕಟೇಶ್ ನಾಯ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.