ಭದ್ರಾವತಿ ನಗರಸಭೆ ೨೯ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ನ್ಯಾಯವಾದಿ ಲೋಹಿತಾ ನಂಜಪ್ಪ ಆಯ್ಕೆಯಾಗಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಭದ್ರಾವತಿ, ಆ. ೧೬: ನಗರಸಭೆ ವಾರ್ಡ್.೨೯ಕ್ಕೆ ಸೆ.೩ರಂದು ನಡೆಯಲಿರುವ ಚುನಾವಣೆಗೆ ನ್ಯಾಯವಾದಿ ಲೋಹಿತಾ ನಂಜಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಜನ್ನಾಪುರ ನಿವಾಸಿ, ನಗರದ ಪ್ರಸಿದ್ದ ನ್ಯಾಯವಾದಿಗಳಲ್ಲಿ ಒಬ್ಬರಾಗಿದ್ದ ದಿವಂಗತ ಎ.ಬಿ ನಂಜಪ್ಪ ಅವರ ಪತ್ನಿ ಲೋಹಿತಾ ನಂಜಪ್ಪ ಸಹ ನ್ಯಾಯವಾದಿಯಾಗಿದ್ದು, ನೋಟರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ತಾಲೂಕು ಒಕ್ಕಲಿಗರ ಸಂಘ, ಹಳೇನಗರದ ಮಹಿಳಾ ಸೇವಾ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇದೀಗ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ವಾರ್ಡಿನ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಆಯೋಗ ನಗರಸಭೆ ೩೫ ವಾರ್ಡ್‌ಗಳಿಗೆ ಏಪ್ರಿಲ್‌ನಲ್ಲಿ ಚುನಾವಣೆ ಘೋಷಿಸಿತ್ತು. ವಾರ್ಡ್ ನಂ. ೨೯ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ ಶೃತಿ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದರು. ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಆಯೋಗ ಚುನಾವಣೆಯನ್ನು ರದ್ದುಗೊಳಿಸಿತ್ತು.
ಇದೀಗ ಪುನಃ ಚುನಾವಣೆ ಘೋಷಣೆಯಾಗಿದ್ದು, ಸೋಮವಾರ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ನಾಮಪತ್ರ ಸಲ್ಲಿಸಲು ಆ.೨೩ ಹಾಗು ನಾಮಪತ್ರ ಹಿಂಪಡೆಯಲು ಆ. ೨೬ ಕೊನೆಯ ದಿನವಾಗಿದೆ. ಸೆ.೩ರಂದು ಮತದಾನ ನಡೆಯಲಿದ್ದು, ಸೆ.೬ರಂದು ಮತ ಎಣಿಕೆ ನಡೆಯಲಿದೆ.
ಈಗಾಗಲೇ ೩೪ ವಾರ್ಡ್‌ಗಳ ಪೈಕಿ ಕಾಂಗ್ರೆಸ್ ಅತಿ ಹೆಚ್ಚು ೧೮ ಸ್ಥಾನಗಳನ್ನು, ಜೆಡಿಎಸ್ ೧೧ ಸ್ಥಾನಗಳನ್ನು ಮತ್ತು ಬಿಜೆಪಿ ೪ ಸ್ಥಾನಗಳನ್ನು ಪಡೆದುಕೊಂಡಿದ್ದು, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಈ ವಾರ್ಡ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎನ್ನಲಾಗಿದ್ದು, ಉಳಿದಂತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪ್ರತಿಷ್ಠೆಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿದೆ.