ಭದ್ರಾವತಿ ನಗರದ ಬಿ.ಎಚ್ ರಸ್ತೆ ಖಾಸಗಿ ಬಸ್ ನಿಲ್ದಾಣದಲ್ಲಿ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು.
ಭದ್ರಾವತಿ, ಸೆ. ೩: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಬಡವರ ಬಾಳಿನ ಬೆಳಕಾಗಿದ್ದರು. ಎಲ್ಲಾ ಜಾತಿ, ಜನಾಂಗದವರೊಂದಿಗೆ ಗುರುತಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಅವರು ನಮ್ಮೆಲ್ಲರ ನೆನಪಿನಲ್ಲಿ ಇಂದಿಗೂ ಉಳಿದುಕೊಂಡಿದ್ದಾರೆಂದು ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಹೇಳಿದರು.
ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ ಖಾಸಗಿ ಬಸ್ ನಿಲ್ದಾಣದಲ್ಲಿ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಪ್ಪಾಜಿ ಅವರು ರಾಜಕೀಯ ಕುಟುಂಬದ ಹಿನ್ನಲೆಯಲ್ಲಿ ಬಂದವರಲ್ಲ. ಕಾರ್ಮಿಕನಾಗಿ ಬಡವರ ಕಷ್ಟಗಳನ್ನು ಅರಿತುಕೊಂಡವರು. ಈ ಹಿನ್ನಲೆಯಲ್ಲಿ ಕೊನೆಯವರೆಗೂ ಬಡವರಿಗಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಅಲ್ಲದೆ ರಾಜಕೀಯ ನೆಲೆ ಇಲ್ಲದ ನೂರಾರು ಜನರಿಗೆ ನೆಲೆ ಕಲ್ಪಿಸಿಕೊಟ್ಟಿದ್ದರು. ಕ್ಷೇತ್ರದ ಬಡ ವರ್ಗದವರು ಇವರ ಸ್ಥಾನದಲ್ಲಿ ಬೇರೆ ಯಾರನ್ನು ಕಾಣಲು ಸಾಧ್ಯವಿಲ್ಲ ಎಂದರು.
ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಧರ್ಮರಾಜ್ ನಿರೂಪಿಸಿದರು.
ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಂಜುಂಡೇಗೌಡ, ನಗರಸಭಾ ಸದಸ್ಯರಾದ ಮಂಜುಳ ಸುಬ್ಬಣ್ಣ, ಬಸವರಾಜ ಬಿ. ಆನೇಕೊಪ್ಪ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ರಾಧಾ, ಅನ್ನಪೂರ್ಣ ಸತೀಶ್, ಫೀರ್ ಷರೀಫ್, ರಾಜು ಎಸ್ ಹೋಬಳಿದಾರ್, ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.