ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಕರ್ನಾಟಕ ಜಾನಪದ ಪರಿಷತ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನಾಚರಣೆ, ಗುರುಗಳಿಗೆ ಅಭಿನಂದನೆ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ಎಸ್.ಎಸ್ ವಿಜಯಾದೇವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಅ. ೩: ಮಹಾತ್ಮರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿರದೆ ಅವರ ಆದರ್ಶತನಗಳು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿರಬೇಕೆಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
ಅವರು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಕರ್ನಾಟಕ ಜಾನಪದ ಪರಿಷತ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನಾಚರಣೆ, ಗುರುಗಳಿಗೆ ಅಭಿನಂದನೆ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದಿನಿಂದಲೂ ನಾವುಗಳು ಮಹಾತ್ಮರ ಜಯಂತಿಗಳನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಕುರಿತು ಮಾತನಾಡುತ್ತೇವೆ. ಆದರೆ ಅವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಗಮನ ಹರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ಜಾನಪದ ಸಂಸ್ಕೃತಿಗಳು ನಶಿಸಿ ಹೋಗುತ್ತಿದ್ದು, ಇವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರುಗಳಿಗೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಮಹಿಳೆಯರು ಕೇವಲ ಕುಟುಂಬಕ್ಕೆ ಮಾತ್ರ ಸೀಮಿತವಾಗಿರದೆ ಸಮಾಜದ ಮುಖ್ಯವಾಹಿನಿಯಲ್ಲೂ ಗುರುತಿಸಿಕೊಂಡು ತಮ್ಮ ಸೇವೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಮಹಿಳಾ ಸೇವಾ ಸಮಾಜ ವೇದಿಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ಎಸ್.ಎಸ್ ವಿಜಯಾದೇವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್‌ರಾವ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಟಿ.ಜಿ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಹಿರಿಯೂರು ಕೆ.ಟಿ ಪ್ರಸನ್ನ, ಸಮಾಜದ ಕಾರ್ಯದರ್ಶಿ ಶೋಭಾ ಗಂಗರಾಜ್, ಖಜಾಂಚಿ ಜಯಂತಿ ನಾಗರಾಜ್ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶೋಭಾ ಮತ್ತು ತಂಡದವರು ಪ್ರಾರ್ಥಿಸಿದರು. ಶಕುಂತಲ, ಇಂದಿರಾ ಆಥಿತಿಗಳನ್ನು ಪರಿಚಯ ಮಾಡಿದರು. ಶಾರದಾ ಶ್ರೀನಿವಾಸ್ ನಿರೂಪಿಸಿದರು. ಕಮಲಾ ಕುಮಾರಿ ವಂದಿಸಿದರು.
ಸಮಾಜದ ಸದಸ್ಯೆಯರು ಉತ್ತರ ಕನ್ನಡ ಜಾನಪದ ಸೊಗಡಿನ ತವರು ಮನೆ ಜಾನಪದ ರೂಪಕ ಪ್ರಸ್ತುತ ಪಡಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುವ ಜೊತೆಗೆ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು.