ಹೊರಬಿಡುವಂತೆ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ, ಆಕ್ರೋಶ
ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆಯಲ್ಲಿ ನಿಗಾದಲ್ಲಿರುವವರು ಶುಕ್ರವಾರ ಮುಖ್ಯ ದ್ವಾರದ ಬಳಿ ಜಮಾಯಿಸಿ ಹೊರಬಿಡುವಂತೆ ಭದ್ರತಾ ಸಿಬ್ಬಂಧಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು.
ಭದ್ರಾವತಿ, ಡಿ. ೧೦: ಹಳೇನಗರದ ನಿರ್ಮಲ ಆಸ್ಪತ್ರೆಯ ೨೪ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಅಲ್ಲದೆ ಪ್ರಸ್ತುತ ಅಸ್ಪತ್ರೆ ಒಳ ಭಾಗದಲ್ಲಿರುವ ಸುಮಾರು ೨೫೦ ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಈ ನಡುವೆ ಶುಕ್ರವಾರ ಆಸ್ಪತ್ರೆಯಲ್ಲಿರುವವರು ಹೊರಬರಲು ಮುಖ್ಯ ದ್ವಾರದ ಬಳಿ ಜಮಾಯಿಸಿ ಕೆಲ ಸಮಯ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಈ ಸಂಬಂಧ ಸೆರೆ ಹಿಡಿಯಲಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ತಹಸೀಲ್ದಾರ್ ಆರ್. ಪ್ರದೀಪ್, ಆಸ್ಪತ್ರೆಯಲ್ಲಿರುವ ೨೫೦ ಮಂದಿಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಎಲ್ಲರನ್ನು ನಿಗಾದಲ್ಲಿರಿಸಲಾಗಿದ್ದು, ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಆಸ್ಪತ್ರೆ ಆಡಳಿತ ಮಂಡಳಿಯವರಿಗೆ ಸೂಚಿಸಲಾಗಿದೆ. ಅಲ್ಲದೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಒಂದು ವೇಳೆ ನಿಗಾದಲ್ಲಿರುವವರು ಹೊರಗೆ ಬಂದಲ್ಲಿ ಅವರಲ್ಲಿ ಸೋಂಕು ಇದ್ದಲ್ಲಿ ಇಡೀ ಸಮುದಾಯಕ್ಕೆ ಹರಡುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಯಾರನ್ನು ಹೊರಗೆ ಬಿಡದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ಮತ್ತೊಂದೆಡೆ ಆಸ್ಪತ್ರೆಯಲ್ಲಿರುವವರು ನಮಗೆ ಊಟ, ನೀರು ಏನನ್ನು ಕೊಡದೆ ಕೂಡಿ ಹಾಕಲಾಗಿದೆ ಎಂದು ಆರೋಪಿಸಿ ತಕ್ಷಣ ನಮ್ಮನ್ನು ಹೊರ ಬಿಡುವಂತೆ ಆಗ್ರಹಿಸಿ ಮುಖ್ಯದ್ವಾರದ ಬಳಿ ತಳ್ಳಾಟ ನಡೆಸಿ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿರುವುದು. ಅಲ್ಲದೆ ಹೊರಭಾಗದಲ್ಲಿ ಕುಟುಂಬ ಸಂಬಂಧಿಕರು ಸಹ ಭದ್ರತಾ ಸಿಬ್ಬಂಧಿಗಳ ವಿರುದ್ಧ ಹರಿಹಾಯ್ದು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳ ಮೂಲಕ ಎಲ್ಲೆಡೆ ಹರಿದಾಡುತ್ತಿದೆ.