ಅತಿಥಿ ಉಪನ್ಯಾಸಕರಿಂದ ವಿಧಾನಸೌಧದವರೆಗೆ ಪಾದಯಾತ್ರೆಗೆ ಕಾಂಗ್ರೆಸ್ ಬೆಂಬಲ
![](https://blogger.googleusercontent.com/img/b/R29vZ2xl/AVvXsEjSR_q5mzszGJhOWWkGVikROBLIaUeTAwT2Kw_0tP5hz5g8ZzenstbqoSu3-4YlY5Dr2tunzGP1LBDsI-1XW73oaGLp5JfQ0ssWwnK6PU7Z7rgJmFgn7oHS0pnqJblBoj4Lv5HakatF1PFf/w400-h319-rw/D2-BDVT6-730245.jpg)
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೇವೆಯನ್ನು ಕಾಯಂ ಮಾಡಲು ಹಾಗು ಹರ್ಷ ಶಾನುಬೋಗ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ವಿಧಾನಸೌಧದವರೆಗೆ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಗೆ ಭಾನುವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಬೆಂಬಲ ಸೂಚಿಸಿ ಮಾತನಾಡಿದರು.
ಭದ್ರಾವತಿ, ಜ. ೨: ಸರ್ಕಾರ ಯಾವುದೇ ಕಾರಣಕ್ಕೂ ಹೋರಾಟ ನಡೆಸುವವರನ್ನು ದಬ್ಬಾಳಿಕೆ ಮೂಲಕ ಹತ್ತಿಕ್ಕುವ ಕೆಲಸ ಮಾಡಬಾರದು. ತಕ್ಷಣ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೇವೆಯನ್ನು ಕಾಯಂ ಮಾಡಲು ಹಾಗು ಹರ್ಷ ಶಾನುಬೋಗ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ವಿಧಾನಸೌಧದವರೆಗೆ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಗೆ ಭಾನುವಾರ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬೆಂಬಲ ಸೂಚಿಸಿ ಅವರು ಮಾತನಾಡಿದರು.
ಸ್ನಾತಕೋತ್ತರ ಪದವಿ ಪೂರೈಸಿಕೊಂಡು ಉಪನ್ಯಾಸಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯತನ ವಹಿಸುತ್ತಿರುವುದು ಸರಿಯಲ್ಲ. ವೇತನವನ್ನು ಸಹ ಸರಿಯಾಗಿ ನೀಡದೆ, ಇನ್ನಿತರ ಬೇಡಿಕೆಗಳನ್ನು ಈಡೇರಿಸದೆ, ಉದ್ಯೋಗದ ಭದ್ರತೆ ನೀಡದೆ ಇರುವುದು ಪ್ರಸ್ತುತ ಅತಿಥಿ ಉಪನ್ಯಾಸಕರನ್ನು ಬೀದಿಗೆ ಬರುವಂತೆ ಮಾಡಿದೆ. ಕಳೆದ ಸುಮಾರು ೨ ವರ್ಷಗಳಿಂದ ಕೋವಿಡ್-೧೯ ಮಹಾಮಾರಿಯಿಂದಾಗಿ ಬದುಕು ಅತಂತ್ರವಾಗಿದೆ. ಶಾಲಾ-ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಡೆಯುತ್ತಿರುವುದೇ ಹೆಚ್ಚು. ಇಂತಹ ಸಂದರ್ಭದಲ್ಲಿ ಬೇಡಿಕೆಗಳನ್ನು ಈಡೇರಿಸದೆ ಹಠಮಾರಿತನ ಧೋರಣೆ ಅನುಸರಿಸುತ್ತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸದಾ ಬೆಂಬಲವಾಗಿದ್ದು, ಈಗಾಗಲೇ ವಿರೋಧ ಸಿದ್ದರಾಮಯ್ಯನವರು ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದೀಗ ನಡೆಯುತ್ತಿರುವ ಪಾದಯಾತ್ರೆಗೂ ನಮ್ಮ ಬೆಂಬಲವಿದೆ ಎಂದರು.
ರಾಘವೇಂದ್ರ ಸರಾಟೆ, ಸಂಪತ್‌ಕುಮಾರ್, ರಮೇಶ್ ಬರ್ಗೆ, ವಿಶ್ವ ಕುಮಾರ, ನೂರುಲ್ಲಾ ಷರೀಫ್, ನಿತಿನ್, ಹರ್ಷ, ಜ್ಯೋತಿ, ರುದ್ರೇಶ್ ಛಲವಾದಿ, ಲೋಕೇಶ್ ಗುಬ್ಬಿ, ಅರವಿಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.