ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೂಚನೆ
ಭದ್ರಾವತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ಶುಕ್ರವಾರ ಸಭೆ ನಡೆಸಲಾಯಿತು.
ಭದ್ರಾವತಿ, ಜ. ೭: ತಾಲೂಕಿನಾದ್ಯಂತ ಕೋವಿಡ್-೧೯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿ, ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯದ ಕರ್ಪ್ಯೂ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಹೆಚ್ಚಿನ ಗಮನ ಹರಿಸಬೇಕು. ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕು. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಟ್ಟು. ಎಲ್ಲಾ ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚಿಸಿದರು.
ಉಳಿದಂತೆ ಸರ್ಕಾರದ ಮಾರ್ಗ ಸೂಚಿಯಂತೆ ಉದ್ಯಾನವನ, ವ್ಯಾಯಾಮ ಶಾಲೆ ಸಂಪೂರ್ಣವಾಗಿ ಬಂದ್ ಮಾಡುವುದು. ಹೋಟೆಲ್ ಹಾಗು ರೆಸ್ಟೋರೆಂಟ್‌ಗಳಲ್ಲಿ ಕೇವಲ ಪಾರ್ಸಲ್ ವ್ಯವಸ್ಥೆ ಕಲ್ಪಿಸಿಕೊಡುವುದು. ಮದುವೆ ಸಮಾರಂಭಗಳಲ್ಲಿ ಕೇವಲ ೨೦೦ ಜನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕ ಶಶಿಧರ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.