ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-೧೯ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಲಸಿಕೆ ಪಡೆದುಕೊಂಡರು.
ಭದ್ರಾವತಿ, ಜ. ೧೦: ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ೬೦ ವರ್ಷ ಮೇಲ್ಪಟ್ಟವರಿಗೆ ಕೋವಿಡ್-೧೯ ಬೂಸ್ಟರ್ (ಮುನ್ನಚ್ಚರಿಕೆ) ಡೋಸ್ ಲಸಿಕೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಹೇಳಿದರು.
ಅವರು ಸೋಮವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-೧೯ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
೨ನೇ ಡೋಸ್ ಲಸಿಕೆ ಪಡೆದ ೯ ತಿಂಗಳು ಅಥವಾ ೩೯ ವಾರಗಳನ್ನು ಪೂರೈಸಿರುವವರು ಮಾತ್ರ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅರ್ಹರು. ಈ ಹಿಂದೆ ಎರಡು ಡೋಸ್‌ಗಳಲ್ಲಿ ಪಡೆದಿರುವ ಲಸಿಕೆಯನ್ನೇ ಮುನ್ನಚ್ಚರಿಕೆ ಲಸಿಕೆಯಾಗಿ ಉಚಿತವಾಗಿ ನೀಡಲಾಗುವುದು ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಪ್ರಕಾಶ್ ಮಾತನಾಡಿ, ಕೋವಿಡ್-೧೯ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ಬರದಂತೆ ತಡೆಗಟ್ಟಬಹುದಲ್ಲದೆ ಅದರ ತೀವ್ರತೆಯನ್ನು ಕಡಿಮೆ ಮಾಡಬಹುದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ನಗರ ಸಭೆ ಅಧ್ಯಕ್ಷೆ ಗೀತ ರಾಜ್‌ಕುಮಾರ್ ಮಾತನಾಡಿ, ಸರ್ಕಾರ ಕಲ್ಪಿಸಿರುವ ಈ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಂಡು ತಮ್ಮ ಆರೋಗ್ಯ ರಕ್ಷಿಸಿಕೊಳ್ಳಬೇಕೆಂದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ ನಿರೂಪಿಸಿದರು. ವಂದಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ, ಬಿ.ವಿ ರೇವತಿ, ವಸಂತ, ಆಶಾ ಮೆಂಟರ್ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.