ಭದ್ರಾವತಿ, ಫೆ. ೧೩: ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ತಹಸೀಲ್ದಾರ್ ಆರ್. ಪ್ರದೀಪ್ರವರು ಫೆ.೧೪ರಂದು ಬೆಳಿಗ್ಗೆ ೬ ಗಂಟೆಯಿಂದ ಫೆ.೧೫ರ ರಾತ್ರಿ ೧೦ ಗಂಟೆವರೆಗೆ ಎಲ್ಲಾ ಶಾಲಾ-ಕಾಲೇಜುಗಳ ಆವರಣದಿಂದ ೨೦೦ ಮೀಟರ್ ಅಂತರದಲ್ಲಿ ಕಲಂ ೧೪೪ರ ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ.
ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ನಿರ್ದೇಶನಗಳಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಈ ನಡುವೆ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಬೆಂಬಲಿಸಿ ಅಥವಾ ವಿರೋಧಿಸಿ ಪ್ರತಿಭಟನೆ ಅಥವಾ ಮೆರವಣಿಗೆಗಳು ನಡೆಯುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಕಂದಾಯ, ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನಂತರ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ತಾಲೂಕಿನಲ್ಲಿ ನಿಷೇದಾಜ್ಞೆ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪ್ರತಿಯೊಬ್ಬರು ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಕೋರಿದ್ದಾರೆ.