Wednesday, February 16, 2022

ನಾಡೋಜ ಡಾ. ಚೆನ್ನವೀರ ಕಣವಿಗೆ ನುಡಿನಮನ

ಭದ್ರಾವತಿ ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಭದ್ರಾವತಿ, ಫೆ. ೧೬: ನಾಡಿನ ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ.
    ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಪರಿಷತ್ ಕಾರ್ಯದರ್ಶಿ ಎಚ್. ತಿಮ್ಮಪ್ಪ, ಕಾರ್ಯಕಾರಿ ಸಮಿತಿ ಸದಸ್ಯೆ ಇಂದಿರಾ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಸುಮತಿ ಕಾರಂತ್, ಪ್ರಧಾನ ಕಾರ್ಯದರ್ಶಿ ಪೀಟರ್, ಕಲಾವಿದ ಗುರು ಹಾಗೂ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಸಾಹಿತ್ಯಭಿಮಾನಿಗಳು ಉಪಸ್ಥಿತರಿದ್ದರು.
    ಸಂತಾಪ :
    ಸಮನ್ವಯ ಕವಿ ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ವೀರಶೈವ ಮಠಾಧಿಪತಿ ಪರಿಷತ್ ಸಂತಾಪ ಸೂಚಿಸಿದೆ.
    ಪರಿಷತ್ ಪರವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಕಣವಿಯವರ ನಿಧನಕ್ಕೆ ಸಂತಾಪ ಸೂಚಿಸಿ ಗೌರವ ಸಲ್ಲಿಸಿದ್ದಾರೆ.

ಸಂಚಿಯ ಹೊನ್ನಮ್ಮ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಪ್ರೌಢಶಾಲಾ ವಿದ್ಯಾರ್ಥಿನಿಯರ ಮನವೊಲಿಕೆ, ತರಗತಿಗಳಿಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದ ಕಾಲೇಜು ವಿದ್ಯಾರ್ಥಿನಿಯರು

ಭದ್ರಾವತಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜು.

    ಭದ್ರಾವತಿ, ಫೆ. ೧೬: ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ನಗರದಲ್ಲಿ ಬುಧವಾರ ಸಹ ಮುಂದುವರೆದಿದ್ದು, ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬಂದ ಪ್ರೌಢಶಾಲಾ ವಿಭಾಗದ ೮ ರಿಂದ ೧೦ನೇ ತರಗತಿವರೆಗಿನ ಸುಮಾರು ೭೦ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ಸುಮಾರು ೩ ಗಂಟೆಗೂ ಹೆಚ್ಚು ಸಮಯ ಪ್ರತಿಭಟನೆ ನಡೆಸಿದರು.
    ಎಂದಿನಂತೆ ಕಾಲೇಜಿಗೆ ಆಗಮಿಸಿದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಮುಂದಾಗಿ ಹಿಜಾಬ್ ಧರಿಸಿಕೊಂಡು ತರಗತಿಗಳಿಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಹಾಗು ಇನ್ನಿತರ ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ಸೂಕ್ತ ಕಾನೂನು ತಿಳುವಳಿಕೆ ನೀಡುವ ಜೊತೆಗೆ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಆದರೆ ೧೧ ಕಾಲೇಜು ವಿದ್ಯಾರ್ಥಿನಿಯರು ಮನವೊಲಿಕೆಗೆ ಸ್ಪಂದಿಸದೆ ಮನೆಗಳಿಗೆ ಹಿಂದಿರುಗಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ತಹಸೀಲ್ದಾರ್ ಅವರೊಂದಿಗೆ ನಾವು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದೆ ರೀತಿ ಪಕ್ಕದಲ್ಲಿರುವ ಮೌಲಾನ ಆಜಾದ್ ಶಾಲೆಯಲ್ಲೂ ಕ್ರಮ ಕೈಗೊಳ್ಳಲಾಗುವುದು. ಈ ಶಾಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬರುವ ಸುಮಾರು ೧೧೫ ವಿದ್ಯಾರ್ಥಿನಿಯರಿದ್ದು, ಎಲ್ಲರೂ ಸಹ ಹಿಜಾಬ್ ತೆಗೆದಿಟ್ಟು ತರಗತಿಗಳಿಗೆ ಹಾಜರಾಗುವಂತೆ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ದೊಣಬಘಟ್ಟ ಸರ್ಕಾರಿ ಶಾಲೆಯಲ್ಲೂ ಇದೆ ರೀತಿ ಕ್ರಮ ಕೈಗೊಳ್ಳಲಾಗುವುದು. ಗುರುವಾರ ವಿದ್ಯಾರ್ಥಿನಿಯರಿಗೆ ಈ ಸಂಬಂಧ ಅವಕಾಶ ನೀಡಲಾಗುವುದು ಎಂದರು.
    ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಮಾತನಾಡಿ, ತಹಸೀಲ್ದಾರ್ ಅವರೊಂದಿಗೆ ನಾವು ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದ ಸುಮಾರು ೧೧ ವಿದ್ಯಾರ್ಥಿನಿಯರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಲಾಯಿತು. ಆದರೆ ವಿದ್ಯಾರ್ಥಿನಿಯರ ಮನಸ್ಥಿತಿ ವಿಭಿನ್ನವಾಗಿದ್ದು, ಅವರು ಯಾರ ಮಾತನ್ನು ಕೇಳುವ ಸ್ಥಿತಿಯಲ್ಲಿಲ್ಲ. ನಮಗೆ ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ ಎನ್ನುವ ಮೂಲಕ ಮನೆಗಳಿಗೆ ಹಿಂದಿರುಗಿದರು. ಈ ವಿದ್ಯಾರ್ಥಿನಿಯರಿಗೆ ನಾಳೆ ಸಹ ಅವಕಾಶ ನೀಡಲಾಗಿದ್ದು, ತಮ್ಮ ತಮ್ಮ ಪೋಷಕರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಕಾಲೇಜಿಗೆ ಬರಬಹುದಾಗಿದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲಾ-ಕಾಲೇಜುಗಳ ಆವರಣದಲ್ಲಿ ನಿಷೇದಾಜ್ಞೆ ಜಾರಿಯಲ್ಲಿದೆ. ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಂಚಿಯ ಹೊನ್ನಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ತರಗತಿಗಳಿಗೆ ಹಾಜರಾಗದೆ ಹಿಂದಿರುಗಿರುವ ಕೆಲವು ವಿದ್ಯಾರ್ಥಿಗಳ ಮನವೊಲಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿ ಆ ವಿದ್ಯಾರ್ಥಿನಿಯರಿಗೂ ಕಾಲಾವಾಕಾಶ ನೀಡಲಾಗಿದ್ದು, ಪೋಷಕರ ಜೊತೆ ಚರ್ಚಿಸಲು ಸೂಚಿಸಲಾಗಿದೆ ಎಂದರು.
    ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯಕ್, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಉಪಸ್ಥಿತರಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಡ ಕುಟುಂಬಕ್ಕೆ ಶಾಸಕರಿಂದ ೧ ಲಕ್ಷ ರು. ಆರ್ಥಿಕ ನೆರವು

ಭದ್ರಾವತಿ ತಾಲೂಕಿನ ಮಾರುತಿ ನಗರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿ ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾಗದ ನಗರದ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಉಮೇಶ್ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವೈಯಕ್ತಿಕವಾಗಿ ೧ ಲಕ್ಷ ರು. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
    ಭದ್ರಾವತಿ, ಫೆ. ೧೬: ತಾಲೂಕಿನ ಮಾರುತಿ ನಗರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿ ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾಗದ ನಗರದ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಉಮೇಶ್ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವೈಯಕ್ತಿಕವಾಗಿ ೧ ಲಕ್ಷ ರು. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
    ಬಡ ಕುಟುಂಬಕ್ಕೆ ಗುತ್ತಿಗೆದಾರರಿಂದ ೪ ಲಕ್ಷ ರು. ಪರಿಹಾರ ಕೊಡಿಸುವ ಜೊತೆಗೆ ಶಾಸಕರು ವೈಯಕ್ತಿಕವಾಗಿ ೧ ಲಕ್ಷ ರು. ನೆರವು ನೀಡುವ ಜೊತೆಗೆ ಉಮೇಶ್‌ರವರ ಪತ್ನಿಗೆ ಅಂಗನವಾಡಿ ಕೇಂದ್ರದಲ್ಲಿ ಸೂಕ್ತ ಉದ್ಯೋಗ ಕೊಡಿಸುವ ಭರವಸೆ ನೀಡಿದರು.
    ಮಾಜಿ ನಗರಸಭಾ ಸದಸ್ಯ ಮಹೇಶ್, ಸ್ಥಳೀಯ ಮುಖಂಡರಾದ ಚುಕ್ಕೇಗೌಡ, ಮಹೇಶ್, ಕಾಗದನಗರ ಕಟ್ಟೆ ಬಾಯ್ಸ್‌ನ ಪ್ರಮುಖರು, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, February 15, 2022

ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೧ನೇ ಜಯಂತ್ಯೋತ್ಸವ


ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಬಂಜಾರ ಸಮಾಜದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಂಗಳವಾರ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೧ನೇ ಜಯಂತ್ಯೋತ್ಸವ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
    ಭದ್ರಾವತಿ, ಫೆ. ೧೫: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಬಂಜಾರ ಸಮಾಜದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಂಗಳವಾರ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೧ನೇ ಜಯಂತ್ಯೋತ್ಸವ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗಣೇಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಉಪ ತಹಸೀಲ್ದಾರ್‌ಗಳಾದ ಮಂಜಾನಾಯ್ಕ, ಅರಸು ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು, ಬಂಜಾರ ಸಮಾಜದ ಪ್ರಮುಖರಾದ ಪ್ರೇಮ್‌ಕುಮಾರ್, ಮೋತಿನಾಯ್ಕ, ಜುಂಜ್ಯಾನಾಯ್ಕ, ಕೃಷ್ಣಾನಾಯ್ಕ, ಪ್ರವೀಣ್‌ನಾಯ್ಕ, ರಮೇಶ್‌ನಾಯ್ಕ, ಚಂದ್ರು, ವೇದೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಶಾಲಾ-ಕಾಲೇಜುಗಳ ಬಳಿ ಫೆ.೧೯ರವರೆಗೆ ನಿಷೇದಾಜ್ಞೆ ಜಾರಿ

    ಭದ್ರಾವತಿ, ಫೆ. ೧೫: ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ತಹಸೀಲ್ದಾರ್ ಆರ್. ಪ್ರದೀಪ್‌ರವರು ಫೆ.೧೬ರಂದು ಬೆಳಿಗ್ಗೆ ೬ ಗಂಟೆಯಿಂದ ಫೆ.೧೯ರ ಸಂಜೆ  ೬ ಗಂಟೆವರೆಗೆ ಎಲ್ಲಾ ಶಾಲಾ-ಕಾಲೇಜುಗಳ ಆವರಣದಿಂದ ೨೦೦ ಮೀಟರ್ ಅಂತರದಲ್ಲಿ ಕಲಂ ೧೪೪ರ ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
    ವಿದ್ಯಾಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಉಂಟಾಗಿರುವ ವಿವಾದದ ಹಿನ್ನಲೆಯಲ್ಲಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ನಿರ್ದೇಶನಗಳಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಈ ನಡುವೆ ಧಾರ್ಮಿಕ ಉಡುಪು(ಹಿಜಾಬ್, ಕೇಸರಿ ಶಾಲು ಇತ್ಯಾದಿ)ಗಳನ್ನು ಧರಿಸುವ ಸಂಬಂಧ ಬೆಂಬಲಿಸಿ ಅಥವಾ ವಿರೋಧಿಸಿ ಪ್ರತಿಭಟನೆ ಅಥವಾ ಮೆರವಣಿಗೆಗಳು ನಡೆಯುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಕಂದಾಯ, ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನಂತರ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ತಾಲೂಕಿನಲ್ಲಿ ನಿಷೇದಾಜ್ಞೆ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪ್ರತಿಯೊಬ್ಬರು ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಕೋರಿದ್ದಾರೆ.

ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಡಾ.ಬಿ.ಎಸ್ ಬಿರಾದಾರ ನೇಮಕ : ನೂತನ ಪರಿಶೀಲನಾ ಸಮಿತಿ ಅಸ್ತಿತ್ವಕ್ಕೆ

    ಭದ್ರಾವತಿ, ಫೆ. ೧೫ : ಕುವೆಂಪು ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಎಸ್ ಬಿರಾದಾರ ಅವರನ್ನು ನೇಮಕಗೊಳಿಸಿ ಮಾನವ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.
    ಪ್ರಸ್ತುತ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಎನ್ ಯೋಗೀಶ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ದೂರ ಶಿಕ್ಷಣ ನಿರ್ದೇಶನಾಲಯದಲ್ಲಿ ಕೋಟ್ಯಾಂತರ ರು. ಬಾಕಿ ಉಳಿಸಿಕೊಂಡು ವಿಶ್ವ ವಿದ್ಯಾನಿಲಯಕ್ಕೆ ನಷ್ಟ ಉಂಟುಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಇದೀಗ ನಿರ್ದೇಶಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.
    ನೂತನ ಪರಿಶೀಲನಾ ಸಮಿತಿ:
    ದೂರ ಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಪ್ರವೇಶಾತಿ ಶುಲ್ಕ, ಅಧ್ಯಯನ ಕೇಂದ್ರಗಳಿಂದ ಬರಬೇಕಾದ ಬಾಕಿ ಶುಲ್ಕಗಳ ವಿವರ ಹಾಗು ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿ ವರದಿ ನೀಡಲು ವಿಶ್ವವಿದ್ಯಾನಿಲಯ ನೂತನ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
    ಸಮಿತಿ ಅಧ್ಯಕ್ಷರಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನರ್ ಪ್ರೊ. ರಿಯಾಜ್ ಮಹಮೂದ್ ಮತ್ತು ಸದಸ್ಯರಾಗಿ ಸ್ನಾತಕೋತ್ತರ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ. ವೆಂಕಟೇಶ್ವರಲು, ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್, ಶಿಕ್ಷಣ ಮಂಡಳಿ ಸದಸ್ಯ ಎಸ್. ಚಂದ್ರಶೇಖರ್ ಹಾಗು ಸಂಚಾಲಕರಾಗಿ ದೂರ ಶಿಕ್ಷಣ ನಿರ್ದೇಶನಾಲಯದ ಉಪ ಕುಲಸಚಿವರನ್ನು ನೇಮಕಗೊಳಿಸಲಾಗಿದೆ ಎಂದು ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.

ಸಮವಸ್ತ್ರ ವಿವಾದ : ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಭದ್ರಾವತಿ ತಾಲೂಕಿನ ದೊಣಬಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ಸಮವಸ್ತ್ರ ವಿವಾದ ಕಾಣಿಸಿಕೊಂಡಿದ್ದು, ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಶಾಲೆ ಹಾಗು ಗ್ರಾಮ ಪಂಚಾಯಿತಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಫೆ. ೧೫ : ಇದೀಗ ಪುನಃ ತಾಲೂಕಿನಲ್ಲಿ ಶಾಲಾ ಸಮವಸ್ತ್ರ ವಿವಾದ ಕಾಣಿಸಿಕೊಂಡಿದ್ದು, ಅತಿ ಹೆಚ್ಚು ಮುಸ್ಲಿಂ ಸಮುದಾಯದವರು ವಾಸಿಸುತ್ತಿರುವ ದೊಣಬಘಟ್ಟ ಗ್ರಾಮ ಪಂಚಾಯಿತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು ಶಾಲೆ ಹಾಗು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
    ಎಂದಿನಂತೆ ಹಿಜಾಬ್ ಧರಿಸಿಕೊಂಡು ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಶಾಲೆ ಆವರಣ ಪ್ರವೇಶಿಸಲು ಶಾಲಾ ಆಡಳಿತ ಮಂಡಳಿ ನಿರಾಕರಿಸಿದ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಕೊನೆಗೆ ಗ್ರಾಮ ಪಂಚಾಯಿತಿ ಕಛೇರಿವರೆಗೂ ಮೆರವಣಿಗೆ ನಡೆಸಿ ಅಲ್ಲಿಯೂ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿನಿಯರಿಗೆ ಮುಸ್ಲಿಂ ಸಮುದಾಯದ ಪುರುಷ ವಿದ್ಯಾರ್ಥಿಗಳು ಸಹ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.
    ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಕೊನೆಗೆ ಶಾಲೆಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದರು. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
    ಈ ಹಿಂದೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಕಾಣಿಸಿಕೊಂಡಿದ್ದು, ಕೊನೆಗೆ ಒಂದು ಹಂತಕ್ಕೆ ಬಂದು ತಲಿಪಿತ್ತು. ಈ ನಡುವೆ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ನಿಯಂತ್ರಣಕ್ಕೆ ಬಂದಿದೆ.