ಭದ್ರಾವತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿಗೋಷ್ಠಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
ಭದ್ರಾವತಿ, ಮಾ. ೨೫: ಕನ್ನಡ ಸಾಹಿತ್ಯ, ಭಾಷೆ ಬೆಳೆವಣಿಗೆಗೆ ಪ್ರೋತ್ಸಾಹ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
ಅವರು ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆ ತನ್ನದೇ ಆದ ಪರಂಪರೆಯನ್ನು ಹೊಂದಿದ್ದು, ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಇದನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಸಾಹಿತ್ಯ, ಭಾಷೆ ಮತ್ತಷ್ಟು ಬೆಳವಣಿಗೆ ಹೊಂದುವ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ ಎಂದರು.
ಪ್ರಸ್ತುತ ನಾವು ಮಕ್ಕಳನ್ನು ಕೇವಲ ಪರೀಕ್ಷಾ ಸಿದ್ದತೆಗಾಗಿ ತಯಾರಿ ಮಾಡುತ್ತಿದ್ದೇವೆಯೇ ಹೊರತು ಅವರಲ್ಲಿನ ಜ್ಞಾನಾರ್ಜಾನೆ ವೃದ್ಧಿಸುವ ಕೆಲಸ ಮಾಡುತ್ತಿಲ್ಲ. ಶಾಲಾ ಹಂತದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಕೆಲಸ ಶಿಕ್ಷಕರು ಮಾಡಬೇಕಾಗಿದೆ. ಇದಕ್ಕೆ ಪೂರಕವಾಗಿ ಮನೆಗಳಲ್ಲಿ ಪೋಷಕರು ಸಹ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಅಲ್ಲದೆ ಸಾಹಿತ್ಯ ಪರಿಷತ್ ಸಹ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಹಿತ್ಯಪರ ಕಾರ್ಯಕ್ರಮಗಳನ್ನು ಹೆಚ್ಚಾಗಿ ರೂಪಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಂ. ಜಗದೀಶ್, ಹಿರಿಯ ಸಾಹಿತಿಗಳಾದ ಜೆ.ಎನ್ ಬಸವರಾಜಪ್ಪ, ಬಿ. ಕಾಂತಪ್ಪ, ನರೇಂದ್ರ ಘೋರ್ಪಡೆ, ಭದ್ರಾ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಬಿ.ಎಚ್ ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಎಚ್. ತಿಮ್ಮಪ್ಪ ಸ್ವಾಗತಿಸಿದರು. ಸುಮಾರು ೨೨ ಕವಿಗಳು ಸ್ವರಚಿತ ಕವನ ವಾಚಿಸಿದರು.