ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೨೫ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮವನ್ನು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಮಾ. ೨೬: ಶರಣರು ೧೨ನೇ ಶತಮಾನದಲ್ಲಿ ಸಾಮಾಜಿಕ ಪ್ರಜ್ಞೆ ಮೂಲಕ ನವ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದರು. ಆದರೆ ಇಂದಿಗೂ ನಾವುಗಳು ಅವರ ಆಶಯಗಳನ್ನು ಅರಿತುಕೊಂಡಿಲ್ಲ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
ಅವರು ಶನಿವಾರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೨೫ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಗತ್ತಿಗೆ ಶರಣರು ನೀಡಿರುವ ಕೊಡುಗೆ ಅಪಾರವಾಗಿದೆ. ಶರಣರು ತಮ್ಮ ಜೀವನ ಚರಿತ್ರೆಗಳನ್ನು ಬರೆದಿಟ್ಟುಕೊಳ್ಳಲಿಲ್ಲ ಬದಲಾಗಿ ಚಾರಿತ್ರ್ಯ ವಂತರಾಗಿ ಬದುಕಿ ಇಂದಿಗೂ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಕಾಯಕದಿಂದ ವಚನ ಸಾಹಿತ್ಯ ರೂಪುಗೊಂಡಿದ್ದು, ಈ ಸಾಹಿತ್ಯ ಸಮಾಜ ಬದಲಿಸುವ ಶಕ್ತಿ ಹೊಂದಿದೆ. ಪ್ರತಿಯೊಂದು ವಚನ ಸಹ ಸಾಮಾಜಿಕ ಕಾಳಜಿಯನ್ನು ಹೊಂದಿದ್ದು, ವಚನಗಳು ಯಾವುದೇ ದುರುದ್ದೇಶದಿಂದ ಕೂಡಿಲ್ಲ ಎಂದರು.
ಬಸವಣ್ಣನವರು ಕೆಳವರ್ಗದವರ ಏಳಿಗಾಗಿ ಹೋರಾಟ ನಡೆಸಿದರು. ಈ ಹಿನ್ನಲೆಯಲ್ಲಿ ಅವರು ಸಾಕಷ್ಟು ಟೀಕೆಗಳಿಗೆ ಒಳಗಾಗಬೇಕಾಯಿತು. ಆದರೆ ಅವರು ತಮ್ಮ ನೈಜತೆಯನ್ನು ಕಾಯ್ದುಕೊಂಡು ಸಾಮಾಜಿಕ ಶೋಷಣೆಗಳ ವಿರುದ್ಧ ಚಳುವಳಿ ನಡೆಸಿದರು. ವೈಶ್ಯೆಯನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಮೂಲಕ ಸಮಾನತೆ ಕಲ್ಪಿಸಿಕೊಟ್ಟು ಆ ಮೂಲಕ ಆಕೆಯಿಂದ ವಚನಗಳನ್ನು ರೂಪಿಸಿದ ಕೀರ್ತಿ ವಚನಕ್ಕೆ ಸಾಹಿತ್ಯಕ್ಕೆ ಸಲ್ಲುತ್ತದೆ. ನಾವುಗಳ ಇದೀಗ ಸಮಾನತೆ ಕುರಿತು ಮಾತನಾಡುತ್ತಿದ್ದೇವೆ. ಇದನ್ನು ೧೨ನೇ ಶತಮಾನದಲ್ಲಿಯೇ ಜಾರಿಗೆ ತಂದಿದ್ದ ಶರಣರು ಅತ್ಯಂತ ಶ್ರೇಷ್ಠರಾಗಿದ್ದಾರೆ. ಆತ್ಮ ವಂಚನೆ ಮಾಡಿಕೊಳ್ಳುವ ಬದಲು ಆತ್ಮಾವಲೋಕನ ಮಾಡಿಕೊಂಡು ಬದುಕು, ಆತ್ಮ ವಿಶ್ವಾಸದಿಂದ ಬದುಕು ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್ ಮಹಾರುದ್ರ, ಪ್ರಸ್ತುತ ನಾವುಗಳು ಇಂದು ಸಮಾಜದಲ್ಲಿ ಧರ್ಮ, ಧರ್ಮಗಳ ವೈಷಮ್ಯ ಬೆಳೆಸಿಕೊಳ್ಳುವ ದಾರಿಯಲ್ಲಿ ಸಾಗುತ್ತಿದ್ದೇವೆ. ಆದರೆ ೧೨ನೇ ಶತಮಾನದಲ್ಲಿಯೇ ಸಮಾಜದಲ್ಲಿ ಶರಣರು ಸಮಾನತೆ ಸಮಾಜ ರೂಪಿಸಿಕೊಂಡಿದ್ದರು. ಶರಣರ ಚಿಂತನೆಗಳು, ಆಶಯಗಳು ಇಂದಿಗೂ ಪ್ರಸ್ತುತವಾಗಿವೆ. ನಾವುಗಳು ಶರಣ ದಾರಿಯಲ್ಲಿ ಸಾಗುವಂತಾಗಬೇಕೆಂದರು.
ಶರಣ ಸಾಹಿತ್ಯ ಪರಿಷತ್ ತಾಲೂಕು ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಪೀಳಿಗೆಗೆ ಶರಣ ಸಾಹಿತ್ಯದ ಅಗತ್ಯತೆ ಕುರಿತು ಮನವರಿಕೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಜಿ. ಸವಿತಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು. ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ಕದಳಿ ಮಹಿಳಾ ವೇದಿಕೆ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.