Wednesday, April 6, 2022

ಅರಣ್ಯ ಇಲಾಖೆ ಸರ್ಕಾರಿ ದಿನಗೂಲಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ಭದ್ರಾವತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸರ್ಕಾರಿ ದಿನಗೂಲಿ ನೌಕರರ ಸಂಘದ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಏ. ೬: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸರ್ಕಾರಿ ದಿನಗೂಲಿ ನೌಕರರ ಸಂಘದ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
    ೨೦೧೭ರವರೆಗೆ ಕನಿಷ್ಠ ೧೦ ವರ್ಷ ಕರ್ತವ್ಯ ಪೂರೈಸಿ ಉದ್ಯೋಗದಿಂದ ವಂಚಿತರಾಗಿರುವ ನೌಕರರನ್ನು ಪುನಃ ನೇಮಕ ಮಾಡಿಕೊಳ್ಳಬೇಕು. ದಿನಗೂಲಿಯನ್ನು ನಂಬಿ ಬದುಕುತ್ತಿರುವ ನೌಕರರಿಗೆ ಯಾವುದೇ ಕಾರಣಕ್ಕೂ ಉದ್ಯೋಗ ಕಡಿತಗೊಳಿಸಬಾರದು. ಅಲ್ಲದೆ ಕರ್ತವ್ಯ ಸಮಯ ನಿಗದಿಗೊಳಿಸಬೇಕು. ನೌಕರರನ್ನು ನಿಗದಿತ ಸಮಯ ಮೀರಿ ಕರ್ತವ್ಯಕ್ಕೆ ಬಳಸಿಕೊಳ್ಳಬಾರದು. ೧೦ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಬ್ಯಾಂಕ್ ಖಾತೆ ಮೂಲಕ ಓಚರ್ ಮೇಲೆ ಸಹಿ ಪಡೆದು ವೇತನ ಪಾವತಿಸಬೇಕು. ಎಲ್ಲಾ ಸರ್ಕಾರಿ ದಿನಗೂಲಿ ನೌಕರರಿಗೂ ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ ಕಲ್ಪಿಸಿಕೊಡಬೇಕು. ವೈಯಕ್ತಿಕ ಹಿತಾಸಕ್ತಿ ಹಿನ್ನಲೆಯಲ್ಲಿ ವಿನಾಕಾರಣ ನೌಕರರನ್ನು ಕರ್ತವ್ಯದಿಂದ ವಜಾಗೊಳಿಸಿ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
    ತಕ್ಷಣ ಬೇಡಿಕೆಗಳನ್ನು ಈಡೇರಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
    ಸಂಘದ ಗೌರವಾಧ್ಯಕ್ಷ ಶಿವಕುಮಾರ್, ರಾಜ್ಯಾಧ್ಯಕ್ಷ ಎಚ್.ಕೆ ಹಿಂಚವಳ್ಳಿ ಶಂಕರಪ್ಪ, ಉಪಾಧ್ಯಕ್ಷ ಎಚ್.ಎಸ್ ಹರೀಶ್, ಕಾರ್ಯದರ್ಶಿ ಸಿ. ಬಸವರಾಜು ಮತ್ತು ಖಜಾಂಚಿ ಸಿ. ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



Tuesday, April 5, 2022

ಶಿವಮೊಗ್ಗ ಜಿಲ್ಲೆಯಲ್ಲಿ ಬದಲಾವಣೆ ತರದಿದ್ದಲ್ಲಿ ನಿರುದ್ಯೋಗಿಗಳು ಊರು ಬಿಡಬೇಕಾಗುತ್ತದೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಾಣಿ ಅಭಿಯಾನದ ಸಮಗ್ರ ಮಾಹಿತಿ ಸಂಗ್ರಹ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದರು.
    ಭದ್ರಾವತಿ, ಏ. ೫: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬದಲಾವಣೆ ತರಬೇಕು. ಇಲ್ಲವಾದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುವ ಮೂಲಕ ಊರು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
    ಅವರು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಾಣಿ ಅಭಿಯಾನದ ಸಮಗ್ರ ಮಾಹಿತಿ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಇಂದಿನ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ದ್ವಿಗುಣಗೊಂಡಿಲ್ಲ. ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಯಾವುದೇ ಉದ್ಯೋಗ ಸೃಷ್ಟಿಯಾಗಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕಾರ್ಖಾನೆ ಸ್ಥಾಪನೆಗೊಂಡಿಲ್ಲ ಎಂದು ಆರೋಪಿಸಿದರು.
    ರಾಜ್ಯದಲ್ಲಿ ದಿನದಿಂದ ದಿನಕ್ಕೆ ಧಾರ್ಮಿಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸುವ ಮೂಲಕ ಆಶಾಂತಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಮುಂದುವರೆದು ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಸೌದಿ, ಮುಂಬೈ, ಬೆಂಗಳೂರು ಸೇರಿದಂತೆ ಇತರೆಡೆ ವಲಸೆ ಹೋಗುತ್ತಿದ್ದಾರೆ. ಈ ಪರಿಸ್ಥಿತಿ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸುವ ಲಕ್ಷಣಗಳು ಕಂಡು ಬರುತ್ತಿವೆ. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ  ಆಶಾಂತಿ ವಾತಾವರಣ ನಿರ್ಮಾಣಗುತ್ತಿದ್ದು, ಇಲ್ಲಿನ ಜನರು ಎಚ್ಚೆತ್ತುಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಬದಲಾವಣೆ ತರಬೇಕೆಂದರು.
    ಕಾಂಗ್ರೆಸ್ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಡಿಜಿಟಲ್ ಸದಸ್ಯತ್ವ ನೋಂದಾಣಿಗೆ ಚಾಲನೆ ನೀಡಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ನೋಂದಾಣಿ ನಡೆದಿದ್ದು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸುವಂತೆ ಮನವಿ ಮಾಡಿದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮಾಜಿ ಸಂಸದ ಧ್ರುವ ನಾರಾಯಣ, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಆರ್. ವಿ ವೆಂಕಟೇಶ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಪಕ್ಷದ ನಗರಸಭೆ, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

ಸಮಾನತೆ ಪರಿಕಲ್ಪನೆಯೊಂದಿಗೆ ಹೊಸ ಸಮಾಜ ನಿರ್ಮಾಣ ಆಶಯ ಹೊಂದಿದ್ದ ಬಾಬು ಜಗಜೀವನ್‌ರಾಮ್

೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ  ಡಾ. ಚನ್ನೇಶ್ ಎಚ್. ಹೊನ್ನಾಳಿ


ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನಡೆಸಿಕೊಟ್ಟ ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಚನ್ನೇಶ್ ಎಚ್. ಹೊನ್ನಾಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಏ. ೫: ದೇಶದಲ್ಲಿ ಸಮಾನತೆ ಪರಿಕಲ್ಪನೆಯೊಂದಿಗೆ ಹೊಸ ಸಮಾಜ ನಿರ್ಮಾಣದ ಆಶಯ ಹೊಂದಿದ್ದ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಸಾಲಿನಲ್ಲಿ ಬಾಬು ಜಗಜೀವನ್ ರಾಮ್ ಸಹ ಒಬ್ಬರಾಗಿದ್ದರು ಎಂದು ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಚನ್ನೇಶ್ ಎಚ್. ಹೊನ್ನಾಳಿ ಹೇಳಿದರು.
    ಅವರು ಮಂಗಳವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದಲ್ಲಿನ ಅಸಮಾನತೆಗಳ ವಿರುದ್ಧ ಹೋರಾಟ ಮಾಡುವ ಜೊತೆಗೆ ಶೋಷಣೆಗೆ ಒಳಗಾದ ಎಲ್ಲಾ ತಳಸಮುದಾಯಗಳಿಗೆ ನ್ಯಾಯ ಒದಗಿಸಿಕೊಡುವಲ್ಲಿ ಜಗಜೀವನ ರಾಮ್‌ರವರ ಕೊಡುಗೆ ಅಪಾರವಾಗಿದ್ದು, ಅಲ್ಲದೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಅಭಿವೃದ್ಧಿಗೊಳ್ಳಲು ಶ್ರಮಿಸಿದ್ದರು. ಅಲ್ಲದೆ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಇವರ ಪಾತ್ರ ಪ್ರಮುಖವಾಗಿದ್ದು, ದೇಶದಲ್ಲಿ ಕೃಷಿ ಹಾಗು ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದರು. ಇಂದಿನ ಸಮಾಜಕ್ಕೆ ಮಾದರಿಯಾಗಿ ಉಳಿದುಕೊಂಡಿದ್ದಾರೆ. ಇವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ನಾವೆಲ್ಲರು ಮುನ್ನಡೆಯಬೇಕಾಗಿದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಬಾಬು ಜಗಜೀವನ್‌ರಾಮ್‌ರವರು ಮೇಲ್ವರ್ಗದವರ ಎಚ್ಚರಿಕೆಗಳನ್ನು ಲೆಕ್ಕಿಸದೆ ತಳಸಮುದಾಯಗಳ ಪರವಾಗಿ ತಮ್ಮ ಹೋರಾಟ ಮುಂದುವರೆಸಿದರು. ಅನೇಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದರು. ಈ ಮೂಲಕ ದೇಶದ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಶೋಷಣೆಗೆ ಒಳಗಾದ ಎಲ್ಲಾ ಸಮುದಾಯಗಳ ಧ್ವನಿಯಾದರು. ಇವರು ಸಮಾಜಕ್ಕೆ ನೀಡಿರುವ ಅಪಾರವಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ,  ಸೇರಿದಂತೆ ಇನ್ನಿತರರು ಬಾಬು ಜಗಜೀವನ್‌ರಾಮ್‌ರವರ ಕುರಿತು ಮಾತನಾಡಿದರು.
    ನಿರ್ಲಕ್ಷ್ಯತನ ಆರೋಪ:
    ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಆದರ್ಶ ವ್ಯಕ್ತಿಗಳ ಜನ್ಮದಿನಾಚರಣೆ ಕೇವಲ ಕಾಟಚಾರಕ್ಕೆ ಮಾಡಿ ಅವರಿಗೆ ಅವಮಾನ ಮಾಡುವ ಕೆಲಸ ಮಾಡಬಾರದು. ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಇಲಾಖೆಗಳ ಪ್ರಮುಖ ಅಧಿಕಾರಿಗಳೇ ಗೈರು ಹಾಜರಾಗಿರುವುದು ಸರಿಯಲ್ಲ. ಏ.೧೪ರಂದು ನಡೆಯಲಿರುವ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯ ಪಾಲ್ಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
    ಬಾಂಡ್ ವಿತರಣೆ :
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ನಿರ್ಮೂಲನೆ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ ಈ ಬಾರಿ ಅಂತರ್ಜಾತಿ ವಿವಾಹವಾದ ಒಟ್ಟು ೩೫ ದಂಪತಿಗಳನ್ನು ಆಯ್ಕೆ ಮಾಡಲಾಗಿದ್ದು, ೩ ದಂಪತಿಗಳಿಗೆ ಪ್ರೋತ್ಸಾಹ ಧನದ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನಗರಸಭಾ ಸದಸ್ಯರಾದ ಉದಯಕುಮಾರ್, ಕಾಂತರಾಜ್, ಬಸವರಾಜ ಬಿ. ಆನೇಕೊಪ್ಪ, ಪ್ರೇಮ ಬದರಿನಾರಾಯಣ, ಮಂಜುನಾಥ್, ಮುಖಂಡರಾದ ಡಿ.ಸಿ ಮಾಯಣ್ಣ, ಬಿ.ಎನ್ ರಾಜು, ಎಸ್. ಮಂಜುನಾಥ್, ಮೈಲಾರಪ್ಪ, ಕೆ. ರಂಗನಾಥ್, ಜಿ. ರಾಜು, ವಿ. ವಿನೋದ್, ಜೀವ, ಜಿಂಕ್‌ಲೈನ್‌ಮಣಿ, ಕಾಣಿಕ್‌ರಾಜ್, ರವಿನಾಯ್ಕ, ಕೃಷ್ಣನಾಯ್ಕ, ಈಶ್ವರಪ್ಪ, ಕುಪೇಂದ್ರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್. ಗೋಪಿನಾಥ್ ಸ್ವಾಗತಿಸಿದರು. ಶಶಿಕುಮಾರ್ ನಿರೂಪಿಸಿದರು. ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ನಿರ್ಮೂಲನೆ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ ಈ ಬಾರಿ ಅಂತರ್ಜಾತಿ ವಿವಾಹವಾದ ಒಟ್ಟು ೩೫ ದಂಪತಿಗಳನ್ನು ಆಯ್ಕೆ ಮಾಡಲಾಗಿದ್ದು, ೩ ದಂಪತಿಗಳಿಗೆ ಭದ್ರಾವತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ  ಪ್ರೋತ್ಸಾಹ ಧನದ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

Monday, April 4, 2022

ಜಾತ್ರಾ ಮಹೋತ್ಸವ : ಶ್ರೀ ಮಹಾಗಣಪತಿ ಹೋಮ, ಅನ್ನಸಂತರ್ಪಣೆ

ಭದ್ರಾವತಿ ಭೂತನಗುಡಿ ಶ್ರೀ ಶನೈಶ್ವರಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ಮಹಾಗಣಪತಿ ಹೋಮ, ಅನ್ನಸಂತರ್ಪಣೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.

ಭದ್ರಾವತಿ, ಏ. ೪: ನಗರದ ಭೂತನಗುಡಿ ಶ್ರೀ ಶನೈಶ್ವರಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ಮಹಾಗಣಪತಿ ಹೋಮ, ಅನ್ನಸಂತರ್ಪಣೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.
ವಿಶೇಷ ಅಲಂಕಾರ ಪೂಜೆ, ಶ್ರೀ ಶನೈಶ್ವರ ಶಾಂತಿ ಹೋಮ, ಶ್ರೀ ದುರ್ಗಾ ಹೋಮ, ದೇವತಾ ಕಲಾ ಹೋಮ, ಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ಜೋಯ್ಸ್, ಜಯರಾಂ, ಸುಬ್ರಹ್ಮಣ್ಯ ಪ್ರಸಾದ್ ಹಾಗು ತಾಲೂಕು ಅರ್ಚಕರ ಸಭಾಮಂಡಳಿ ಗೌರವಾಧ್ಯಕ್ಷ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
ಏ.೫ರ ಮಧ್ಯಾಹ್ನ ೩ ಗಂಟೆಗೆ ಶ್ರೀ ಶನೈಶ್ವರಸ್ವಾಮಿ ಮತ್ತು ಶ್ರೀ ಕೆಂಚಮ್ಮದೇವಿಯ ರಾಜಬೀದಿ ಉತ್ಸವ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.


ಬಡತನದಲ್ಲಿ ಅರಳಿದ ಉಕ್ಕಿನ ನಗರದ ಪ್ರತಿಭೆಗೆ ಏಕಲವ್ಯ ಪ್ರಶಸ್ತಿ

  
ಏಕಲವ್ಯ ಪ್ರಶಸ್ತಿ ಪುರಸ್ಕೃತ ಮುನಿರ್ ಬಾಷಾ
   * ಅನಂತಕುಮಾರ್
    ಭದ್ರಾವತಿ, ಏ. ೪:   ನಗರದ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಎ. ಮುನಿರ್ ಬಾಷ ಅವರ ಕ್ರೀಡಾ ಸಾಧನೆಗೆ ಈ ಬಾರಿ ಏಕಲವ್ಯ ಪ್ರಶಸ್ತಿ ಲಭಿಸಿದೆ.
       ಕಳೆದ ವರ್ಷ ಖೋ ಖೋ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಖೋ ಖೋ ತರಬೇತಿ ಶಿಬಿರಕ್ಕೆ  ಆಯ್ಕೆಯಾಗಿದ್ದರು.
     ಮುನಿರ್ ಬಾಷಾರವರು ಈ ಹಿಂದೆ ೨೦೧೬ರಲ್ಲಿ ನಡೆದ ೧೨ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ಭಾರತ ತಂಡದ ಉಪನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ೨೦೧೯ರಲ್ಲಿ ನಡೆದ ೧೩ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಶ್ರೀಲಂಕ ವಿರುದ್ಧ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.
    ಮುನಿರ್ ಬಾಷಾ ಕ್ರೀಡಾ ಬದುಕು :
    ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಮಾಲಿ ಕೆಲಸ ಮಾಡುವ ಅಹ್ಮದ್ ಜಾನ್‌ರವರ ಪುತ್ರ ಮುನಿರ್ ಬಾಷಾ ಓದುವಿನ ಜೊತೆಯಲ್ಲಿ ಖೋ ಖೋ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಆ ಕ್ರೀಡೆಯಲ್ಲಿಯೇ ಉನ್ನತ ಸ್ಥಾನಕ್ಕೇರಿರುವ ಅಪರೂಪದ ಆಟಗಾರ. ಇವರ ಸಾಧನೆ ಹಿಂದೆ ತಾಯಿ ಆರಿಫಾ ಬೇಗಂ ಶ್ರಮ ಕೂಡ ಹೆಚ್ಚಿನದ್ದಾಗಿದೆ. ಕಡು ಬಡತನದ ನಡುವೆಯೂ ತಂದೆ-ತಾಯಿ ಇಬ್ಬರು ಮಗನ ಕ್ರೀಡಾಸಕ್ತಿಯನ್ನು ನೀರೆರೆದು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.
    ಪ್ರಾಥಮಿಕ ಶಾಲಾ ಹಂತದಲ್ಲಿಯೇ ದೈಹಿಕ ಶಿಕ್ಷಕ ಎಚ್.ಟಿ ತಿಮ್ಮಪ್ಪ ಮಾರ್ಗದರ್ಶನದಲ್ಲಿ ಖೋ ಖೋ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ಬಾಷಾರವರು, ಎಸ್‌ಸಿಎಫ್‌ಐಯಿಂದ ಕರ್ನಾಟಕವನ್ನು ಪ್ರತಿನಿಧಿಸಿ ವಿಜೇತರಾಗಿದ್ದರು. ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆಯಿಂದ ೧೪ನೇ ವರ್ಷದ ಸಬ್ ಜೂನಿಯರ್ ಮಟ್ಟದ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದು, ಈ ಪಂದ್ಯಾವಳಿಯಲ್ಲಿ ಉತ್ತಮ ಪದರ್ಶನ ನೀಡುವ ಮೂಲಕ ಅತ್ಯುತ್ತಮ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ಖೋ ಖೋ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನೀಡುವ ಭಾರತ್ ಅವಾರ್ಡ್ ಪ್ರಶಸ್ತಿಗೆ ಭಾಜನರಾಗಿದ್ದರು.
    ಹೈಸ್ಕೂಲ್ ವಿಭಾಗ ಮತ್ತು ಕಾಲೇಜು ಮಟ್ಟದಲ್ಲಿಯೂ ಎರಡು ಬಾರಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾಗಿದ್ದು, ಅಲ್ಲದೆ ಪದವಿ ಹಂತದಲ್ಲಿ ಕುವೆಂಪು ವಿವಿಯನ್ನು ಮೂರು ಬಾರಿ ಪ್ರತಿನಿಧಿಸಿ ಗೆಲುವಿನ ಹಂತ ತಲುಪಿಸಿದ್ದರು.  ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಖೋ ಖೋ ಫೆಡರೇಷನ್ ಕಪ್‌ನಲ್ಲಿ ರಾಜ್ಯ ತಂಡದ ಗೆಲುವಿಗೆ  ಪ್ರಮುಖ ಪಾತ್ರ ವಹಿಸಿದ್ದರು. ಕೇರಳದಲ್ಲಿ ಜರುಗಿದ ನ್ಯಾಷನಲ್ಸ್ ಗೇಮ್ಸ್‌ನಲ್ಲಿ ರಾಜ್ಯ ತಂಡ ಮೂರನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಹಾಗೂ ಸೀನಿಯರ್ ನ್ಯಾಷನಲ್ ವಿಭಾಗಗಳಲ್ಲಿ ಎರಡು ಮತ್ತು ಮೂರನೇ ಸ್ಥಾನ ಪಡೆದುಕೊಳ್ಳುವಲ್ಲೂ ಸಹ ಪ್ರಮುಖ ಪಾತ್ರ ವಹಿಸಿದ್ದರು.
    ಬಡತನದಿಂದ ಮೊಟಕುಗೊಂಡಿದ್ದ ಶಿಕ್ಷಣ ಪುನಃ ಆರಂಭ:
    ಬಡತನದಿಂದ ದ್ವಿತೀಯ ಪಿಯುಸಿ ಶಿಕ್ಷಣದ ನಂತರ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಜೀವನ ನಿರ್ವಹಣೆಗಾಗಿ ಸಾಮಾನ್ಯ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿದ್ದ ಬಾಷಾರವರು ನಗರದ ಸರ್.ಎಂ ವಿಶ್ವೇಶ್ವರಯ್ಯ ಸ್ಪೋರ್ಟ್ಸ್ ಕ್ಲಬ್ ಸಹಕಾರದಿಂದಾಗಿ ಪುನಃ ಶಿಕ್ಷಣ ಆರಂಭಿಸಿದರು. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಆರಂಭಿಸಿದರು. ಈ ಹಂತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕಾಲೇಜಿನ ಕೀರ್ತಿ ಪತಾಕೆಯನ್ನು ಹೆಚ್ಚಿಸಿದರು.  
    ಸರ್.ಎಂ ವಿಶ್ವೇಶ್ವರಯ್ಯ ಸ್ಪೋರ್ಟ್ಸ್ ಕ್ಲಬ್‌ಗೆ ಬಲ:
    ಕಲಿತ ಕ್ರೀಡೆಯನ್ನು ಬಚ್ಚಿಟ್ಟುಕೊಳ್ಳದೆ ಸರ್.ಎಂ ವಿಶ್ವೇಶ್ವರಯ್ಯ ಸ್ಪೋರ್ಟ್ಸ್ ಕ್ಲಬ್ ಮೂಲಕ ಯುವ ಪ್ರತಿಭೆಗಳಿಗೆ ತರಬೇತಿ ನೀಡುವ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಅವರು ಗುರುತಿಸಿಕೊಳ್ಳಲು ಬಾಷಾ ಕಾರಣಕರ್ತರಾಗಿದ್ದಾರೆ.  ಅಲ್ಲದೆ ಸ್ಪೋರ್ಟ್ಸ್ ಕ್ಲಬ್ ರಾಜ್ಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಉತ್ತಮ ಸಾಧನೆ ಕಂಡುಕೊಳ್ಳಲು ಹೆಚ್ಚಿನ ಶ್ರಮ ವಹಿಸಿದ್ದಾರೆ.
    ಪ್ರಶಸ್ತಿ-ಸನ್ಮಾನ :
    ಬಾಷಾರವರ ಕ್ರೀಡಾ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಸನ್ಮಾನಿಸಿ ಅಭಿನಂದಿಸಿವೆ. ಈ ನಡುವೆ ರಾಜ್ಯ ಸರ್ಕಾರ 'ಕರ್ನಾಟಕ ಕ್ರೀಡಾ ರತ್ನ' ಪ್ರಶಸ್ತಿಯನ್ನು ೨೦೧೭ರಲ್ಲಿ ನೀಡಿ ಗೌರವಿಸಿದೆ.
ಏಕಲವ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಬಾಷಾ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ, ದೈಹಿಕ ಶಿಕ್ಷಣ ನಿರ್ದೇಶಕ ವಿಶ್ವನಾಥ್, ಸರ್.ಎಂ ವಿಶ್ವೇಶ್ವರಯ್ಯ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕ್ರೀಡಾಪಟುಗಳು, ಅಭಿಮಾನಿಗಳು ಅಭಿನಂದಿಸಿದ್ದಾರೆ.

ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಎ. ಮುನಿರ್ ಬಾಷಾಗೆ ಏಕಲವ್ಯ ಪ್ರಶಸ್ತಿ



ಭದ್ರಾವತಿ, ಏ. ೪:   ನಗರದ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಎ. ಮುನಿರ್ ಬಾಷ ಅವರ ಕ್ರೀಡಾ ಸಾಧನೆಗೆ ಈ ಬಾರಿ ಏಕಲವ್ಯ ಪ್ರಶಸ್ತಿ ಲಭಿಸಿದೆ.
          ಕಳೆದ ವರ್ಷ ಖೋ ಖೋ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಖೋ ಖೋ ತರಬೇತಿ ಶಿಬಿರಕ್ಕೆ  ಆಯ್ಕೆಯಾಗಿದ್ದರು.
     ಮುನಿರ್ ಬಾಷಾರವರು ಈ ಹಿಂದೆ ೨೦೧೬ರಲ್ಲಿ ನಡೆದ ೧೨ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ಭಾರತ ತಂಡದ ಉಪನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ೨೦೧೯ರಲ್ಲಿ ನಡೆದ ೧೩ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಶ್ರೀಲಂಕ ವಿರುದ್ಧ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. 

ಜನ್ನಾಪುರ-ಸಿದ್ದಾಪುರ ಕೆರೆ ಸಂಪೂರ್ಣ ಸರ್ವೆ ಕಾರ್ಯ : ತಹಸೀಲ್ದಾರ್ ಭರವಸೆ

ಕೆರೆ ಸಂರಕ್ಷಣಾ ಸಮಿತಿ ಹೋರಾಟಕ್ಕೆ ತಾಲೂಕು ಆಡಳಿತ ಪೂರಕ ಸ್ಪಂದನೆ

ಭದ್ರಾವತಿ ನಗರಸಭೆಗೆ ಒಳಪಡುವ ಜನ್ನಾಪುರ-ಸಿದ್ದಾಪುರ ವ್ಯಾಪ್ತಿಯಲ್ಲಿರುವ ಸರ್ವೆ ನಂ.೭೦ರ ಕೆರೆಯನ್ನು ಅಭಿವೃದ್ಧಿಪಡಿಸುವ ಮೊದಲು ಒತ್ತುವರಿ ತೆರವು ಮಾಡಿ, ನೂರಾರು ವರ್ಷಗಳಿಂದ ಮಲ-ಮೂತ್ರಗಳಿಂದ ತುಂಬಿಕೊಂಡಿರುವ ಹೂಳನ್ನು ತೆಗೆದು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.

    ಭದ್ರಾವತಿ, ಏ. ೪: ತಾಲೂಕು ಆಡಳಿತದಿಂದ ನಗರಸಭೆಗೆ ಒಳಪಡುವ ಜನ್ನಾಪುರ-ಸಿದ್ದಾಪುರ ವ್ಯಾಪ್ತಿಯಲ್ಲಿರುವ ಸರ್ವೆ ನಂ.೭೦ರ ಕೆರೆಯನ್ನು ಸಂಪೂರ್ಣವಾಗಿ ಸರ್ವೆ ನಡೆಸುವುದಾಗಿ ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು.  
    ಕೆರೆ ಒತ್ತುವರಿ ತೆರವು ಮಾಡಿ, ನೂರಾರು ವರ್ಷಗಳಿಂದ ಮಲ-ಮೂತ್ರಗಳಿಂದ ತುಂಬಿಕೊಂಡಿರುವ ಹೂಳನ್ನು ತೆಗೆದು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ತಾಲೂಕು ಕಛೇರಿ ಮುಂಭಾಗ ಸೋಮವಾರ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, ತಾಲೂಕು ಆಡಳಿತ ಸರ್ವೆ ಕಾರ್ಯದಲ್ಲಿ ಯಾವುದೇ ರೀತಿ ಲೋಪದೋಷವೆಸಗಿಲ್ಲ. ಕೆರೆಯ ಒಟ್ಟು ವಿಸ್ತೀರ್ಣ ೫೨ ಎಕರೆಯಾಗಿದ್ದು, ಬಹಳ ವರ್ಷಗಳ ಹಿಂದೆಯೇ ೧೯೬೨-೬೩ರಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಅಧಿಕಾರ ಬಳಸಿಕೊಂಡು ಕೆರೆ ಜಾಗವನ್ನು ಮಂಜೂರಾತಿ ಮಾಡಿದ್ದಾರೆ. ೫ ಎಕರೆ ಜಾಗದಲ್ಲಿ ಮೊದಲು ೬೮-೬೯ರಲ್ಲಿ ೦೪ ಗುಂಟೆ ಖರಾಬು ಜಾಗ ಎಂಬುದಾಗಿ ನಮೂದಿಸಲಾಗಿದ್ದು, ಉಳಿದ ೪ ಎಕರೆ ೩೬ ಗುಂಟೆ ಜಾಗವನ್ನು ೭೨-೭೩ರಲ್ಲಿ ಜೆ.ಪಿ ಹಾಲಸಿದ್ದಪ್ಪ ಎಂಬುವರಿಗೆ ಮಂಜೂರಾತಿ ಮಾಡಲಾಗಿದೆ. ಈ ಪ್ರಕ್ರಿಯೆಗಳ ನಂತರ ಮೂಲ ದಾಖಲಾತಿಗಳಲ್ಲಿ ಬದಲಾವಣೆಯಾಗಿದ್ದು, ಈ ದಾಖಲೆಗಳ ಆಧಾರದ ಮೇಲೆ ೪೫ ಎಕರೆ ೨೦ ಗುಂಟೆ ಜಾಗದ ಸರ್ವೆ ನಡೆಸಲಾಗಿದೆ. ೫ ಎಕರೆ ಕೆರೆ ಒತ್ತುವರಿ ತೆರವುಗೊಳಿಸಲು ಕಾನೂನಾತ್ಮಕ ಸಮಸ್ಯೆ ಎದುರಾಗಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶ ಆನ್ವಯದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ಇದಕ್ಕೂ ಮೊದಲು ಬೇಡಿಕೆಯಂತೆ ಕೆರೆಯ ಸಂಪೂರ್ಣ ಸರ್ವೆ ನಡೆಸುವ ಮೂಲಕ ೪೫ ಎಕರೆ ೨೦ ಗುಂಟೆ ಜಾಗದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
    ಇದಕ್ಕೂ ಮೊದಲು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖರು, ಜನ್ನಾಪುರ-ಸಿದ್ದಾಪುರ ಕೆರೆ ಒಟ್ಟು ೫೨ ಎಕರೆ ವಿಸ್ತೀರ್ಣ ಹೊಂದಿದೆ. ಆದರೆ ತಾಲೂಕು ಆಡಳಿತ ಸರ್ವೆ ಕಾರ್ಯ ನಡೆಸಿ ಕೆರೆ ಜಾಗವನ್ನು ೪೫ ಎಕರೆ ೨೦ ಗುಂಟೆ ಎಂದು ಗುರುತಿಸಿದೆ. ಉಳಿದ ಜಾಗ ಒತ್ತುವರಿಯಾಗಿದ್ದು, ಭೂ ಕಬಳಿಕೆದಾರರನ್ನು ರಕ್ಷಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
    ಪ್ರಸ್ತುತ ಸರ್ವೆ ಕಾರ್ಯ ನಡೆಸಿ ಗುರುತಿಸಲಾಗಿರುವ ೪೫ ಎಕರೆ ೨೦ ಗುಂಟೆ ಜಾಗದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಬದಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕೇವಲ ೩೦ ಎಕರೆ ಜಾಗವನ್ನು ಮಾತ್ರ ಸೀಮಿತಗೊಳಿಸಿದೆ. ಈಗಾಗಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಮೊದಲನೇ ಕಂತಿನ ಹಣ ಅಂದಾಜು ೪,೪೮,೦೦,೦೦೦ ರು.  ಬಿಡುಗಡೆಗೊಳಿಸಿದೆ. ಇದು ಅವೈಜ್ಞಾನಿಕ ಕಾಮಗಾರಿಯಾಗಿದ್ದು, ಮೊದಲು ೫೨ ಎಕರೆ ಜಾಗವನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.
    ನೂರಾರು ವರ್ಷಗಳಿಂದ ಈ ಕೆರೆ ಮಲ-ಮೂತ್ರಗಳಿಂದ ತುಂಬಿಕೊಂಡಿದ್ದು, ಕಲುಷಿತಗೊಂಡಿರುವ ಕೆರೆಯಲ್ಲಿ ಹೂಳು ತೆಗೆದು ಸ್ವಚ್ಛಗೊಳಿಸುವ ಕಾರ್ಯ ಮೊದಲು ಕೈಗೊಳ್ಳಬೇಕಾಗಿದೆ. ಆ ನಂತರ ಕಾಮಗಾರಿ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
    ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಾಲಕೃಷ್ಣ ಧರಣಿ ಸತ್ಯಾಗ್ರಹ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಕಾಂತರಾಜ್, ರಿಯಾಜ್ ಅಹಮದ್, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸುರೇಶ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ವೆಂಟಕೇಶ್, ಪ್ರಮುಖರಾದ ಜಿ. ರಾಜು, ಚನ್ನಪ್ಪ, ವಿಶ್ವೇಶ್ವರ ಗಾಯಕ್ವಾಡ್, ಎನ್. ರಾಮಕೃಷ್ಣ, ಎಸ್. ಮಂಜುನಾಥ್, ರಾಮಚಂದ್ರ, ವೆಂಕಟೇಶ್, ವಿಲ್ಸನ್ ಬಾಬು, ಪಾಪಣ್ಣ, ಹಾವು ಮಂಜ ಸೇರಿದಂತೆ ಕೆರೆ ಸಮೀಪದ ರೈತರು, ಶ್ರೀ ಚೌಡೇಶ್ವರಿ ದೇವಿ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು, ಮಹಿಳೆಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ನಗರಸಭೆಗೆ ಒಳಪಡುವ ಜನ್ನಾಪುರ-ಸಿದ್ದಾಪುರ ವ್ಯಾಪ್ತಿಯಲ್ಲಿರುವ ಸರ್ವೆ ನಂ.೭೦ರ ಕೆರೆಯನ್ನು ಅಭಿವೃದ್ಧಿಪಡಿಸುವ ಮೊದಲು ಒತ್ತುವರಿ ತೆರವು ಮಾಡಿ, ನೂರಾರು ವರ್ಷಗಳಿಂದ ಮಲ-ಮೂತ್ರಗಳಿಂದ ತುಂಬಿಕೊಂಡಿರುವ ಹೂಳನ್ನು ತೆಗೆದು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಅವರಿಗೆ ಮನವಿ ಸಲ್ಲಿಸಿದರು.