Sunday, April 10, 2022

ಕೇಂದ್ರ, ರಾಜ್ಯದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಲಿ

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಏ. ೧೦: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಮಧ್ಯಮ ಹಾಗು ಬಡ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತ ಹಾಗು ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ರೈತರು, ಕಾರ್ಮಿಕರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಾಗಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಹಾಗು ರಾಜ್ಯದಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ಈ ದೇಶದಲ್ಲಿ ನೆಮ್ಮದಿ ಬದುಕು ಕಾಣಬಹುದು. ಈ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕೆಂದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್‌ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ರಾಮ್ ಸೇನಾ ಕರ್ನಾಟಕ ಸಂಘಟನೆಯಿಂದ ಶ್ರೀರಾಮ ನವಮಿ

ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
    ಭದ್ರಾವತಿ, ಏ. ೧೦: ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
    ಶ್ರೀ ರಾಮನವಮಿ ಅಂಗವಾಗಿ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿ ವಿತರಿಸಲಾಯಿತು. ರಾಮ್ ಸೇನಾ ಕರ್ನಾಟಕ ಸಂಘಟನೆ ಮುಖಂಡರು, ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು. ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.
    ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ, ಪ್ರಮುಖರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಲವೇಶ್‌ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ,  ರಾಮ್ ಸೇನಾ ಕರ್ನಾಟಕ ಸಂಘಟನೆ ಪ್ರಮುಖರಾದ ಉಮೇಶ್‌ಗೌಡ, ಸಚಿನ್ ವರ್ಣೇಕರ್, ಅವಿನಾಶ್, ನವೀನ್, ಕಿರಣ್‌ಗೌಡ, ಹೇಮಂತ್, ರಮೇಶ್, ಕೃಷ್ಣ ಜೋಗಿ, ಪ್ರಭು, ಕಾಂತರಾಜ್, ಸಂತೋಷ್, ಮಂಜುನಾಥ್, ರೋಹಿತ್ ಪ್ರವೀಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ವಿಜೃಂಭಣೆಯಿಂದ ಜರುಗಿದ ಶ್ರೀ ರಂಗನಾಥ, ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಭದ್ರಾವತಿ ತಾಲೂಕಿನ ಇತಿಹಾಸ ಪ್ರಸಿದ್ದ ಗೊಂದಿ ಹೊನ್ನೆಗುಡ್ಡ ಶ್ರೀ ರಂಗನಾಥಸ್ವಾಮಿ ಮತ್ತು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಏ. ೧೦:  ತಾಲೂಕಿನ ಇತಿಹಾಸ ಪ್ರಸಿದ್ದ ಗೊಂದಿ ಹೊನ್ನೆಗುಡ್ಡ ಶ್ರೀ ರಂಗನಾಥಸ್ವಾಮಿ ಮತ್ತು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಪ್ರತಿ ವರ್ಷ ಶ್ರೀರಾಮ ನವಮಿಯಂದು ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಕಳೆದ ೨ ವರ್ಷಗಳಿಂದ ಕೊರೋನಾ ಹಿನ್ನಲೆಯಲ್ಲಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆದಿರಲಿಲ್ಲ. ಈ ಬಾರಿ ಅದ್ದೂರಿ ಆಚರಣೆಗೆ ತಿರ್ಮಾನಿಸಲಾಗಿತ್ತು. ಮಧ್ಯಾಹ್ನ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ವಿವಿಧ ಧಾರ್ಮಿಕ ಆಚರಣೆಗಳು ನೆರವೇರಿದವು.
    ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗು ಗೊಂದಿ, ತಾರೀಕಟ್ಟೆ, ಅರಳಿಕೊಪ್ಪ, ಬಾಳೆಮಾರನಹಳ್ಳಿ, ಚಿಕ್ಕಗೊಪ್ಪೇನಹಳ್ಳಿ, ಹುಣಸೇಕಟ್ಟೆ, ಹಿರಿಯೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.

Saturday, April 9, 2022

ಬಾರಂದೂರು ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ



ಭದ್ರಾವತಿ ತಾಲೂಕಿನ ಬಾರಂದೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಶನಿವಾರ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಏ. ೯: ತಾಲೂಕಿನ ಬಾರಂದೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಶನಿವಾರ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ಅದ್ದೂರಿ ಆಚರಣೆ ನಡೆದಿರಲಿಲ್ಲ. ಈ ಬಾರಿ ಕಲ್ಯಾಣೋತ್ಸವ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯಿತು.
    ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇತರ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಶ್ರೀ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಉಜ್ಜನಿಪುರ ಸಂತೋಷ್ ಶಾಮಿಯಾನ ವತಿಯಿಂದ ಆಕರ್ಷಕ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಬಾರಂದೂರು ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಏ. ೧೦ ರಂದು ಶ್ರೀ ರಾಮನವಮಿ ಆಚರಣೆ ನಡೆಯಲಿದ್ದು,  ಬೆಳಿಗ್ಗೆ ೭ ಗಂಟೆ ಯಿಂದ ೧೦  ಗಂಟೆವರೆಗೆ ರಾಮತಾರಕ ಹೋಮ ಹಾಗೂ ವಿಶೇಷ ಪೂಜೆ, ಮಧ್ಯಾಹ್ನ ೧೨ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಸೇವಾ ಸಮಿತಿ ಹಾಗೂ ವಂದೇ ಮಾತರಂ ಟ್ರಸ್ಟ್ ಕೋರಿದೆ.

ಮಕ್ಕಳನ್ನು ಹೀಯಾಳಿಸುವ ಮನೋಭಾವ ಬೆಳೆಸಿಕೊಳ್ಳಬಾರದು : ಅಪರಂಜಿ ಶಿವರಾಜ್

ಭದ್ರಾವತಿ ಜನ್ನಾಪುರ ಅಪರಂಜಿ ಅಭಿನಯ ಶಾಲೆಯ ರಜಾ-ಮಜಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶನಿವಾರ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
    ಭದ್ರಾವತಿ, ಏ. ೯: ಪೋಷಕರು ತಮ್ಮ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳನ್ನು ಹೀಯಾಳಿಸುವ ಮನೋಭಾವ ಬೆಳೆಸಿಕೊಳ್ಳಬಾರದು ಎಂದು ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್ ಹೇಳಿದರು.
    ಅವರು ಶನಿವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ರೋಟರಿ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಪರಂಜಿ ಅಭಿನಯ ಶಾಲೆಯ ರಜಾ-ಮಜಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಮಕ್ಕಳನ್ನು ಮಾನಸಿಕವಾಗಿ ಖಿನ್ನತೆಗೆ ಒಳಗಾಗುವಂತೆ ಪೋಷಕರು ವರ್ತಿಸಬಾರದು. ಅವರೊಂದಿಗೆ ಸಂಯಮದಿಂದ ನಡೆದುಕೊಳ್ಳಬೇಕು. ಅವರ ಬಾಲ್ಯದ ಬೆಳವಣಿಗೆ ಉತ್ತಮವಾಗಿರಬೇಕು. ಕಳೆದ ಸುಮಾರು ೨ ವರ್ಷಗಳಿಂದ ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಅಭಿನಯ ಶಾಲೆಯಿಂದ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸ್ವಲ್ಪ ಹಿನ್ನಡೆಯಾಯಿತು. ಈ ಬಾರಿ ಸುಮಾರು ೧ ವಾರದವರೆಗೆ ಶಿಬಿರ ನಡೆದಿದ್ದು, ಈ ಶಿಬಿರ ಕೇವಲ ಮಕ್ಕಳ ಪ್ರತಿಭೆಗಳಿಗೆ ಒಂದು ವೇದಿಕೆಯಾಗಿದ್ದು, ಮಕ್ಕಳು ನಿರಂತರವಾಗಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು.
    ಹಿರಿಯೂರು ಶ್ರೀ ಗುರು ಮಹಾರುದ್ರಸ್ವಾಮಿ ಗುರುಕುಲ ವಿದ್ಯಾ ಸಂಸ್ಥೆಯ ಶ್ರೀ ಬಸಪ್ಪಗೌಡ, ಮಲ್ಲಪ್ಪಗೌಡ ಸ್ಮಾರಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಹರೋನಹಳ್ಳಿ ಸ್ವಾಮಿ ಮಾತನಾಡಿ, ಇಂದಿನ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿದ್ದು, ಅವರಲ್ಲಿನ ಪ್ರತಿಭೆಗಳನ್ನು ನಾವುಗಳು ಅರಿತುಕೊಳ್ಳಬೇಕು. ಮಕ್ಕಳ ಶಿಬಿರ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದ್ದು, ಅಪರಂಜಿ ಶಿವರಾಜ್‌ರವರು ಮಕ್ಕಳ ಮೇಲೆ ವಿಶೇಷ ಕಾಳಜಿ ಹೊಂದಿರುವುದು ಶ್ಲಾಘನೀಯ ಎಂದರು.
    ವೇದಿಕೆಯಲ್ಲಿ ರೋಟರಿ ಕ್ಲಬ್ ಎಚ್.ವಿ ಆದರ್ಶ, ರಾಘವೇಂದ್ರ ಉಪಾಧ್ಯಾಯ, ಅಪರಂಜಿ ಅಭಿನಯ ಶಾಲೆ ಅಧ್ಯಕ್ಷೆ ಪುಷ್ಪಲತಾ ಉಪಸ್ಥಿತರಿದ್ದರು. ಮಕ್ಕಳಿಂದ ಏಕಪಾತ್ರಾಭಿನಯ, ಜಾನಪದ ನ್ಯತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿದ್ಯೆ, ಜ್ಞಾನವಿದ್ದರೆ ಮಾತ್ರ ಇಂದಿನ ಸಮಾಜದಲ್ಲಿ ಗೌರವ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನೂತನ ಕೊಠಡಿ ಉದ್ಘಾಟನಾ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನೆರವೇರಿಸಿದರು.
    ಭದ್ರಾವತಿ, ಏ. ೯: ಇಂದಿನ ದಿನಗಳಲ್ಲಿ ವಿದ್ಯೆಯೊಂದಿಗೆ ಜ್ಞಾನ ಹೊಂದಿರುವವರನ್ನು ಮಾತ್ರ ಸಮಾಜದಲ್ಲಿ ಗೌರವದಿಂದ ಕಾಣುತ್ತಾರೆ. ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
    ಅವರು ಶನಿವಾರ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಯ್ಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
    ಇಂದಿನ ಸಮಾಜದಲ್ಲಿ ವಿದ್ಯೆ, ಜ್ಞಾನವಿಲ್ಲದೆ ಬದುಕುವುದು ಅಸಾಧ್ಯ. ಪೋಷಕರು ಸಹ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಮುನ್ನಡೆಯಬೇಕು. ಸಾಧನೆಯ ಗುರಿ ತಲುಪಬೇಕೆಂದರು.
    ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಿದ್ದು, ಇನ್ನೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಹ ಹೆಚ್ಚಿನ ಗಮನ ಹರಿಸಬೇಕೆಂದರು.
    ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎ ವಿಷ್ಣುಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಇತ್ತೀಚಿನ ಕೆಲವು ವರ್ಷಗಳಿಂದ ಕಾಲೇಜು ಹಂತ ಹಂತವಾಗಿ ಸಾಕಷ್ಟು ಬೆಳವಣಿಗೆ ಹೊಂದುತ್ತಿದೆ. ನಿರೀಕ್ಷೆಗೂ ಮೀರಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕಾರಣಕರ್ತರಾಗಿದ್ದು, ಈ ಹಿನ್ನಲೆಯಲ್ಲಿ ಕಾಲೇಜಿನ ಪರವಾಗಿ ಅಭಿನಂದಿಸುತ್ತೇನೆ. ಪ್ರಸ್ತುತ ರಾಜ್ಯದಲ್ಲಿರುವ ಪ್ರತಿಷ್ಠಿತ ಸರ್ಕಾರಿ ಕಾಲೇಜುಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ, ನಂಜುಂಡಯ್ಯ, ವಿಜಯಪ್ರಭು, ವಾಹಿದ್, ಬಾಷಾ, ಶರಣಪ್ಪ, ಹರೀಶ್, ಅಂಜಲಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Friday, April 8, 2022

ಏ.9ರಂದು ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ


    ಭದ್ರಾವತಿ: ತಾಲೂಕಿನ ಬಾರಂದೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ಪದ್ಮಾವತಿ ದೇವಸ್ಥಾನದಲ್ಲಿ ಏ. 9ರಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದೆ.
    ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇತರ ಧಾರ್ಮಿಕ ಆಚರಣೆಗಳು ಜರುಗಲಿವೆ. 10 ರಂದು ಶ್ರೀ ರಾಮನವಮಿ ಆಚರಣೆ ನಡೆಯಲಿದ್ದು,  ಬೆಳಿಗ್ಗೆ 7 ಗಂಟೆ ಯಿಂದ 10  ಗಂಟೆವರೆಗೆ ರಾಮತಾರಕ ಹೋಮ ಹಾಗೂ ವಿಶೇಷ ಪೂಜೆ, ಮಧ್ಯಾಹ್ನ 12ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಸೇವಾ ಸಮಿತಿ ಹಾಗೂ ವಂದೇ ಮಾತರಂ ಟ್ರಸ್ಟ್ ಕೋರಿದೆ.