ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ
ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಏ. ೨೪: ಡಾ. ಬಿ.ಆರ್ ಅಂಬೇಡ್ಕರ್‌ರವರು ಸಂಪಾದಿಸಿದ ಪುಸ್ತಕ ಜ್ಞಾನ ಜಗತ್ತಿನ ಶ್ರೇಷ್ಠ ಸಂವಿಧಾನ ರಚನೆಗೆ ನೆರವಾಯಿತು ಎಂದು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಹೇಳಿದರು.
ಅವರು ನ್ಯೂಟೌನ್ ಜಯಶ್ರೀ ವೃತ್ತದ ಸಮೀಪ ತಾಲೂಕು ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬಿ.ಆರ್ ಅಂಬೇಡ್ಕರ್‌ರವರು ವಿದೇಶದಲ್ಲಿ ಸುಮಾರು ೫೦ ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಾಣ ಮಾಡುವ ಜೊತೆಗೆ ಅವುಗಳ ಅಧ್ಯಯನ ನಡೆಸಿದರು. ಜೊತೆಗೆ ಸುಮಾರು ೧೫ ಸಾವಿರ ಪುಸ್ತಕಗಳನ್ನು ರಚಿಸಿದರು. ಅವರ ಪುಸ್ತಕ ಜ್ಞಾನ ದೇಶದ ಸಂವಿಧಾನ ರಚನೆಗೆ ನೆರವಾಯಿತು. ಅಂಬೇಡ್ಕರ್‌ರವರು ಹೊಂದಿದ್ದ ಅಪಾರ ಜ್ಞಾನದಿಂದಾಗಿ ಅವರು ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅಂಬೇಡ್ಕರ್‌ರವರ ಆಶಯದಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಇಂದು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಮುನ್ನಡೆಯಬೇಕೆಂದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕು. ಎಲ್ಲಿಯವರೆಗೆ ಸಂಘಟಿತರಾಗುವುದಿಲ್ಲವೋ ಅಲ್ಲಿಯವರೆಗೂ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಸಮಾಜ ಬಲಗೊಳ್ಳುವುದಿಲ್ಲ. ಈ ಹಿನ್ನಲೆಯಲ್ಲಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಪ್ರಾಮಾಣಿಕತೆಯನ್ನು ಕಾಯ್ದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಹಲವಾರು ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗಿದೆ. ಈ ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು.
ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಗೌತಮ ಬುದ್ಧ ಹಾಗು ಡಾ. ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಬದುಕನ್ನು ಸಮಾ ಸಮಾಜ ನಿರ್ಮಾಣಕ್ಕಾಗಿ ಮೀಸಲಿಡುವ ಮೂಲಕ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಅವರು ಜಗತ್ತಿಗೆ ನೀಡಿರುವ ಕೊಡುಗೆಗಳನ್ನು ನಾವುಗಳು ಸ್ಮರಿಸಿಕೊಳ್ಳುವ ಜೊತೆಗೆ ಅವರ ಆಶಯದಂತೆ ಮುನ್ನಡೆಯಬೇಕಾಗಿದೆ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಸಮಾಜದ ನೂತನ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
ನಗರಸಭಾ ಸದಸ್ಯರಾದ ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಕೆ. ರಂಗನಾಥ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಎ. ತಿಪ್ಪೇಸ್ವಾಮಿ ನಿರೂಪಿಸಿದರು. ಡಿ. ನರಸಿಂಹಮೂರ್ತಿ ವಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.