ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಪುನಃ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗುರುವಾರ ಅಂಗಡಿ-ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ನಡೆಸಿತು.
ಭದ್ರಾವತಿ, ಮೇ. ೫: ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಪುನಃ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗುರುವಾರ ಅಂಗಡಿ-ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ಆರಂಭಿಸಿದೆ.
ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಈ ನಡುವೆಯೂ ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಪುನಃ ಜಾಗೃತಗೊಂಡಿರುವ ನಗರಸಭೆ ಆಡಳಿತ ಪೌರಾಯುಕ್ತ ಕೆ. ಪರಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆಗೆ ಮುಂದಾಗಿದೆ.
ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ತರಕಾರಿ ಮಾರುಕಟ್ಟೆ ಸುತ್ತಮುತ್ತ ಹಾಗು ಮಾಧವಚಾರ್ ವೃತ್ತ, ಸಿ.ಎನ್ ರಸ್ತೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಲಾಗಿದ್ದು, ನಿಷೇಧಿತ ಪಾಸ್ಟಿಕ್ ಮಾರಾಟದಲ್ಲಿ ತೊಡಗಿದ್ದ ಅಂಗಡಿ-ಮುಂಗಟ್ಟುಗಳಿಗೆ ದಂಡ ವಿಧಿಸಲಾಗಿದೆ. ಮೊದಲ ದಿನ ಸುಮಾರು ೬ ಸಾವಿರ ರು. ದಂಡ ವಸೂಲಾತಿ ಮಾಡಲಾಗಿದ್ದು, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.
ಪೌರಾಯುಕ್ತ ಕೆ. ಪರಮೇಶ್ ಪತ್ರಿಕೆಯೊಂದಿಗೆ ಮಾತನಾಡಿ, ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್.ಬಿ ಸತೀಶ್, ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಹೊಸಮನೆ ಪೊಲೀಸ್ ಠಾಣಾಧಿಕಾರಿ ಸುನೀತ, ನಗರಸಭೆ ಮೇಸ್ತ್ರಿ ಎನ್. ಗೋವಿಂದ, ದಾನಂ, ವೆಂಕಟೇಶ್, ಎನ್. ಮಂಜುನಾಥ್, ಅಭಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.