ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ವಿತರಿಸಿದರು.
ಭದ್ರಾವತಿ, ಮೇ. ೧೧: ತೋಟಗಾರಿಕೆ ಬೆಳೆಗಳಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಹಾಗೂ ಸೂಕ್ತ ತರಬೇತಿಯೊಂದಿಗೆ ರೈತರು ಪ್ರಗತಿ ಸಾಧಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಬುಧವಾರ ನಗರದ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಮತ್ತು ತೋಟಗಾರಿಕೆ ಬೆಳೆಗಳ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ಹಾಗೂ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಅಡಕೆ ಬೆಳೆ ಬೆಳೆಯಲು ಅನುಸರಿಸಬೇಕಾದ ವೈಜ್ಞಾನಿಕ ಕ್ರಮಗಳು, ಕಂಡು ಬರುವ ವಿವಿಧ ಬಗೆಯ ರೋಗಬಾಧೆಗಳು ಹಾಗು ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ದಾವಣಗೆರೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಬಸವನಗೌಡ ಮಾಹಿತಿ ನೀಡಿದರು.
ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ. ಸಿದ್ದಲಿಂಗೇಶ್ವರ, ಹನಿ ನೀರಾವರಿ, ರಸಾವರಿ ಹಾಗು ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.
ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಜೆ. ಕಾಂತರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆ ವತಿಯಿಂದ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೈತರಿಗೆ ಅನುಕೂಲವಾಗುವಂತೆ ತರಕಾರಿ ಬೀಜಗಳನ್ನು ಹಾಗು ಪರಿಕರಗಳಾದ ಲಘು ಪೋಷಕಾಂಶ ಮತ್ತು ನೀರಿನಲ್ಲಿ ಕರಗುವ ಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೆ ಕಾರ್ಯಾಗಾರದ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ. ನಂದಿನಿ ನಿರೂಪಿಸಿದರು.