ಭದ್ರಾವತಿ ದೊಣಬಘಟ್ಟ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಎಂ.ಡಿ ಕಲೀಂ
ಭದ್ರಾವತಿ, ಜೂ. ೧೬: ತಾಲೂಕಿನ ದೊಣಬಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಡಿ ಕಲೀಂ ಹಾಗು ಉಪಾಧ್ಯಕ್ಷರಾಗಿ ಮಲ್ಲಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಒಟ್ಟು ೨೧ ಸದಸ್ಯ ಬಲವನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಎ ವರ್ಗಕ್ಕೆ ಹಾಗು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಒಡಂಬಡಿಕೆಯಂತೆ ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ಖಲೀಲ್ ಸಾಬ್ ಅಧ್ಯಕ್ಷರಾಗಿ ಹಾಗು ಹಾಲಮ್ಮ ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು.
ಭದ್ರಾವತಿ ದೊಣಬಘಟ್ಟ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷೆ ಮಲ್ಲಮ್ಮ
ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಎಂ.ಡಿ ಕಲೀಂ ಹಾಗು ಉಪಾಧ್ಯಕ್ಷರಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಲ್ಲಮ್ಮ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾರ್ಯ ನಿರ್ವಹಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ೧೨ ಸದಸ್ಯರು ಭಾಗವಹಿಸಿದ್ದು, ಎರಡು ಸ್ಥಾನಗಳಿಗೂ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ಈ ನಡುವೆ ಒಡಂಬಡಿಕೆಯಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಕೌಸರು ಬಾನು ಬೆಂಬಲಿಗರೊಂದಿಗೆ ಪ್ರತಿಭಟನಡೆಸಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಸಮಯ ಅಹಿತಕರ ವಾತಾವರಣ ನಿರ್ಮಾಣಗೊಂಡಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದ್ದಾರೆ. ಕೌಸರ್ ಬಾನು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾದರು. ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ನಡೆದಿರುವ ಘಟನೆ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.