Monday, June 27, 2022

ಕೆಂಪೇಗೌಡ ಜಯಂತಿ ಬೃಹತ್ ಮೆರವಣಿಗೆಗೆ ಬಿ.ಕೆ ಸಂಗಮೇಶ್ವರ್ ಚಾಲನೆ



ಭದ್ರಾವತಿ, ಜೂ. ೨೭: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಬಿ.ಎಚ್ ರಸ್ತೆ ಅಪ್ಪರ್ ಹುತ್ತಾದಿಂದ ಸಭಾ ವೇದಿಕೆವರೆಗೂ ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಹಾಗು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ಬಿ.ಎಚ್ ರಸ್ತೆ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ತಾಲೂಕು ಕಛೇರಿ ರಸ್ತೆಯಲ್ಲಿ ಸಾಗಿ ಕೆಎಸ್‌ಆರ್‌ಟಿಸಿ ಡಿಪೋ ವೃತ್ತ ಮೂಲಕ ಸಿದ್ದಾರೂಢನಗರದ ಬಸವೇಶ್ವರ ಸಭಾ ಭವನದ ವರೆಗೂ ಸಾಗಿತು.
ಪುರುಷ ಮತ್ತು ಮಹಿಳೆಯರ ಡೊಳ್ಳು ಕುಣಿತ, ಗೊಂಬೆ ನೃತ್ಯ ಸೇರಿದಂತೆ ಇನ್ನಿತರ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು. ಕೆಂಪೇಗೌಡ ವೇಷದಾರಿ ಎಲ್ಲರ ಗಮನ ಸೆಳೆದರು.
ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಎಂಎಸ್ಎಂಇ ಘಟಕದ ರಾಜ್ಯಾಧ್ಯಕ್ಷ ಎಚ್.ಸಿ ರಮೇಶ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಬಾಲಕೃಷ್ಣ, ತಿಮ್ಮೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಹಾಗೂ ಪದಾಧಿಕಾರಿಗಳು, ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷ ಎಂ.ಎಸ್ ಸುಧಾಮಣಿ ಹಾಗೂ ಪದಾಧಿಕಾರಿಗಳು, ಕೆಂಪೇಗೌಡ ಯುವ ಪಡೆ ಅಧ್ಯಕ್ಷ ಆರ್. ಮೋಹನ್ ಕುಮಾರ್ ಪದಾಧಿಕಾರಿಗಳು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರಮೇಶ್, ನಗರಸಭೆ ಅಧ್ಯಕ್ಷೆ ಗೀತ ರಾಜಕುಮಾರ್,  ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನು ಕುಮಾರ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಒಕ್ಕಲಿಗ ಸಮಾಜದ ಮುಖಂಡರು ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.



ಅನಸೂಯಾ ನಿಧನ

ಅನಸೂಯಾ
ಭದ್ರಾವತಿ, ಜೂ. ೨೭ : ಹಳೇನಗರದ ಭೂತನಗುಡಿ ನಿವಾಸಿ, ಅನಿಲ್ ಸ್ಟೋರ್‍ಸ್‌ನ ಟಿ.ಎಚ್ ಶ್ರೀನಿವಾಸ್ ಶೆಟ್ಟಿ ಅವರ ಪತ್ನಿ ಅನಸೂಯಾ(೭೩) ಭಾನುವಾರ ರಾತ್ರಿ ನಿಧನ ಹೊಂದಿದರು.
  ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಸೋಮವಾರ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ಆರ್ಯವೈಶ್ಯ ಸಮಾಜ ಸಂತಾಪ ಸೂಚಿಸಿದೆ.


Sunday, June 26, 2022

ಮಾದಕ ವಸ್ತುಗಳ ಕಳ್ಳಸಾಗಣೆ : ದೇಶದ ಯುವ ಶಕ್ತಿಗೆ ಮಾರಕ

ಭದ್ರಾವತಿ ಕಾಗದನಗರದ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರುದ್ಧ ಜಾಗೃತಿ ಮಾಸಾಚರಣೆ ಕಾರ್ಯಕ್ರಮವನ್ನು ಪೇಪರ್‌ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್  ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಜೂ. ೨೬: ಮಾದಕ ವಸ್ತುಗಳ ಸೇವನೆಯಿಂದಾಗಿ ಸಮಾಜದಲ್ಲಿ ಕಾನೂನು ಬಾಹಿರ ಕೃತ್ಯಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಯುವ ಸಮೂಹ ದಾರಿ ತಪ್ಪುವಂತಾಗಿದೆ ಎಂದು ಪೇಪರ್‌ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.
    ಅವರು ಕಾಗದನಗರದ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರುದ್ಧ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಾದಕ ವಸ್ತುಗಳ ಸೇವನೆ ಚಟಕ್ಕೆ ಒಳಗಾದವರನ್ನು ಗುರಿಯಾಗಿಸಿಕೊಂಡು ಕಳ್ಳ ಸಾಗಣೆದಾರರು ಅಕ್ರಮವಾಗಿ ಮಾದಕ ವಸ್ತುಗಳನ್ನು ದೇಶಕ್ಕೆ ಸಾಗಾಣೆ ಮಾಡಿಕೊಳ್ಳುವ ಮೂಲಕ ದೇಶದ ಯುವ ಶಕ್ತಿಗೆ ಮಾರಕವಾಗುತ್ತಿದ್ದಾರೆ. ಮಾದಕ ವಸ್ತುಗಳ ಬಳಕೆ ಮತ್ತು ಅವುಗಳ ಕಳ್ಳ ಸಾಗಣೆ ಜಾಗತಿಕ ಸಮಸ್ಯೆಯಾಗಿದ್ದು, ಯುವಕರು ಜಾಗೃತರಾಗಿ ಇದರ ವಿರುದ್ಧ  ಹೋರಾಟ ನಡೆಸಬೇಕೆಂದು ಕರೆ ನೀಡಿದರು.
    ಎಂಪಿಎಂ ಶಿಕ್ಷಣ ಸಂಸ್ಥೆ ಖಜಾಂಚಿ ರವಿಕುಮಾರ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದಾಗಿ ಯುವ ಸಮುದಾಯ ಹಲವು ಕಾಯಿಲೆಗಳಿಗೆ ತುತ್ತಾಗುವ ಜೊತೆಗೆ ಸಮಾಜದಲ್ಲಿ ದಾರಿ ತಪ್ಪುವಂತಾಗುತ್ತದೆ. ಈ ಹಿನ್ನಲೆಯಲ್ಲಿ ಎಚ್ಚರ ವಹಿಸುವ ಮೂಲಕ ಮಾದಕ ವಸ್ತುಗಳಿಂದ ದೂರವಿರಬೇಕೆಂದರು.
    ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಿ. ನಾಗರಾಜ್ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗು ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಿಕ್ಷಕರಾದ ಹೆನ್ರಿ, ಅನುರಾಧ, ದಿವ್ಯ, ವರಲಕ್ಷ್ಮಿ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸ್ನೇಹಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ

ಪೊಲೀಸ್ ಉಮೇಶ್
    ಭದ್ರಾವತಿ, ಜೂ. ೨೬ : ಸ್ನೇಹ ಜೀವಿ ಬಳಗದ ವತಿಯಿಂದ ಪೊಲೀಸ್ ಉಮೇಶ್ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಜೂ. ೨೭ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಬಿ.ಎಚ್ ರಸ್ತೆ  ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಟೋ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಿಹಿ ಹಂಚಿಕೆ, ಅನ್ನಸಂತರ್ಪಣೆ ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಸಮಾಜದ ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೊಲೀಸ್ ಉಮೇಶ್ ಕೋರಿದ್ದಾರೆ.

ಜೂ.೨೭ರಂದು ನಾಡಪ್ರಭು ಕೆಂಪೇಗೌಡರ ಜಯಂತಿ

    ಭದ್ರಾವತಿ, ಜೂ. ೨೬: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಜೂ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಕೆಂಪೇಗೌಡ ಜಯಂತಿ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಕುವೆಂಪು ವಿಶ್ವ ವಿದ್ಯಾನಿಲಯದ ಪ್ರೊ. ಈ ಚಂದ್ರಶೇಖರ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.  
    ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮೆರವಣಿಗೆ :
    ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ತಾಲೂಕು ಒಕ್ಕಲಿಗರ ಸಂಘ, ಕೆಂಪೇಗೌಡ ಯುವಪಡೆ ಹಾಗು ಇನ್ನಿತರ ಸಂಘಟನೆಗಳ ನೇತೃತ್ವದಲ್ಲಿ ಬೆಳಿಗ್ಗೆ ೯ ಗಂಟೆಗೆ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾದಿಂದ ಸಭಾ ವೇದಿಕೆವರೆಗೂ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಹಾಗು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ.
    ಒಕ್ಕಲಿಗರ ಸಂಘದಿಂದ ಆಚರಣೆ :
    ತಾಲೂಕು ಒಕ್ಕಲಿಗರ ಸಂಘ ದಿಂದ ಸಂಜೆ ೫.೩೦ಕ್ಕೆ  ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ನಡೆಯಲಿದೆ. ಸಂಘದ ಅಧ್ಯಕ್ಷ ಎ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಆರ್. ಪ್ರಕಾಶ್ ಕೋರಿದ್ದಾರೆ.

Saturday, June 25, 2022

ನ್ಯಾಯವಾದಿ ಎ.ಎನ್ ಕಾರ್ತಿಕ್ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ

ಭದ್ರಾವತಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಭದ್ರಾವತಿ, ಜೂ. ೨೫: ನಗರದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಲಯನ್ಸ್ ಕ್ಲಬ್ ೨ನೇ ಜಿಲ್ಲಾ ಉಪ ಗೌರ್ವನರ್ ಮಹಮದ್ ಹನೀಫ್ ಪದಗ್ರಹಣ ಬೋಧಿಸಿದರು. ದೈವಜ್ಞ ಬ್ರಾಹ್ಮಣ ಸಂಘದ ಎಂ. ನಾಗರಾಜ ಶೇಟ್ ಕಾರ್ಯದರ್ಶಿಯಾಗಿ ಹಾಗು ಜಿ.ಪಿ ದರ್ಶನ್ ಖಜಾಂಚಿಯಾಗಿ, ಉಳಿದಂತೆ  ಲಿಯೋ ಕ್ಲಬ್ ಅಧ್ಯಕ್ಷರಾಗಿ ನಿಖಿತಾ ಎನ್ ಶೇಟ್, ಕಾರ್ಯದರ್ಶಿಯಾಗಿ ಆರ್. ಶ್ರೇಷ್ಠ ಮತ್ತು ಖಜಾಂಚಿಯಾಗಿ ಮೋನಾಲ್ ಕೆ. ಗೌಡ ಹಾಗು ಇನ್ನಿತರರು ಅಧಿಕಾರ ಸ್ವೀಕರಿಸಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕ್ಲಬ್ ಪ್ರಮುಖರಾದ ಬಿ. ದಿವಾಕರ ಶೆಟ್ಟಿ, ಹೆಬ್ಬಂಡಿ ನಾಗರಾಜ್, ನಿಕಟಪೂರ್ವ ಪದಾಧಿಕಾರಿಗಳಾದ ಬಿ.ಎಸ್ ಮಹೇಶ್‌ಕುಮಾರ್, ಡಿ. ಶಂಕರಮೂರ್ತಿ, ವಿನೋದ್ ಗಿರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೂ.೨೮ರ ಉಚಿತ ಬೃಹತ್ ಆರೋಗ್ಯ ಶಿಬಿರ ಯಶಸ್ವಿಗೊಳಿಸಲು ಸಂಸದರ ಸಲಹೆ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಭದ್ರಾವತಿಯಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
    ಭದ್ರಾವತಿ, ಜೂ. ೨೫ : ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರ ಆರೋಗ್ಯ ಕಾಳಜಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
    ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರನ್ನು ಗುರುತಿಸಿ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆ ಸಹಯೋಗದೊಂದಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಮುಂದಾಗಿದೆ. ಜೂ.೨೮ರಂದು ಬೆಳಿಗ್ಗೆ ೯ ಗಂಟೆಗೆ ಶಿಬಿರ ಆರಂಭಗೊಳ್ಳಲಿದ್ದು, ಎಲ್ಲಾ ರೀತಿಯ ಕಾಯಿಲೆಗಳ ತಪಾಸಣೆ ನಡೆಯಲಿದೆ. ಹೆಚ್ಚಿನ ಚಿಕಿತ್ಸೆಗೂ ಅವಕಾಶ ಕಲ್ಪಿಸಿಕೊಡಲಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.  ಬೃಹತ್ ಶಿಬಿರ ಇದಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಕಾಳಜಿವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಸಂಸದರು ಸಲಹೆ ನೀಡಿದರು.
    ಸಭೆಯಲ್ಲಿ ಪಕ್ಷದ ಪ್ರಮುಖರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಎಸ್. ಕುಮಾರ್, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್, ಹೇಮಾವತಿ ವಿಶ್ವನಾಥ್, ಕೆ. ಮಂಜುನಾಥ್, ರಾಮಲಿಂಗಯ್ಯ, ಚಂದ್ರಪ್ಪ, ಶಶಿಕಲಾ, ಅನ್ನಪೂರ್ಣ, ಪ್ರಭಾಕರ್, ರವಿಕುಮಾರ್, ಕರಿಗೌಡ, ಕವಿತಾ ರಾವ್, ಬಿ.ಎಸ್ ನಾರಾಯಣಪ್ಪ, ರಾಮನಾಥ್ ಬರ್ಗೆ, ಚನ್ನೇಶ್, ಶೋಭಾ ಪಾಟೀಲ್, ಮಂಜುಳ, ಎಸ್.ಎನ್ ನಾಗಮಣಿ, ಗೋಕುಲ್‌ಕೃಷ್ಣ, ನಕುಲ್, ಧನುಷ್, ಮಲ್ಲೇಶ್, ವಿಜಯ್, ಚಂದ್ರು ದೇವರಹಳ್ಳಿ ಸೇರಿದಂತೆ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.