ದೇಶದ ಸ್ವಾತಂತ್ರ್ಯದ ೭೫ರ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು 'ಹರ್ ಘರ್ ತಿರಂಗಾ' ಎಂಬ ಘೋಷವಾಕ್ಯದೊಂದಿಗೆ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಚಾಲನೆ ನೀಡಿದರು.
ಭದ್ರಾವತಿ, ಆ. ೪: ದೇಶದ ಸ್ವಾತಂತ್ರ್ಯದ ೭೫ರ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು 'ಹರ್ ಘರ್ ತಿರಂಗಾ' ಎಂಬ ಘೋಷವಾಕ್ಯದೊಂದಿಗೆ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಚಾಲನೆ ನೀಡಿದರು.
ಜಾಥಾ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡಿತು. ಶಾಲಾ ವಿದ್ಯಾರ್ಥಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ನಗರಸಭೆ ಸದಸ್ಯರು ಅಭಿಯಾನ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಸಾಗಿದರು. ರಸ್ತೆ ಎರಡು ಬದಿಗಳ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಪಾದಚಾರಿಗಳಿಗೆ, ವಾಹನ ಸವಾರರಿಗೆ ಕರ ಪತ್ರಗಳನ್ನು ವಿತರಿಸಲಾಯಿತು.
ಜಾಥಾ ರಂಗಪ್ಪ ವೃತ್ತದಲ್ಲಿ ಅಂತ್ಯಗೊಂಡಿತು. ಜಾಥಾ ಆರಂಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ರಾಷ್ಟ್ರ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಹಾಕಲಾಯಿತು.
ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಸಮುದಾಯ ಸಂಘಟನಾ ಅಧಿಕಾರಿ ಈಶ್ವರಪ್ಪ ಹಾಗು ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಮತ್ತು ಆಶ್ರಯ ಸಮಿತಿಯ ಬಹುತೇಕ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಹಾಗು ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.