ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ವರ್ಗದವರು ವಿವಿಧ ಧರ್ಮಗಳ ಗುರುಗಳ ಸಮ್ಮುಖದಲ್ಲಿ ಗಂಗಾಪೂಜೆಯೊಂದಿಗೆ ಭದ್ರೆಗೆ ಬಾಗಿನ ಸಮರ್ಪಿಸಿದರು.
ಭದ್ರಾವತಿ, ಆ. ೭: ರಾಜ್ಯ ಹಾಗು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳಿಗೆ ಬಡ ಜನರ ಬಗ್ಗೆ ಕಾಳಜಿ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಆರೋಪಿಸಿದರು.
ಅವರು ಭಾನುವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಂಗಾ ಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ ಜನರು ಬದುಕುವುದು ಅಸಾಧ್ಯವಾಗಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಶ್ರೀಮಂತರ ಪರವಾಗಿವೆ. ಪ್ರಸ್ತುತ ಬಡ ಜನರು ತಮ್ಮ ಬದುಕಿಗಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೌದ್ಧ ಬಿಕ್ಕು ನ್ಯಾನಲೋಕ ಬಂತೇಜಿ, ಕ್ರೈಸ್ತ ಧರ್ಮ ಗುರು ಫಾಸ್ಟರ್ ದೇವನೇಸನ್ ಸಾಮ್ಯೂಯಲ್ ಸೇರಿದಂತೆ ವಿವಿಧ ಧರ್ಮಗಳ ಗುರುಗಳ ಸಮ್ಮುಖದಲ್ಲಿ ಬಾಗಿನ ಸಮರ್ಪಿಸಿದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್, ನಗರಸಭಾ ಸದಸ್ಯರು, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರೈತರು, ಕಾರ್ಮಿಕರು, ಮಹಿಳೆಯರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.