Monday, August 15, 2022

ನಮ್ಮ ಮುಂದಿನ ಹೋರಾಟದ ದಾರಿ ಕಂಡುಕೊಂಡಾಗ ಸ್ವಾತಂತ್ರ್ಯ ಪಡೆದಿರುವುದು ಸಾರ್ಥಕ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಭದ್ರಾವತಿ, ಆ. ೧೫ : ನಮ್ಮ ದೇಶಕ್ಕೆ ಸ್ವಾತಂತ್ರ್ಯ ಹೋರಾಟದಿಂದ ಬಂದಿದ್ದು,  ಲಕ್ಷಾಂತರ ಜನರ ತ್ಯಾಗ, ಬಲಿದಾನ, ಅನೇಕ ಮಹನೀಯರ ಪರಿಶ್ರಮವಿದೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳುವುದರ ಜೊತೆಗೆ ನಮ್ಮ ಮುಂದಿನ ಹೋರಾಟದ ದಾರಿ ಕಂಡು ಕೊಳ್ಳಬೇಕಾಗಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು.
    ಅವರು ಸೋಮವಾರ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ದೇಶದ ಇತಿಹಾಸ ಅರಿಯದವರು ಭವಿಷ್ಯದ ಇತಿಹಾಸ ಸೃಷ್ಟಿಸಲಾರರು ಎಂಬ ಮಾತು ಸತ್ಯ. ದೇಶಕ್ಕೆ ಸ್ವಾತಂತ್ರ್ಯ ಯಾರು ನೀಡಲಿಲ್ಲ ಬದಲಾಗಿ ಹೋರಾಟದ ಫಲವಾಗಿ ಲಭಿಸಿತು. ನಾವೆಲ್ಲರೂ ಇಂದು ಸ್ವಾತಂತ್ರ್ಯದ ಫಲ ಅನುಭವಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಸಹ ಹಲವಾರು ಸಮಸ್ಯೆಗಳು ನಮ್ಮ ಮುಂದಿವೆ. ನಮ್ಮ ಮುಂದಿನ ಗುರಿ, ಹೋರಾಟಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ನಮ್ಮ ದೇಶದ ಸ್ವಾತಂತ್ರ್ಯಕ್ಕೆ ನಾವೆಲ್ಲರೂ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನಿಜವಾದ ನಾಯಕರನ್ನು ನಾವುಗಳು ಗುರುತಿಸಬೇಕು. ಅವರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿ ಜಾಗೃತಗೊಳ್ಳಬೇಕೆಂದರು.
     ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಪೊಲೀಸ್ ಉಪಾಧೀಕ್ಷಕ ಐಪಿಎಸ್ ಅಧಿಕಾರಿ ಜಿತೇಂದ್ರಕುಮಾರ್ ದಯಾಮ ಹಾಗು ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಪಥಸಂಚಲನ ನಡೆಯಿತು. ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಪಥ ವಂದನೆ ಸ್ವೀಕರಿಸಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ನಿರೂಪಿಸಿದರು.

 

Sunday, August 14, 2022

೭೫ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸ್ಥಳ ಬದಲಾವಣೆ

    ಭದ್ರಾವತಿ, ಆ. ೧೪: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆ.೧೫ರಂದು ಬೆಳಿಗ್ಗೆ ೯ ಗಂಟೆಗೆ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
    ಪ್ರತಿವರ್ಷ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು.  ಆದರೆ ಈ ಬಾರಿ ಹವಾಮಾನ ವೈಪರಿತ್ಯದಿಂದಾಗಿ ಕಾರ್ಯಕ್ರಮವನ್ನು ವಿಇಎಸ್ ವಿದ್ಯಾಸಂಸ್ಥೆ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ವಿದ್ಯಾಸಂಸ್ಥೆಗಳು ಮತ್ತು ಸಾರ್ವಜನಿಕರು ಸಹಕರಿಸುವಂತೆ ಸಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.

ವಿಐಎಸ್‌ಎಲ್ ವತಿಯಿಂದ ೭೬ನೇ ಸ್ವಾತಂತ್ರ್ಯೋತ್ಸವ : ಕಾರ್ಖಾನೆ ಮುಂಭಾಗ ಬೃಹತ್ ರಾಷ್ಟ್ರ ಧ್ವಜ ಅನಾವರಣ

ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬೃಹತ್ ರಾಷ್ಟ್ರ ಧ್ವಜ ಅನಾವರಣಗೊಳಿಸಲಾಗಿದೆ.
    ಭದ್ರಾವತಿ, ಆ. ೧೪: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಆ.೧೫ರಂದು ಬೆಳಿಗ್ಗೆ ೯ ಗಂಟೆಗೆ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಖಾನೆಯ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಪ್ರಮುಖರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿಕೊಡುವಂತೆ ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖ್ಯ ವ್ಯವಸ್ಥಾಪಕ ಎಲ್. ಪ್ರವೀಣ್‌ಕುಮಾರ್ ಕೋರಿದ್ದಾರೆ.
    ಬೃಹತ್ ಧ್ವಜ ಅನಾವರಣ :
   ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬೃಹತ್ ರಾಷ್ಟ್ರ ಧ್ವಜ ಅನಾವರಣಗೊಳಿಸಲಾಗಿದೆ.
    ಕಾರ್ಖಾನೆ ವತಿಯಿಂದ ಕಳೆದ ಸುಮಾರು ೧ ವರ್ಷದಿಂದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಹಲವಾರು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ಮುಕ್ತಾಯಗೊಳ್ಳುವ ಜೊತೆಗೆ ಬಹುತೇಕ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದವು. ಕಾರ್ಖಾನೆ ಮುಂಭಾಗ ರಾಷ್ಟ್ರ ಧ್ವಜ ಆ.೧೫ರ ಸಂಜೆವರೆಗೂ ಅನಾವರಣಗೊಳ್ಳಲಿದೆ.

ಸ್ವಾತಂತ್ರ್ಯೋತ್ಸವದ ಸವಿನೆನಪಿಗೆ ಹಿರಿಯ ಸದಸ್ಯರಿಗೆ ಗೌರವಾರ್ಪಣೆ, ನೌಕರರ ವರ್ಗಕ್ಕೆ ಸನ್ಮಾನ

ಭದ್ರಾವತಿ, ಆ. 14: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ವೀರಶೈವ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ, ಉಡಿ ತುಂಬುವ ಕಾರ್ಯಕ್ರಮ ಮತ್ತು ೭೫ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗೆ ಮಹಾಸಭಾದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗು ಸಮಾಜದ ನೌಕರರ ವರ್ಗಕ್ಕೆ ಸನ್ಮಾನ ಕಾರ್ಯಕ್ರಮವನ್ನು  ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಉದ್ಘಾಟಿಸಿದರು.
      ಮಹಾಸಭಾ ಗೌರವಾಧ್ಯಕ್ಷರಾದ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀ,ಜಿ ದಿವ್ಯ ಸಾನಿಧ್ಯವಹಿದ್ದರು. ಜಿ. ಸುರೇಶಯ್ಯ ಅಧ್ಯಕ್ಷತೆ ವಹಿಸಿದ್ದರು.  ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನಡೆಸಿಕೊಟ್ಟರು.  
      ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ,  ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕರ್ನಾಟಕ ರಾಜ್ಯ ಒಳಚರಂಡಿ ಹಾಗು ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ, ಮಹಾಸಭಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ರುದ್ರಮುನಿ ಎಸ್ ಸಜ್ಜನ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಹಟ್ಟಿ ಚಿನ್ನದ ಗಣಿ ನಿರ್ದೇಶಕ ಎಸ್. ಹಾಲೇಶ್ ಕೂಡ್ಲಿಗೆರೆ ಮತ್ತು ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್. ವಿರುಪಾಕ್ಷಪ್ಪ, ಮಹಾಸಭಾ ತಾಲೂಕು ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಕೆ.ಎಸ್ ರೇವಪ್ಪ, ಖಜಾಂಚಿ ಜಿ.ಎಂ ಮೂರ್ತಿ, ನಿರ್ದೇಶಕಿಯರಾದ ಆರ್.ಎಸ್ ಶೋಭಾ, ಸೌಭಾಗ್ಯಮ್ಮ, ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಕವಿತಾ ಸುರೇಶ್, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಆನಂದ, ಬಿ.ಎಂ ರಮೇಶ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, August 13, 2022

೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ : ಜೈನ ಸಮಾಜದಿಂದ ಕಾರು, ಬೈಕ್ ಜಾಥಾ

ಭದ್ರಾವತಿಯಲ್ಲಿ ಜೈನ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರು ಮತ್ತು ಬೈಕ್ ಜಾಥಾ ಕಾರ್ಯಕ್ರಮಕ್ಕೆ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮತ್ತು ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹಾಗು ಜೈನ ಸಮಾಜದ ಪ್ರಮುಖರು ಚಾಲನೆ ನೀಡಿದರು.  
    ಭದ್ರಾವತಿ, ಅ. ೧೩: ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಶನಿವಾರ ನಗರದ ಜೈನ ಸಮಾಜದವರು ಕಾರು ಮತ್ತು ಬೈಕ್ ಜಾಥಾ ನಡೆಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನ ಕುರಿತು ಜಾಗೃತಿ ಮೂಡಿಸಿದರು.  
    ಹಳೇನಗರದ ಕನಕ ಮಂಟಪ ಮೈದಾನದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮತ್ತು ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹಾಗು ಜೈನ ಸಮಾಜದ ಪ್ರಮುಖರು ಚಾಲನೆ ನೀಡಿದರು.  
    ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ್ ಆಜಾದ್, ಸರ್ದಾರ್ ವಲ್ಲಭಾಯ್ ಪಟೇಲ್, ಲಾಲ ಲಜಪತ್ ರಾಯ್, ಬಿಪಿನ್ ಚಂದ್ರಪಾಲ್,  ಬಾಲಗಂಗಾಧರನಾಥ ತಿಲಕ್, ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ್ ಆಜಾದ್, ಸರ್ದಾರ್ ವಲ್ಲಭಾಯ್ ಪಟೇಲ್, ಲಾಲ ಲಜಪತ್ ರಾಯ್, ಬಿಪಿನ್ ಚಂದ್ರ ಪಾಲ್. ಬಾಲಗಂಗಾಧರ ತಿಲಕ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಹುತಾತ್ಮ ವೀರ ಸೈನಿಕ ಸಂದೀಪ್ ಉನ್ನಿಕೃಷ್ಣನ್ ಸೇರಿದಂತೆ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರು, ವೀರಾ ಸೇನಾನಿಗಳ, ಮಹಾಪುರುಷರ  ಭಾವಚಿತ್ರಗಳೊಂದಿಗೆ ರಾಷ್ಟ್ರ ಧ್ವಜ ಹಿಡಿದು ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.
    ಜಾಥಾ ತಾಲೂಕು ಕಚೇರಿ ರಸ್ತೆ, ಸಿ.ಎನ್ ರಸ್ತೆ, ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್, ಹುತ್ತಾ ಬಸ್ ನಿಲ್ದಾಣದವರೆಗೆ ಸಾಗಿ ಪುನಃ ಹಿಂದಿರುಗಿ ಮಾಧವಚಾರ್ ವೃತ್ತದ ಮೂಲಕ ಜೈನ ಮಂದಿರ ತಲುಪಿತು.  ಜಾಥಾದಲ್ಲಿ ಸುಮಾರು ೭೫ ಕಾರು ಹಾಗು ೨೦೦ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಾಗವಹಿಸಿದ್ದವು.
    ಜೈನ ಸಮಾಜದ ಸಂಪತ್‌ರಾಜ್ ಬಾಂಟಿಯ, ಸಂದೇಶ್, ಜಿತೇಂದರ್, ಹಿತೇಶ್, ಗೌತಮ್, ಸುರೇಶ್‌ಕುಮಾರ್, ಮುಖೇಶ್, ಶೈಲೇಂದ್ರ, ರಾಹುಲ್ ಸವಾಯ್, ಪ್ರವೀಣ್ ಸೇರಿದಂತೆ ಇನ್ನಿತರರು ಜಾಥಾ ನೇತೃತ್ವ ವಹಿಸಿದ್ದರು.  


೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಭದ್ರಾವತಿಯಲ್ಲಿ ಜೈನ ಸಮಾಜದವರು ಕಾರು ಮತ್ತು ಬೈಕ್ ಜಾಥಾ ನಡೆಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನ ಕುರಿತು ಜಾಗೃತಿ ಮೂಡಿಸಿದರು.  

ಜಿಲ್ಲಾ ವಕ್ಫ್ ಕಮಿಟಿ ಅಧ್ಯಕ್ಷರಾಗಿ ಮಹಮದ್ ಶಫಿವುಲ್ಲಾ ಅಧಿಕಾರ ಸ್ವೀಕಾರ : ಅಭಿನಂದನೆ

ಜಿಲ್ಲಾ ವಕ್ಫ್ ಕಮಿಟಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಮಹಮದ್ ಶಫಿವುಲ್ಲಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಆ. ೧೩ : ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಕಮಿಟಿ ಅಧ್ಯಕ್ಷರಾಗಿ ಮಹಮದ್ ಶಫಿವುಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ.
    ನೂತನ ಅಧ್ಯಕ್ಷರನ್ನು ಎಐಎಂಐಎಂ ಜಿಲ್ಲಾಧ್ಯಕ್ಷ ಅಬ್ದುಲ್ ನವೀದ್ ರಿಜ್ವಾನ್ ಪಾಷಾ, ಸಮಾಜ ಸೇವಕ ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಸನ್ಮಾನಿಸಿ ಅಭಿನಂದಿಸಿದರು.

ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಹೇಬ್‌ಗೆ ಸನ್ಮಾನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಹೇಬ್ ಅವರನ್ನು ಶನಿವಾರ ಭದ್ರಾವತಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಆ. ೧೩: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಹೇಬ್ ಅವರನ್ನು ಶನಿವಾರ ಸನ್ಮಾನಿಸಿ ಅಭಿನಂದಿಸಲಾಯಿತು.
    ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ವತಿಯಿಂದ ಹಳೇನಗರದ ಜಾಮೀಯ ಶಾದಿ ಮಹಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಅಬ್ದುಲ್ ಜಬ್ಬಾರ್ ಸಾಹೇಬ್ ಅವರು ೩ ಬಾರಿ ಪರಿಷತ್ ಸದಸ್ಯರಾಗುವ ಜೊತೆಗೆ ಪಕ್ಷದ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮವಹಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ನಾಗರೀಕರ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್‌ಬಾನು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಸಿ.ಎಂ ಖಾದರ್, ಅಮೀರ್ ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.