![](https://blogger.googleusercontent.com/img/a/AVvXsEi4_Jx7CEQAsPhhiApOmp7ADskJLaCD1_bd47M3l3HTrX78AAwPzoGRaNdTsJFd1YEQzGS3qipCjoWuHoHldFleUJP5qKuvd300_vCLVlzBZ8AmaihJrOOB7By_tZEL75IgQ3gXnYVaOxfGZFGvcxeHi0DtgPAf6nmVfH3wxdtGFCi1TH9vyLZHMfVLJQ=w400-h190-rw)
ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭದ್ರಾವತಿ, ಆ. ೧೫ : ನಮ್ಮ ದೇಶಕ್ಕೆ ಸ್ವಾತಂತ್ರ್ಯ ಹೋರಾಟದಿಂದ ಬಂದಿದ್ದು, ಲಕ್ಷಾಂತರ ಜನರ ತ್ಯಾಗ, ಬಲಿದಾನ, ಅನೇಕ ಮಹನೀಯರ ಪರಿಶ್ರಮವಿದೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳುವುದರ ಜೊತೆಗೆ ನಮ್ಮ ಮುಂದಿನ ಹೋರಾಟದ ದಾರಿ ಕಂಡು ಕೊಳ್ಳಬೇಕಾಗಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು.
ಅವರು ಸೋಮವಾರ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಇತಿಹಾಸ ಅರಿಯದವರು ಭವಿಷ್ಯದ ಇತಿಹಾಸ ಸೃಷ್ಟಿಸಲಾರರು ಎಂಬ ಮಾತು ಸತ್ಯ. ದೇಶಕ್ಕೆ ಸ್ವಾತಂತ್ರ್ಯ ಯಾರು ನೀಡಲಿಲ್ಲ ಬದಲಾಗಿ ಹೋರಾಟದ ಫಲವಾಗಿ ಲಭಿಸಿತು. ನಾವೆಲ್ಲರೂ ಇಂದು ಸ್ವಾತಂತ್ರ್ಯದ ಫಲ ಅನುಭವಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಸಹ ಹಲವಾರು ಸಮಸ್ಯೆಗಳು ನಮ್ಮ ಮುಂದಿವೆ. ನಮ್ಮ ಮುಂದಿನ ಗುರಿ, ಹೋರಾಟಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ನಮ್ಮ ದೇಶದ ಸ್ವಾತಂತ್ರ್ಯಕ್ಕೆ ನಾವೆಲ್ಲರೂ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನಿಜವಾದ ನಾಯಕರನ್ನು ನಾವುಗಳು ಗುರುತಿಸಬೇಕು. ಅವರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿ ಜಾಗೃತಗೊಳ್ಳಬೇಕೆಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಪೊಲೀಸ್ ಉಪಾಧೀಕ್ಷಕ ಐಪಿಎಸ್ ಅಧಿಕಾರಿ ಜಿತೇಂದ್ರಕುಮಾರ್ ದಯಾಮ ಹಾಗು ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಪಥಸಂಚಲನ ನಡೆಯಿತು. ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಪಥ ವಂದನೆ ಸ್ವೀಕರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ನಿರೂಪಿಸಿದರು.