ಭದ್ರಾವತಿಯಲ್ಲಿ ಶಾಸಕರ ಗೃಹ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಆ. ೨೦: ಕಾಂಗ್ರೆಸ್ ಪಕ್ಷದ ನಾಯಕರು ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದು, ಇಂದಿಗೂ ಮಾದರಿಯಾಗಿ ಉಳಿದುಕೊಂಡಿದ್ದಾರೆ. ಆದರೆ ಇಂದಿನ ಬಿಜೆಪಿ ನಾಯಕರು ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತಿ ದೇಶವನ್ನು ಛಿದ್ರ ಛಿದ್ರವಾಗಿಸುವ ಮೂಲಕ ಅಭದ್ರತೆ ಉಂಟು ಮಾಡುತ್ತಿದ್ದಾರೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
ಅವರು ಶನಿವಾರ ಶಾಸಕರ ಗೃಹ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದ ಆಡಳಿತ ವ್ಯವಸ್ಥೆಯಲ್ಲೂ ಎಲ್ಲರಿಗೂ ಸಮಾನವಾದ ಹಕ್ಕು ನೀಡಬೇಕೆಂಬ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಎಂಬುದನ್ನು ಯಾರು ಮರೆಯಬಾರದು. ರಾಜೀವ್ ಗಾಂಧಿ ಆಧುನಿಕ ಯುಗಕ್ಕೆ ಮುನ್ನುಡಿ ಬರೆದವರು. ಇಂತಹ ಮಹಾನ್ ನಾಯಕನನ್ನು ಈ ದೇಶದಲ್ಲಿ ಇದುವರೆಗೂ ಕಾಣಲು ಸಾಧ್ಯವಾಗಿಲ್ಲ. ಇಂದಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಕೋಮುವಾದಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಈಶ್ವರಪ್ಪ ಗಡಿಪಾರು ಮಾಡಿ:
೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಯದಲ್ಲಿ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ವಿನಾಕಾರಣ ಕೋಮು-ಗಲಭೆ ಉಂಟು ಮಾಡಲು ಯತ್ನಿಸಿದ್ದಾರೆ. ಆದರೆ ಕ್ಷೇತ್ರದ ಜನರು ಯಾವುದಕ್ಕೂ ಕಿವಿಗೊಡದೆ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕ್ಷೇತ್ರಕ್ಕೆ ಆಗಮಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇವರನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮಾತನಾಡಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳಿಗೆ ಧ್ವನಿಯಾದವರು. ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸಲು ಶ್ರಮಿಸಿದ್ದರು. ದೇಶದ ಇಂದಿನ ಬೆಳವಣಿಗೆಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕಾರಣರಾಗಿದ್ದು, ಅವರ ಭವಿಷ್ಯದ ಆಲೋಚನೆಗಳು, ಇದಕ್ಕೆ ಪೂರಕವಾಗಿ ಕೈಗೊಂಡ ಯೋಜನೆಗಳು ಇಂದಿಗೂ ಜೀವಂತವಾಗಿ ಉಳಿದುಕೊಂಡಿವೆ ಎಂದರು.
ಹಿಂದುಳಿದ ವರ್ಗಗಳ ವಿಭಾಗದ ತಾಲೂಕು ಅಧ್ಯಕ್ಷ ಬಿ. ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪ್ರಮುಖರಾದ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಡಿ.ಟಿ ಶಶಿಕುಮಾರ್, ಶಿವಮಾಧು, ಅಮೀರ್‌ಜಾನ್, ಕೃಷ್ಣಾನಾಯ್ಕ, ಗೌರಪುರ ಶಿವರಾಮ್, ಅಭಿಲಾಷ್, ಗೋಪಿ, ನಾಗರಾಜ್, ಐಸಾಕ್ ಲಿಂಕನ್, ಅಮೋಸ್, ಸತೀಶ್, ಪೀಟರ್, ಶಿವಕುಮಾರ್, ಕಾಂತರಾಜ್, ರೂಪನಾರಾಯಣ್, ಸುಮಿತ್ರಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.