ಗ್ರಾಮಾಂತರದಲ್ಲಿ ಆಯಾ ಪಂಚಾಯಿತಿಗಳಲ್ಲಿ ಅರ್ಜಿ ಸ್ವೀಕಾರ
ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಮುಂಜಾಗ್ರತೆ ಸಭೆ ನಡೆಯಿತು.
ಭದ್ರಾವತಿ, ಆ. ೨೪: ಸಾರ್ವಜನಿಕ ಸ್ಥಳಗಳಲ್ಲಿ ಈ ಬಾರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದ ಪರವಾನಗಿ ಪಡೆಯಲು ನಗರ ವ್ಯಾಪ್ತಿಯಲ್ಲಿ ನಗರಸಭೆ ಕಚೇರಿಯಲ್ಲಿ ಏಕ ಗವಾಕ್ಷಿ ಹಾಗೂ ಗ್ರಾಮಾಂತರ ಭಾಗದಲ್ಲಿ ಆಯಾ ಗ್ರಾಮ ಪಂಚಾಯಿತಿಯಲ್ಲಿ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಮುಂಜಾಗ್ರತ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಗ್ರಾಮಾಂತರ ಭಾಗದಲ್ಲಿ ನೇರವಾಗಿ ಪರವಾನಗಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಮೆಸ್ಕಾಂ ಅಭಿಪ್ರಾಯ ಪಡೆದು ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಕನಿಷ್ಠ ಎರಡು ದಿನಗಳಲ್ಲಿ ಅನುಮತಿ ನೀಡುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಲಾಯಿತು.
ಪೆಂಡಾಲ್‌ಗಳಲ್ಲಿ ಆಯೋಜಕರೇ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲು, ಅಗ್ನಿ ಅವಘಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು, ಸ್ವಯಂಸೇವಕರನ್ನು ಗುರುತಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಹಾಗೂ ಸಾಧ್ಯವಾದಷ್ಟು ಪರಿಸರ ಸ್ನೇಹಿ ಮತ್ತು ರಾಸಾಯನಿಕ ಮುಕ್ತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಮತ್ತು ವಿಸರ್ಜನೆ ಸಂದರ್ಭದಲ್ಲಿ ಈಜು ತಜ್ಞರನ್ನು ನೇಮಿಸಿಕೊಳ್ಳುವಂತೆ ತಿಳಿಸಲು ಕ್ರಮ ಕೈಗೊಳ್ಳುವುದು.
ಪ್ಲೆಕ್ಸ್ ವಿಚಾರದಲ್ಲಿ ಸ್ಥಳೀಯ ಪಂಚಾಯಿತಿಗಳು ಮುನ್ನೆಚ್ಚರಿಕೆ ಕ್ರಮವಹಿಸುವುದು. ಈ ಸಂಬಂಧ ಪಂಚಾಯಿತಿ ಮಟ್ಟದಲ್ಲಿ ಶಾಂತಿ ಸಭೆ ಮಾದರಿಯಲ್ಲಿ ಪೂರ್ವಭಾವಿ ಸಭೆ ನಡೆಸುವುದು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವಂತೆ ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಎಲ್ಲರೂ ಹಬ್ಬವನ್ನು ಸಂಭ್ರಮದಿಂದ ಶಾಂತಿ ಸೌಹಾರ್ದತೆಯಿಂದ ಆಚರಿಸುವಂತೆ ನೋಡಿಕೊಳ್ಳಲು ತಿಳಿಸಲಾಯಿತು.
ಸಭೆಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರ, ಗ್ರಾಮಾಂತರ, ಪೇಪರ್ ಟೌನ್ ಮತ್ತು ಹೊಳೆಹೊನ್ನೂರು ಪೊಲೀಸ್ ವೃತ್ತ ನಿರೀಕ್ಷಕರು, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಕಂದಾಯ, ಮೆಸ್ಕಾಂ, ತಾಲೂಕ್ ಪಂಚಾಯಿತಿ, ಅಬಕಾರಿ, ಅರಣ್ಯ, ಅಗ್ನಿಶಾಮಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.
ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆಯಲ್ಲಿ ಬುಧವಾರ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಅಳವಡಿಕೆಗೆ ವಿರೋಧ :
ಯಾವುದೇ ಸಂದರ್ಭದಲ್ಲೂ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ನಗರಸಭಾ ಸದಸ್ಯರು ಆಗ್ರಹಿಸಿದರು.
ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಬುಧವಾರ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿ.ಕೆ ಮೋಹನ್ ಸೇರಿದಂತೆ ಬಹುತೇಕ ಸದಸ್ಯರು ಮಾತನಾಡಿ, ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇದು ಕಾರ್ಯಗತಗೊಂಡಿಲ್ಲ. ಫ್ಲೆಕ್ಸ್ ಅಳವಡಿಕೆಯಿಂದ ಸಾಕಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ಮನವರಿಕೆ ಮಾಡಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ನಗರಸಭಾ ಸದಸ್ಯ ವಿ. ಕದಿರೇಶ್ ಮಾತನಾಡಿ, ಮಹಾಸಭಾ ವತಿಯಿಂದ ಅನೇಕ ವರ್ಷಗಳಿಂದ ರಾಜಕೀಯ ಪ್ರೇರಿತವಲ್ಲದ ಫ್ಲೆಕ್ಸ್‌ಗಳನ್ನು ಅಳವಡಿಸಿಕೊಂಡು ಬರಲಾಗುತ್ತಿದೆ. ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ವಿಸರ್ಜನೆ ಸಂದರ್ಭದಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ:
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಮೂರ್ತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಪ್ರಮುಖ ವೃತ್ತಗಳು ಸೇರಿದಂತೆ ಸೂಕ್ಷ್ಮ ಸ್ಥಳಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಕದಿರೇಶ್ ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಮನುಕುಮಾರ್ ನಗರಸಭೆಯಲ್ಲಿ ಎಲ್ಲಾ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಷ್ಟು ಹಣ ಇಲ್ಲ. ಆದರೆ ಎಲ್ಲೆಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಿಕೊಡಲಾಗುವುದು. ಅಲ್ಲದೆ ವಿಸರ್ಜನಾ ಸ್ಥಳದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.