ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್-ರೇಂಜರ‍್ಸ್, ಯುವ ರೆಡ್ ಕ್ರಾಸ್ ಮತ್ತು ಎನ್‌ಸಿಸಿ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಸೆ. ೧೯ : ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವ ಜೊತೆಗೆ ಭವಿಷ್ಯ ರೂಪಿಸಿಕೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್-ರೇಂಜರ‍್ಸ್, ಯುವ ರೆಡ್ ಕ್ರಾಸ್ ಮತ್ತು ಎನ್‌ಸಿಸಿ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಚಾರಿತ್ರ್ಯವಂತರಾದಾಗ ನವಭಾರತ ನಿರ್ಮಾಣ ಸಾಧ್ಯ. ಯುವ ಜನತೆ ಸಮಾಜದ ಅತ್ಯಮೂಲ್ಯ ಸಂಪತ್ತು. ಯುವಶಕ್ತಿಯನ್ನು ರಚನಾತ್ಮಕ ಕೆಲಸಗಳಿಗೆ ಬಳಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಪೋಷಕರು ಮತ್ತು ಗುರುಗಳನ್ನು ಗೌರವಿಸಿ ಅವರ ಮಾರ್ಗದರ್ಶನದಲ್ಲಿ ಜೀವನ ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು, ವಿದ್ಯೆ ಜೊತೆಗೆ ಸಾಹಿತ್ಯ, ಕ್ರೀಡೆ, ಮತ್ತು ಸಮಾಜ ಸೇವೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕೆಂದರು.
ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ, ಶಿಕ್ಷಣ ತಜ್ಞ ಎಚ್.ಎನ್ ಮಹಾರುದ್ರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಅನಿತಾ ಮಲ್ಲೇಶ್, ಮಣಿ ಎಎನ್‌ಎಸ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪರಮೇಶ್ವರಪ್ಪ, ಷಣ್ಮುಗಂ, ಶಿವಲಿಂಗಂ, ಸೂರ್ಯಕಲಾ, ರಾಜೇಶ್, ತಳ್ಳಿಕಟ್ಟೆ ಲೋಕೇಶ್, ಪುಟ್ಟೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಳೇಯ ವಿದ್ಯಾರ್ಥಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಖೋ ಖೋ ಕ್ರೀಡಾಪಟು ಎ. ಮುನಿರ್ ಬಾಷಾ ಅವರನ್ನು ಸನ್ಮಾನಿಸಲಾಯಿತು. ನಗರಸಭಾ ಸದಸ್ಯ ಬಿ.ಕೆ ಮೋಹನ್ ಬಹುಮಾನಗಳನ್ನು ವಿತರಿಸಿದರು. ಅಪೂರ್ವ ಸಂಗಡಿಗರು ಪ್ರಾರ್ಥಿಸಿದರು. ಆಯುಷಾ ಸಿದ್ದಿಕಾ ಸ್ವಾಗತಿಸಿದರು. ರೇವತಿ ಮತ್ತು ತೇಜಸ್ವಿನಿ ನಿರೂಪಿಸಿ ಕೆ. ಚಂದನ ವಂದಿಸಿದರು.