ಗುರುವಾರ, ಅಕ್ಟೋಬರ್ 13, 2022

ಬಾಬಳ್ಳಿ ಗ್ರಾಮದಲ್ಲಿ ಅ.೧೫ರಂದು ವಿದ್ಯುತ್ ಅದಾಲತ್




    ಭದ್ರಾವತಿ, ಅ. ೧೩: ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಮೆಸ್ಕಾಂ ವತಿಯಿಂದ ಗ್ರಾಮ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
    ಅ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಾಂತರ ಉಪವಿಭಾಗ, ಘಟಕ-೩ರ ಕೂಡ್ಲಿಗೆರೆ ಶಾಖೆಯಲ್ಲಿನ ಕಾಗೆಕೋಡಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬಳ್ಳಿ ಗ್ರಾಮದಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
    ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅದಾಲತ್‌ನಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಹವಾಲುಗಳಿದ್ದಲ್ಲಿ ಪರಿಹರಿಸಿಕೊಳ್ಳಲು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ. 

ವಿಐಎಸ್‌ಎಲ್ ಖಾಸಗೀಕರಣ ಕೈಬಿಟ್ಟಿರುವುದು ಒಳ್ಳೆಯ ಬೆಳವಣಿಗೆ, ಅಗತ್ಯವಿರುವ ಬಂಡವಾಳ ತೊಡಗಿಸಿ

ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಆಗ್ರಹ

ಜೆ. ಜಗದೀಶ್
    ಭದ್ರಾವತಿ, ಅ. ೧೩ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಕೈಬಿಟ್ಟಿರುವುದು ಒಳ್ಳೆಯ ಬೆಳವಣಿಯಾಗಿದ್ದು, ಉಕ್ಕು ಪ್ರಾಧಿಕಾರ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಆಗ್ರಹಿಸಿದ್ದಾರೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗಲು ಬಂಡವಾಳದಾರರು ಆಸಕ್ತಿ ತೋರಿಸದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಕೈಬಿಟ್ಟಿದೆ. ಇದರಿಂದ ಈ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಮನವರಿಕೆಯಾಗಿದೆ ಎಂದರು.


    ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ ಸುಮಾರು ೨೦ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯಲಿದೆ. ಖಾಸಗೀಕರಣ ಪ್ರಕ್ರಿಯೆ ಕೈಬಿಟ್ಟಿರುವ ಹಿನ್ನಲೆಯಲ್ಲಿ ಈಗಲಾದರೂ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಬೇಕು. ಕಳೆದ ಸುಮಾರು ೩೦ ವರ್ಷಗಳಿಂದ ಅಗತ್ಯವಿರುವ ಬಂಡವಾಳ ತೊಡಗಿಸದೆ ಉಕ್ಕು ಪ್ರಾಧಿಕಾರ ಮಲತಾಯಿ ಧೋರಣೆ ಅನುಸರಿಸಿಕೊಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಧಿಕಾರಕ್ಕೆ ಬಂಡವಾಳ ತೊಡಗಿಸಲು ನಿರ್ದೇಶಿಸಬೇಕೆಂದು ಆಗ್ರಹಿಸಿದರು.
    ರಾಜ್ಯ ಸರ್ಕಾರ ಈಗಾಗಲೇ ಅಗತ್ಯವಿರುವ ಗಣಿ ಮಂಜೂರಾತಿ ಮಾಡಿದ್ದು, ಗಣಿಗಾರಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಮುಂದಿನ ಒಂದೂವರೆ ವರ್ಷದಲ್ಲಿ ಗಣಿಗಾರಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ. ಅಷ್ಟರಲ್ಲಿ ಸರ್ಕಾರ ಅಗತ್ಯವಿರುವ ಬಂಡವಾಳ ತೊಡಗಿಸಿದ್ದಲ್ಲಿ ಕಾರ್ಖಾನೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಲು ಸಾಧ್ಯ. ಪ್ರಸ್ತುತ ಬೆಳವಣಿಗೆ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ಜನಪ್ರತಿನಿಧಿಗಳ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುವುದು ಎಂದರು.

ರೇಖಿ ಚಿಕಿತ್ಸಕ ಎಂ.ಡಿ ಬೋರಲಿಂಗಯ್ಯ ನಿಧನ

ಎಂ.ಡಿ ಬೋರಲಿಂಗಯ್ಯ
    ಭದ್ರಾವತಿ, ಅ. ೧೩ : ನಗರದ ಹುತ್ತಾಕಾಲೋನಿ ನಿವಾಸಿ, ರೇಖಿ ಚಿಕಿತ್ಸಕ ಎಂ.ಡಿ ಬೋರಲಿಂಗಯ್ಯ(೮೪) ಗುರುವಾರ ನಿಧನ ಹೊಂದಿದರು.
    ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ಹುತ್ತಾಕಾಲೋನಿ ನಂದಿ ಈಶ್ವರ-ಸಂಕಷ್ಟಹರ ಗಣಪತಿ ದೇವಸ್ಥಾನ ಸಮೀಪ ವಾಸವಿದ್ದರು. ಮೂಲತಃ ಮೆಕಾನಿಕಲ್ ಇಂಜಿನಿಯರ್ ಪದವಿಧರರಾಗಿದ್ದ ಬೋರಲಿಂಗಯ್ಯ ಕರುಣ ರೇಖಿ ಚಿಕಿತ್ಸೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ನೈಸರ್ಗಿಕ ಹೀಲಿಂಗ್‌ನಲ್ಲೂ ಬೋಧಕ ಮಟ್ಟದ ತರಬೇತಿ ಪಡೆದುಕೊಂಡಿದ್ದರು. ರೇಖಿ ಗ್ರಾಂಡ್ ಮಾಸ್ಟರ್ ಎಂದು ಗುರುತಿಸಿಕೊಂಡಿದ್ದರು.
    ಇವರ ಅಂತ್ಯಕ್ರಿಯೆ ಸಂಜೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಬುಧವಾರ, ಅಕ್ಟೋಬರ್ 12, 2022

ಅ.೧೪ರಿಂದ ೧೬೦೪ನೇ ಮದ್ಯವರ್ಜನ ಶಿಬಿರ



    ಭದ್ರಾವತಿ, ಅ. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಳೇನಗರ ವಲಯ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಆರಕ್ಷಕ ಠಾಣೆ, ಪತ್ರಕರ್ತರ ಸಂಘ ಹಾಗು ನವಜೀವನ ಸಮಿತಿ ಮತ್ತು ಇನ್ನಿತರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಅ.೧೪ರಿಂದ ೨೧ರ ವರೆಗೆ ೧೬೦೪ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಅ.೧೪ರಂದು ಬೆಳಿಗ್ಗೆ ೧೦.೩೦ಕ್ಕೆ ಉದ್ಘಾಟಿಸುವರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಅನಂದಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷೆ ಆರ್. ಕರುಣಾಮೂರ್ತಿ, ನ್ಯಾಯವಾದಿ ಮಂಗೋಟೆ ರುದ್ರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಓ ಶಕ್ತಿ ಡೆವಲಪರ‍್ಸ್ ಅಶೋಕ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಪಾಲಾಕ್ಷಪ್ಪ ಮತ್ತು ಜಯರಾಂ ಗೊಂದಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆರ್. ನಾಗರಾಜ ಆಯ್ಕೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆರ್. ನಾಗರಾಜ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಅ. ೧೨ : ತಾಲೂಕಿನ ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆರ್. ನಾಗರಾಜ ಆಯ್ಕೆಯಾಗಿದ್ದಾರೆ.
    ಸಂಘದ ಅಧ್ಯಕ್ಷ ಎನ್.ಎಚ್ ಮಹೇಶ್‌ರವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಆರ್. ನಾಗರಾಜ ಆಯ್ಕೆಯಾದರು.
    ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ(ಎಸ್.ಟಿ) ತಾಲೂಕು ಘಟಕದ ಅಧ್ಯಕ್ಷ, ಗ್ರಾಮದ ಮುಖಂಡ ಎಸ್. ಮಹಾದೇವ ಕೂಡ್ಲಿಗೆರೆ ನೂತನ ನಿರ್ದೇಶಕ ಆರ್. ನಾಗರಾಜ ಅವರನ್ನು ಅಭಿನಂದಿಸಿದ್ದಾರೆ.

ಹಿಂದೂ ಮಹಾಸಭಾ ವತಿಯಿಂದ ಗೃಹ ಸಚಿವರಿಗೆ ಸನ್ಮಾನ

ಭದ್ರಾವತಿಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೧೨ : ನಗರದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗ್ರಾಮಾಂತರ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿದ ಗೃಹ ಸಚಿವರನ್ನು ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್ ಹಿಂದೂ ಮಹಾಸಭಾ ಗಣಪತಿ ಭಾವಚಿತ್ರ ನೀಡಿ ಸನ್ಮಾನಿಸಿದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪ್ರಮುಖರಾದ ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಕೆ. ಮಂಜುನಾಥ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೋಟ್ಪಾ ಕಾಯ್ದೆಯಡಿ ದಾಳಿ : ೩,೨೫೦ ರು. ದಂಡ ವಸೂಲಿ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ನಗರದ ಅಶ್ವಥ್ ನಗರ ಹಾಗೂ ಹೊಸಮನೆ  ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ  ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
    ಭದ್ರಾವತಿ, ಅ. ೧೨ : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ನಗರದ ಅಶ್ವಥ್ ನಗರ ಹಾಗೂ ಹೊಸಮನೆ  ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ  ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೩,೨೫೦ ರು.  ದಂಡ ವಿಧಿಸಿರುವ ಘಟನೆ ನಡೆದಿದೆ.
    ಕಾರ್ಯಾಚರಣೆಯಲ್ಲಿ ನಗರ ಆರೋಗ್ಯ ಕೇಂದ್ರ ಅಶ್ವತ್ ನಗರ ವೈದ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ತಾಲೂಕು ಎಚ್‌ಐಓ ಆನಂದಮೂರ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಹೇಮಂತ್ ರಾಜ್,  ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆಯ ರಮೇಶ್, ನಗರ ಆರೋಗ್ಯ ಕೇಂದ್ರದ ಚೇತನ್, ಪ್ರಾಥಮಿಕ ಆರೋಗ್ಯ ಕೇಂದ್ರದ ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.