Monday, October 31, 2022

ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನ ಸಮಿತಿಯಿಂದ ಶಾಸಕರಿಗೆ ಸನ್ಮಾನ

೬೦ನೇ ವರ್ಷದ ಹುಟ್ಟುಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಭದ್ರಾವತಿ ಬಿ.ಎಚ್ ರಸ್ತೆ, ೨ನೇ ವಾರ್ಡ್ ವ್ಯಾಪ್ತಿಯ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ ಸಮಿತಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೩೧: ೬೦ನೇ ವರ್ಷದ ಹುಟ್ಟುಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ನಗರದ ಬಿ.ಎಚ್ ರಸ್ತೆ, ೨ನೇ ವಾರ್ಡ್ ವ್ಯಾಪ್ತಿಯ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ ಸಮಿತಿ ಸನ್ಮಾನಿಸಿ ಗೌರವಿಸಲಾಯಿತು.
      ನಗರದ ಪ್ರಮುಖ ದೇವಾಲಯಗಳಲ್ಲಿ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸಹ ಒಂದಾಗಿದ್ದು, ಪ್ರತಿವರ್ಷ ನಾಡಹಬ್ಬ ದಸರಾ  ಉತ್ಸವಕ್ಕೆ  ಈ ದೇವಸ್ಥಾನದ ಮುಂಭಾಗದಲ್ಲಿಯೇ ಚಾಲನೆ ನೀಡುವುದು ವಿಶೇಷವಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್‌ರವರು ೬೦ ವಸಂತಗಳನ್ನು ಪೂರೈಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು.
      ಯುವ ಮುಖಂಡ ಬಿ.ಎಸ್ ಗಣೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ರಂಗನಾಥರಾವ್ ಕರಾಡೆ, ಪ್ರಧಾನ ಕಾರ್ಯದರ್ಶಿ ಪರಶುರಾಮರಾವ್(ರಘು) ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Sunday, October 30, 2022

ಡಾ. ಪುನೀತ್‌ರಾಜ್‌ಕುಮಾರ್ ಮೊದಲ ಪುಣ್ಯಸ್ಮರಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದಾಪುರದಲ್ಲಿರುವ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಚಲನಚಿತ್ರ ನಟ, ಸಮಾಜ ಸೇವಕ, ಪವರ್‌ಸ್ಟಾರ್ ಡಾ. ಪುನೀತ್‌ರಾಜ್‌ಕುಮಾರ್‌ರವರ ಮೊದಲನೇ ಪುಣ್ಯಸ್ಮರಣೆ ನಡೆಯಿತು.
    ಭದ್ರಾವತಿ, ಅ. ೩೦: ನಗರಸಭೆ ವ್ಯಾಪ್ತಿಯ ಸಿದ್ದಾಪುರದಲ್ಲಿರುವ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಚಲನಚಿತ್ರ ನಟ, ಸಮಾಜ ಸೇವಕ, ಪವರ್‌ಸ್ಟಾರ್ ಡಾ. ಪುನೀತ್‌ರಾಜ್‌ಕುಮಾರ್‌ರವರ ಮೊದಲನೇ ಪುಣ್ಯಸ್ಮರಣೆ ನಡೆಯಿತು.
    ಪುನೀತ್‌ರಾಜ್‌ಕುಮಾರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಚಿತ್ರರಂಗಕ್ಕೆ ಹಾಗು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಲಾಯಿತು. ಸುರಕ್ಷಾ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ, ಖಜಾಂಚಿ ಪ್ರಶಾಂತ್, ಕಾರ್ಯದರ್ಶಿ ಸೋಮಶೇಖರ್, ಟ್ರಸ್ಟಿಗಳಾದ ಜ್ಯೋತಿ ರಂಗನಾಥ್, ಕುಮಾರ್, ಸಂಜು, ಲಲಿತಾ, ಸೌಮ್ಯ ಸೇರಿದಂತೆ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು ಇನ್ನಿತರರು ಉಪಸ್ಥಿತರಿದ್ದರು.

ಪುರಸಭೆ ಮಾಜಿ ಅಧ್ಯಕ್ಷೆ ಸರೋಜಮ್ಮ ಮುಳ್ಳೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭದ್ರಾವತಿ ಪುರಸಭೆ ಮಾಜಿ ಅಧ್ಯಕ್ಷೆ ಸರೋಜಮ್ಮ ಮುಳ್ಳೇಗೌಡರ ಮನೆಗೆ ಭೇಟಿ ನೀಡಿ ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸಿದರು.
    ಭದ್ರಾವತಿ, ಅ. ೩೦ : ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುರಸಭೆ ಮಾಜಿ ಅಧ್ಯಕ್ಷೆ ಸರೋಜಮ್ಮ ಮುಳ್ಳೇಗೌಡರ ಮನೆಗೆ ಭೇಟಿ ನೀಡಿ ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸಿದರು.
    ಕಳೆದ ೨ ದಿನಗಳ ಹಿಂದೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ೬೦ನೇ ಹುಟ್ಟುಹಬ್ಬ ನಮ್ಮ ಅಭಿಮಾನ ಸಂಗಮೇಶೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಆರ್ ಸೀತಾರಾಮ್, ಶಾಸಕರಾದ ಬಿ.ಕೆ ಸಂಗಮೇಶ್ವರ್, ಭೈರತಿ ಸುರೇಶ್ ಸೇರಿದಂತೆ ಇನ್ನಿತರರು ಸಿದ್ದರೂಢನಗರದಲ್ಲಿರುವ ಸರೋಜಮ್ಮ ಮುಳ್ಳೇಗೌಡರವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸಿದರು.
    ನಗರಸಭೆ ಸದಸ್ಯ ಆರ್. ಶ್ರೇಯಸ್(ಚಿಟ್ಟೆ), ಮಾಜಿ ಅಧ್ಯಕ್ಷೆ ವೈ. ರೇಣುಕಮ್ಮ, ವೈದ್ಯ ಡಾ. ಓ. ಮಲ್ಲಪ್ಪ, ಮಾಜಿ ಸದಸ್ಯ ಪ್ರಕಾಶ್‌ರಾವ್, ತಾಲೂಕು ಕುರುಬರ ಸಂಘದ ಮಾಜಿ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗು ಸರೋಜಮ್ಮ ಕುಟುಂಬಸ್ಥರು ಇನ್ನಿತರರು ಉಪಸ್ಥಿತರಿದ್ದರು.

ದೀಪೋತ್ಸವ, ತಿರುಪತಿ ಮಾದರಿ ಹುಂಡಿ ಪ್ರತಿಷ್ಠಾಪನೆ

ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ಮೊದಲ ದೀಪೋತ್ಸವ ಹಾಗು ಹುಂಡಿ ಪ್ರತಿಷ್ಠಾಪನೆ ನಡೆಯಿತು.
    ಭದ್ರಾವತಿ, ಅ. ೩೦ : ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ಮೊದಲ ದೀಪೋತ್ಸವ ಹಾಗು ಹುಂಡಿ ಪ್ರತಿಷ್ಠಾಪನೆ ನಡೆಯಿತು.
      ದೇವಾಲಯದಲ್ಲಿ ವಂದೇ ಮಾತರಂ ಟ್ರಸ್ಟ್ ವತಿಯಿಂದ ಹಲವಾರು ಧಾರ್ಮಿಕ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ದಾನಿಗಳು ಹಾಗು ಭಕ್ತರ ಸಹಕಾರದೊಂದಿಗೆ ದೇವಾಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಸಹ ನಡೆಯುತ್ತಿವೆ. ಈ ಬಾರಿ ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ತಿರುಪತಿ ಮಾದರಿ ಹುಂಡಿಯನ್ನು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಟ್ರಸ್ಟ್ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಹಾಗು ದೇವಾಲಯದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಉಪವಿಭಾಗದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ

ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಭದ್ರಾವತಿ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ  ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಬ್ರೀಫಿಂಗ್ ಮಾಡಿ, ನಿರ್ವಹಿಸಬೇಕಾದ ಕರ್ತವ್ಯ ಮತ್ತು ಮೇಲಾಧಿಕಾರಿಗಳ ಸೂಚನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
    ಭದ್ರಾವತಿ, ಅ. ೩೦: ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ  ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಬ್ರೀಫಿಂಗ್ ಮಾಡಿ, ನಿರ್ವಹಿಸಬೇಕಾದ ಕರ್ತವ್ಯ ಮತ್ತು ಮೇಲಾಧಿಕಾರಿಗಳ ಸೂಚನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
      ಇಲ್ಲಿನ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಸೂಕ್ಷ್ಮ ಪ್ರದೇಶಗಳಿದ್ದು, ಹೆಚ್ಚಿನ ಮುನ್ನಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಅದರಲ್ಲೂ ನಗರ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಹೆಚ್ಚಿನ ಗಂಭೀರವಾದ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನಲೆಯಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಲಾಯಿತು. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಲಾಯಿತು.
      ಜಿ.ಕೆ ಮಿಥುನ್‌ಕುಮಾರ್ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ಕೈಗೊಳ್ಳುವ ಮೂಲಕ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

Saturday, October 29, 2022

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮೊಳಗಿದ ಕೋಟ ಕಂಠ ಗಾಯನ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋಟಿ ಕಂಠ ಗಾಯನ ಯಶಸ್ವಿಯಾಗಿ ಜರುಗಿತು.
    ಭದ್ರಾವತಿ, ಅ. ೨೯ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋಟಿ ಕಂಠ ಗಾಯನ ಯಶಸ್ವಿಯಾಗಿ ಜರುಗಿತು.
      ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳ ವತಿಯಿಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ವಿವಿಧ ಮಹಿಳಾ ಸಂಘಟನೆಗಳು, ಕಲಾವಿದರು, ಶಾಲಾ ಮಕ್ಕಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜರುಗಿದ ಕಾರ್ಯಕ್ರಮದಲ್ಲಿ ನಾಡಗೀತೆ, ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಹಾಡುಗಳ ಗಾಯನ ನಡೆಯಿತು.
      ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಲಾವಿದರಾದ ಭದ್ರಾವತಿ ವಾಸು, ಅಪೇಕ್ಷ ಮಂಜುನಾಥ್, ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥಶರ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೬೭ನೇ ಕನ್ನಡ ರಾಜ್ಯೋತ್ಸವ

ಭದ್ರಾವತಿ, ಅ. ೨೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ೬೭ನೇ ಕನ್ನಡ ರಾಜ್ಯೋತ್ಸವ ಬೆಳಿಗ್ಗೆ ೯ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
      ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
      ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣ ಗೌಡ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
      ಇದಕ್ಕೂ ಮೊದಲು ಬೆಳಿಗ್ಗೆ ೮ ಗಂಟೆಗೆ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.