ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆಯಲ್ಲಿ ಆಯ-ವ್ಯಯ ಪೂರ್ವಭಾವಿ ಸಭೆಯಲ್ಲಿ ಪೌರಾಯುಕ್ತ ಎಚ್.ಎಂ ಮನುಕುಮಾರ್ ನಿರೀಕ್ಷಿತ ಆದಾಯ ಕುರಿತು ಹಾಗು ಕೈಗೊಳ್ಳಲು ಉದ್ದೇಶಿಸಲಾಗಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಭದ್ರಾವತಿ, ಡಿ. ೩೧ : ಆದಾಯ ಹೆಚ್ಚಿಸಿಕೊಳ್ಳುವ ಕಡೆಯ ಹೆಚ್ಚಿನ ಗಮನ ನೀಡುವ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ನಗರಸಭೆ ಆಡಳಿತಕ್ಕೆ ಸಲಹೆ ನೀಡಿದರು.
ಶನಿವಾರ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯ-ವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅನಗತ್ಯವಾಗಿ ತೆರಿಗೆ ಹೆಚ್ಚು ಮಾಡುವ ಮೊದಲು ನಗರಸಭೆಗೆ ಆದಾಯ ಬರುವ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಕಳಪೆ ಕಾಮಗಾರಿಗಳಿಗೆ ಕಡಿವಾಣ ಹಾಕಬೇಕು. ಎಲ್ಲಾ ವಾರ್ಡ್‌ಗಳಲ್ಲೂ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಕಲ್ಪಿಸಿಕೊಡಬೇಕು. ಎಲ್ಲೆಡೆ ನೈರ್ಮಲ್ಯ ಕಾಪಾಡಿಕೊಳ್ಳುವ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ಎಲ್.ವಿ ರುದ್ರಪ್ಪ, ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ಅಧ್ಯಕ್ಷ ಬಿ. ಚಂದ್ರಶೇಖರಯ್ಯ, ಕೆ.ಎಂ ಸತೀಶ್, ವರ್ತಕರ ಸಂಘದ ಅಧ್ಯಕ್ಷ ಸಿ.ಎನ್ ಗಿರೀಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಬಿಜೆಪಿ ಮುಖಂಡ ಟಿ. ವೆಂಕಟೇಶ್ ಸೇರಿದಂತೆ ಪ್ರಮುಖರು ಸಲಹೆ-ಸೂಚನೆಗಳನ್ನು ನೀಡಿದರು.
ಇದಕ್ಕೂ ಮೊದಲು ಪೌರಾಯುಕ್ತ ಎಚ್.ಎಂ ಮನುಕುಮಾರ್ ಸುಮಾರು ೧೦,೩೬೫ ಲಕ್ಷ ರು. ನಿರೀಕ್ಷಿತ ಆದಾಯ ಕುರಿತು ಹಾಗು ಕೈಗೊಳ್ಳಲು ಉದ್ದೇಶಿಸಲಾಗಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಉಪಾಧ್ಯಕ್ಷ ಚನ್ನಪ್ಪ, ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.