ಪ್ರಮುಖ ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
![](https://blogger.googleusercontent.com/img/a/AVvXsEhB8jxUZHBXeUP-_w5olCm-lBm5dH3pj4sgMjnfHnSgC41_qzJ6Jg8vCOcFY8_wIhBLuEXZCRpI9MnidJFXjkV5VLAgS6ZjyKxRdNYwGjyJPN8LFNpaSLPHFQrzQLwis7SeFvmIPH-NzCB5tLGv6hly8InjuEfwWg2UD2U6RhabgAHAkHnxY1PXBmo8Lw=w400-h189-rw)
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ಬಂದ್ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರು ಅಂಡರ್‌ಬ್ರಿಡ್ಜ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಹಾಗು ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿ, ಫೆ.೨೪: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಶುಕ್ರವಾರ ಹಮ್ಮಿಕೊಂಡಿದ್ದ ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ, ಸಂಘ-ಸಂಸ್ಥೆಗಳಿಂದ, ನಾಗರೀಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಸ್ವಯಂ ಪ್ರೇರಿತರಾಗಿ ಬೆಳಿಗ್ಗೆಯಿಂದಲೇ ಹೋಟೆಲ್‌ಗಳು, ಪೆಟ್ರೋಲ್ ಬಂಕ್‌ಗಳು, ಚಿತ್ರಮಂದಿರಗಳು ಸೇರಿದಂತೆ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಸರ್ಕಾರಿ ಹಾಗು ಖಾಸಗಿ ಬಸ್‌ಗಳು, ಆಟೋ ಸಂಚಾರ ಸ್ಥಗಿತಗೊಂಡಿತ್ತು. ಶಾಲಾ-ಕಾಲೇಜುಗಳು ರಜೆ ಘೋಷಿಸಿದ್ದವು. ಉಳಿದಂತೆ ಕೆಲವು ಸರ್ಕಾರಿ ಕಛೇರಿಗಳು ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ರಜೆ ಘೋಷಿಸಿದ್ದವು. ನಗರದ ವಕೀಲರು ಸಹ ನ್ಯಾಯಾಲಯಗಳಲ್ಲಿ ಕಲಾಪಗಳಿಂದ ದೂರ ಉಳಿದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಬೆಂಬಲ ವ್ಯಕ್ತಪಡಿಸಿದರು.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ಬಂದ್ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಿಕೋ ಎನ್ನುತ್ತಿರುವುದು.
ನಗರದ ಪ್ರಮುಖ ವೃತ್ತಗಳಲ್ಲಿ ಗುತ್ತಿಗೆ ಕಾರ್ಮಿಕರು ಟೈರ್‌ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಕ್ಷೇತ್ರದಾದ್ಯಂತ ಬೈಕ್ ರ‍್ಯಾಲಿ ನಡೆಸಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾಯಂ ಹಾಗು ನಿವೃತ್ತ ಕಾರ್ಮಿಕ ಸಂಘಟನೆಗಳ ಪ್ರಮುಖರು, ತಾಲೂಕು ವರ್ತಕರ ಸಂಘ, ರೈತ ಸಂಘ, ಕನ್ನಡ ಸಾಹಿತ್ಯ ಪರಿಷತ್, ಕೇರಳ ಸಮಾಜ, ಕ್ರೈಸ್ತ ಸಮಾಜ, ಮಾಜಿ ಸೈನಿಕರ ಸಂಘ, ಮಾದಿಗ ಸಮಾಜ, ಜಯಕರ್ನಾಟಕ ಸಂಘಟನೆ, ಒಕ್ಕಲಿಗರ ಸಂಘ, ಭದ್ರಾವತಿ ಪ್ರಜಾ ವಿಮೋಚನೆ ಸಂಘ, ಮಾನವ ಹಕ್ಕುಗಳ ಹೋರಾಟ ಸಮಿತಿ, ಕರುನಾಡು ಪ್ರಜಾ ಸಂರಕ್ಷಣಾ ವೇದಿಕೆ, ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್, ಸರ್ಕಾರಿ ಪಡಿತರ ವಿತರಕರ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವಾಲ್ಮೀಕಿ ಸಮಾಜ, ಅಂಬೇಡ್ಕರ್ ಯುವ ಪಡೆ, ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಕಾಂಗ್ರೆಸ್, ಜೆಡಿಎಸ್, ಎಎಪಿ, ಕೆಆರ್‌ಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಬೆಂಬಲ ಸೂಚಿಸಿದ್ದವು.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ಬಂದ್ ಹಿನ್ನಲೆಯಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಪ್ರಮುಖರು ಮಾತನಾಡಿದರು.
ಬಂದ್ ಹಿನ್ನಲೆಯಲ್ಲಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವಾಣಿಜ್ಯ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಹಾಲು, ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಎಂದಿನಂತೆ ನಡೆಯಿತು.
ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಿಂದ ತಾಲೂಕು ಕಛೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ರೈತ ಮುಖಂಡ ಕೆ.ಟಿ ಗಂಗಾಧರ್ ಸೇರಿದಂತೆ ಸಂಘ-ಸಂಸ್ಥೆಗಳ ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಧ್ಯಾಹ್ನ ವರ್ತಕರ ಸಂಘದ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ಬಂದ್ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.