ಮನವಿ ಸಲ್ಲಿಸಲು ಅವಕಾಶ ನೀಡದೆ ವಶಕ್ಕೆ ಪಡೆದು ಪ್ರಜಾಪ್ರಭುತ್ವ ಕಗ್ಗೊಲೆ
ಭದ್ರಾವತಿಯಲ್ಲಿ ಗುತ್ತಿಗೆ ಕಾರ್ಮಿಕರ ಪರ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಕಾಗದನಗರದ ಚಂದ್ರಾಲಯಕ್ಕೆ ಕರೆ ತಂದಿರುವುದು.
ಭದ್ರಾವತಿ, ಫೆ. ೨೭: ಕಾರ್ಖಾನೆ ಹಾಗು ಕಾರ್ಮಿಕರ ಹಿತಕಾಪಾಡಲು ಮತ್ತು ಕ್ಷೇತ್ರದ ಅಭಿವೃದ್ಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲು ಪಾದಯಾತ್ರೆ ನಡೆಸಿದ ನಮ್ಮನ್ನು ವಶಕ್ಕೆ ಪಡೆಯುವ ಮೂಲಕ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಲಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ಅವರು ಕಾಗದನಗರದ ಚಂದ್ರಾಲಯದಲ್ಲಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಬರೆದಿರುವ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಜನಪ್ರತಿನಿಧಿಯಾಗಿರುವ ನನ್ನ ಮೇಲೆಯೇ ಇಷ್ಟೊಂದು ದೌರ್ಜನ್ಯ ನಡೆಸಿದರೆ ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು.
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಈ ಕಾರ್ಖಾನೆಯನ್ನು ಮುಚ್ಚಲು ಹುನ್ನಾರ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮನವಿ ಸಲ್ಲಿಸುವುದು ಸಂವಿಧಾನದ ಹಕ್ಕು ಇದನ್ನು ಮೊಟಕುಗೊಳಿಸಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ಕಾರ್ಖಾನೆಯನ್ನು ಮುಚ್ಚಬಾರದು. ಇದಕ್ಕೆ ಅಗತ್ಯವಿರುವ ಬಂಡವಾಳ ತೊಡಗಿಸಿ ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಹಿತಕಾಪಾಡುವ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ ಮಾತನಾಡಿ, ಓರ್ವ ಜನಪ್ರತಿನಿಧಿಗೆ ಮನವಿ ಸಲ್ಲಿಸಲು ಅವಕಾಶ ನೀಡದಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಇಂತಹ ಸರ್ಕಾರಗಳಿಗೆ ಧಿಕ್ಕಾರ ಹಾಕಬೇಕು. ಮೋದಿ ಗೋ ಬ್ಯಾಕ್ ಎಂದು ಕೂಗಬೇಕಾಗಿದೆ ಎಂದರು.
ಎಎಪಿ ಪಕ್ಷದ ಮುಖಂಡ ಎಚ್. ರವಿಕುಮಾರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯರಾದ ಸರ್ವಮಂಗಳ ಭೈರಪ್ಪ, ಲತಾ ಚಂದ್ರಶೇಖರ್, ಕಾಂತರಾಜ್, ಶೃತಿ ವಸಂತ, ಕಾರ್ಮಿಕ ಮುಖಂಡರಾದ ಬಸವಂತಪ್ಪ, ಬಂಜಾರ ರೈತ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯಕ, ಶ್ರೀನಿವಾಸ್, ಲೋಕೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.