![](https://blogger.googleusercontent.com/img/a/AVvXsEhY66ArneZ-0qQgU3uvSFTzxHbF3DoyuKJ9hK7sPUIA-xmYVnWZYU5sZS_oCPnn9ZnG6auQdV76YhU73PUcS04SSlqib4Afx4nxsdFdP47UfyGbZFRTiG4PkSb9xYCsADSBba7Vv5I46p00Tahdn_7PK7EUfzdet-Di2mfrGYGRkVmZwijs8QJPbjtaUQ=w400-h130-rw)
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪಡೆ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಂಬಲ ಸೂಚಿಸಲಾಯಿತು.
ಭದ್ರಾವತಿ, ಮಾ. ೧೫ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪಡೆ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಂಬಲ ಸೂಚಿಸಲಾಯಿತು.
ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ಧೋರಣೆಗಳನ್ನು ಖಂಡಿಸಲಾಯಿತು. ನಂತರ ಎಂಪಿಎಂ ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮೈಸೂರು ಮಹಾರಾಜರು ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ ಪರಿಶ್ರಮದ ಫಲವಾಗಿ ಸ್ಥಾಪನೆಗೊಂಡ ವಿಐಎಸ್‌ಎಲ್ ನೂರು ವರ್ಷ ಪೂರೈಸಿರುವ ದೇಶದ ಮೊಟ್ಟಮೊದಲ ಕಾರ್ಖಾನೆಯಾಗಿದೆ. ರಾಜ್ಯದ ೬.೫ ಕೋಟಿ ಕನ್ನಡಿಗರ ಹಮ್ಮೆಯ ಆಸ್ತಿಯಾಗಿದೆ. ಕ್ಷೇತ್ರದ ಜೀವನಾಡಿಯಾಗಿದೆ. ಉಕ್ಕಿನ ನಗರಿ ಎಂದು ಹೆಸರು ತಂದುಕೊಟ್ಟ ಕಾರ್ಖಾನೆ ಇದಾಗಿದೆ. ವಿಐಎಸ್‌ಎಲ್ ಮತ್ತು ಎಂ.ಪಿ.ಎಂ ಈ ಎರಡು ಕಾರ್ಖಾನೆಗಳು ರಾಜ್ಯದ ಹೆಮ್ಮೆಯ ಗರಿಗಳು, ಪ್ರಸ್ತುತ ಈ ಕಾರ್ಖಾನೆಗಳು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದು ಅಳಲು ತೋರ್ಪಡಿಸಿಕೊಳ್ಳಲಾಗಿದೆ.
ಈ ಎರಡು ಕಾರ್ಖಾನೆಗಳಲ್ಲಿ ಸುಮಾರು ೩೦ ಸಾವಿರಕ್ಕೂ ಅಧಿಕ ಕಾರ್ಮಿಕರು ೩ ಪಾಳಿಯಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದರಿಂದಾಗಿ ಸಾವಿರಾರು ಕಾಯಂ ಮತ್ತು ಗುತ್ತಿಗೆ ಕಾರ್ಮಿಕರ ಕುಟುಂಬಗಳಿಗೆ ಜೀವನಕ್ಕೆ ದಾರಿಯಾಗಿತ್ತು. ವಿಐಎಸ್‌ಎಲ್ ವಿಶ್ವದಲ್ಲೇ ಉತ್ಕೃಷ್ಟ ಉಕ್ಕು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಆದರೆ ಇದೀಗ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡದೆ ಇರುವುದರಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ಕಾರ್ಖಾನೆಯಲ್ಲಿ ಕಾರ್ಮಿಕರ ಸಂಖ್ಯೆ ಸಹ ಕಡಿಮೆಯಾಗುತ್ತಿದ್ದು, ಸಾವಿರಾರು ಕಾಯಂ ಮತ್ತು ಗುತ್ತಿಗೆ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ. ಕಾರ್ಮಿಕರ ಕುಟುಂಬಗಳಿಗೆ ಜೀವನ ನಿರ್ವಹಣೆ ಮಾಡುವುದು ಬಹಳ ಕಷ್ಟಕರವಾಗಿದೆ. ಅಲ್ಲದೆ ಈ ಎರಡು ಕಾರ್ಖಾನೆಗಳನ್ನು ಪರೋಕ್ಷವಾಗಿ ಅವಲಂಬಿಸಿರುವವರು ಸಹ ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಈ ಎರಡು ಕಾರ್ಖಾನೆಗಳನ್ನು ಮುಚ್ಚುವ ಪ್ರಕ್ರಿಯೆ ಹಿಂಪಡೆದುಕೊಂಡು ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್ ಹಾಲೇಶಪ್ಪ, ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು, ತಾಲೂಕು ಅಧ್ಯಕ್ಷ ಎಸ್. ಜಮೀರ್, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಿ. ಆನೇಕೊಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್ ಶಿವಾನಂದ್, ಡಾ. ಬಿ.ಆರ್ ಅಂಬೇಡ್ಕರ್ ಎಸ್‌ಸಿ/ಎಸ್‌ಟಿ ಪಡೆ ಅಧ್ಯಕ್ಷ ವೆಂಕಟೇಶ್ ಉಜ್ಜನಿಪುರ, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ ಸದಸ್ಯ ಉದಯಕುಮಾರ್, ದಲಿತ ಮುಖಂಡರಾದ ನಾಗೇಶ್, ಸಂಪತ್, ಹನುಮಂತಪ್ಪ, ಅಣ್ಣಪ್ಪ, ಸಂತೋಷ್, ಶಿವಕುಮಾರ್, ಶ್ರೀನಿವಾಸ್, ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಬುಧವಾರ ದಲಿತ ಮುಖಂಡರು ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸದೆ ನಿರ್ಲಕ್ಷಿಸಿರುವುದನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟಿಸಿದರು.