![](https://blogger.googleusercontent.com/img/a/AVvXsEgQOSyV9g0Pic5y7_g9c8fTVmRhSepGJwxVNQ_WeTcdzMgqkDin0oJApCZQaQ5lYTJg5fzSwv7qrFtm_kT3axBrl-KT-tuJEHf-PDw5PV7nq92oCVQZ_-1eFvNFl7IJjRdZSi1NfY0RYmcE8M4r92TFHngXRaT4qR9tRUmjE1ZApM6EqVBGy3mAAgqnTA=w400-h190-rw)
ಭದ್ರಾವತಿ ವಿಧಾನಸಭಾ ಕ್ಷೇತ್ರದ ೨೦೨೩ರ ಚುನಾವಣೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು
ಭದ್ರಾವತಿ, ಏ. ೨೧ : ಈ ಬಾರಿ ವಿಧಾನಸಭಾ ಚುನಾವಣೆ ಅಂತಿಮ ಕಣದಲ್ಲಿ ಒಟ್ಟು ೧೪ ಮಂದಿ ಉಳಿದುಕೊಂಡಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
ಚುನಾವಣೆಗೆ ಸ್ಪರ್ಧಿಸಿ ಒಟ್ಟು ೧೭ ಮಂದಿ ೨೫ ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆದು ೧೭ ಮಂದಿಯಲ್ಲಿ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು. ೧೬ ನಾಮಪತ್ರಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಕೆ. ಮೋಹನ್ ಮತ್ತು ನೀಲಂ ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್(ಕಾಂಗ್ರೆಸ್), ಶಾರದ ಅಪ್ಪಾಜಿ(ಜೆಡಿಎಸ್), ಮಂಗೋಟೆ ರುದ್ರೇಶ್(ಬಿಜೆಪಿ), ಆನಂದ್(ಎಎಪಿ), ಸುಮಿತ್ರಾ ಬಾಯಿ (ಕೆಆರ್‌ಎಸ್), ಶಶಿಕುಮಾರ್ ಎಸ್. ಗೌಡ(ಜೆಡಿಯು), ಇ.ಪಿ ಬಸವರಾಜ(ಆರ್‌ಪಿಐಕೆ), ಬಿ.ಎನ್ ರಾಜು(ಪಕ್ಷೇತರ), ಅಹಮದ್ ಅಲಿ(ಪಕ್ಷೇತರ), ಜಾನ್‌ಬೆನ್ನಿ(ಪಕ್ಷೇತರ), ಎಸ್.ಕೆ ಸುಧೀಂದ್ರ(ಪಕ್ಷೇತರ), ವೈ. ಶಶಿಕುಮಾರ್(ಪಕ್ಷೇತರ), ಡಿ. ಮೋಹನ್(ಪಕ್ಷೇತರ) ಮತ್ತು ರಾಜಶೇಖರ್(ಪಕ್ಷೇತರ) ಅಂತಿಮ ಕಣದಲ್ಲಿ ಉಳಿದುಕೊಂಡಿರುವ ಅಭ್ಯರ್ಥಿಗಳಾಗಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳಿಂದ ೭ ಮಂದಿ ಹಾಗು ಪಕ್ಷೇತರರಾಗಿ ೭ ಮಂದಿ ಒಟ್ಟು ೧೪ ಮಂದಿ ಇದ್ದು, ಈ ಬಾರಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸಮಾನವಾಗಿರುವುದು ವಿಶೇಷತೆಯಾಗಿದೆ.
ಕಳೆದ ಚುನಾವಣೆ ೨೦೧೮ರಲ್ಲೂ ೧೪ ಮಂದಿ ಕಣದಲ್ಲಿದ್ದರು. ೨೦೧೩ರಲ್ಲಿ ಅತಿಹೆಚ್ಚು ೧೭ ಮಂದಿ ಹಾಗು ೨೦೦೮ರಲ್ಲಿ ಕೇವಲ ೭ ಮಂದಿ ಕಣದಲ್ಲಿದ್ದರು.