ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಭದ್ರಾವತಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ ಸೂಚಿಸುವುದಾಗಿ ಹೇಳಿದರು.
ಭದ್ರಾವತಿ, ಮೇ. ೭ : ಅಸಂಘಟಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಕಷ್ಟಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಪೂರಕವಾಗಿ ಸ್ಪಂದಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ಸೂಚಿಸುವುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರು ಬಡವರ್ಗದವರಾಗಿದ್ದಾರೆ. ಇವರಿಗೆ ಸರ್ಕಾರದ ಸೌಲಭ್ಯಗಳು ಸಮಪರ್ಕವಾಗಿ ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ವೈಯಕ್ತಿಕವಾಗಿ ಸಹ ಸ್ಪಂದಿಸಿದ್ದಾರೆ. ಅದರಲ್ಲೂ ಕೊರೋನಾ ಸಂದರ್ಭದಲ್ಲಿ ಆಹಾರ ಪದಾರ್ಥಗಳ ವಿತರಣೆ, ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಜಾಚಾರಿ, ಸುರೇಶ್, ಶಶಿಕುಮಾರ್, ಸುಶೀಲ, ಸಂಧ್ಯಾ, ನೇತ್ರಾವತಿ, ಶೇಖರಪ್ಪ, ವೆಂಕಟೇಶ್, ಅರ್ಜುನ್, ಜಾರ್ಜ್ ಮತ್ತು ಪಳನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.