ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನುಡಿದಂತೆ ನಡೆಯುವರೇ..?
![](https://blogger.googleusercontent.com/img/a/AVvXsEix-tHY2MxnE_sfELQnv_gY7wDCaWcic92YoAFdJbjTVynTaA8hwlbEu7zS4jkxkyHu4hWcJYqnZpvWiBE1V18GXLqyA3hF0IweMO7hbRfojxL21sQ68FlH9W2BydZ9RMOjCxatSwD8gT4XxC-zAmqVPqpKS4A_wXT7c52PY0XdH_nAQSRpuzHRcmsG-Q=w400-h165-rw)
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ.
* ಅನಂತಕುಮಾರ್ ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ ಸುಮಾರು ೪ ತಿಂಗಳಿನಿಂದ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ನೂತನ ಸರ್ಕಾರ ಪೂರಕವಾಗಿ ಸ್ಪಂದಿಸಬೇಕಾಗಿದೆ.
ಜ.೧೬ರಂದು ಕೇಂದ್ರ ಉಕ್ಕು ಪ್ರಾಧಿಕಾರದ ಅಧೀನದಲ್ಲಿರುವ ಈ ಕಾರ್ಖಾನೆಯನ್ನು ಮುಚ್ಚಲು ಆದೇಶ ಹೊರಡಿಸಲಾಗಿದ್ದು, ಇದರ ವಿರುದ್ಧ ಗುತ್ತಿಗೆ ಕಾರ್ಮಿಕರು ಜ.೧೮ರಿಂದ ಕಾರ್ಖಾನೆ ಮುಂಭಾಗ ಅನಿರ್ಧಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ.
ಸುಮಾರು ೪ ತಿಂಗಳು ಕಳೆದರೂ ಸಹ ಗುತ್ತಿಗೆ ಕಾರ್ಮಿಕರು ಧೈರ್ಯ ಕಳೆದುಕೊಳ್ಳದೆ ಒಗ್ಗಟ್ಟಿನಿಂದ ಹೋರಾಟ ಮುನ್ನಡೆಸುತ್ತಿದ್ದು, ಬೆಂಗಳೂರು ವಿಧಾನಸೌಧ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಪಾದಯಾತ್ರೆ, ಬೈಕ್ ರ್ಯಾಲಿ, ದೆಹಲಿಯಲ್ಲಿ ಹೋರಾಟ, ಮೈಸೂರು ಮಹಾರಾಜರ ವಂಶಸ್ಥರ ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ, ಭದ್ರಾವತಿ ಬಂದ್, ಬೃಹತ್ ಜಾಥಾ, ರಸ್ತೆ ತಡೆ, ಸಹಿ ಅಭಿಯಾನ, ಪತ್ರ ಚಳುವಳಿ ಸೇರಿದಂತೆ ಹಲವು ಬಗೆಯ ಹೋರಾಟಗಳನ್ನು ಕೈಗೊಂಡಿದ್ದಾರೆ.
ಹೋರಾಟದ ನಡುವೆ ರಾಜ್ಯದ ಪ್ರಮುಖ ಮಠಗಳಿಗೆ ತೆರಳಿ ಮಠಾಧೀಶರುಗಳಿಗೆ, ಮಾಜಿ ಪ್ರಧಾನಿ, ಕೇಂದ್ರ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳಿಗೆ ಮನವಿ ಸಲ್ಲಿಸಿ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಿದ್ದಾರೆ.
ಭದ್ರಾವತಿ ಎಂಪಿಎಂ ಕಾರ್ಖಾನೆ.
ವಿವಿಧ ಧರ್ಮಗಳ ಧರ್ಮಗುರುಗಳು, ಮಠಾಧೀಶರು, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ನೀಡಿ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಆಗ್ರಹಿಸಿದ್ದಾರೆ. ವಿವಿಧ ಸಂಘ-ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಕೈಜೋಡಿಸಿವೆ. ಆದರೂ ಸಹ ಕೇಂದ್ರ ಸರ್ಕಾರವಾಗಲಿ, ಉಕ್ಕು ಪ್ರಾಧಿಕಾರವಾಗಲಿ ಹೋರಾಟಕ್ಕೆ ಪೂರಕವಾಗಿ ಸ್ಪಂದಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಈ ನಡುವೆ ೨೦೧೫ರಿಂದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಮುಚ್ಚಲ್ಪಟ್ಟಿದ್ದು, ಈ ಕಾರ್ಖಾನೆ ಸಹ ಪುನರ್ ಆರಂಭಗೊಳ್ಳಬೇಕಾಗಿದೆ. ಈಗಾಗಲೇ ಕಾರ್ಖಾನೆ ಪಾಳುಬಿದ್ದಿದ್ದು, ಕೋಟ್ಯಾಂತರ ರು. ಮೌಲ್ಯದ ಆಸ್ತಿ-ಪಾಸ್ತಿ ಹಾಳಾಗಿದೆ. ಕಾರ್ಖಾನೆಯ ನಗರಾಡಳಿತ ಪ್ರದೇಶಲ್ಲಿ ಸ್ಮಶಾನ ಮೌನ ಆವರಿಸಿಕೊಂಡಿದೆ. ತಕ್ಷಣ ಕಾರ್ಖಾನೆಯನ್ನು ಪುನರ್ ಆರಂಭಿಸಬೇಕಾಗಿದೆ.
ಫೆ. ೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಅಲ್ಲದೆ 'ಈ ಬಾರಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ವಿಐಎಸ್ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಉಳಿಸುವ ಜವಾಬ್ದಾರಿ ನನ್ನದು. ನಮ್ಮನ್ನು ನೀವು ಬೆಂಬಲಿಸಿ, ನಿಮ್ಮನ್ನು ನಾವು ಉಳಿಸುತ್ತೇವೆ' ಎಂದು ಭರವಸೆ ನೀಡಿದ್ದರು. ಇದೀಗ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದು, ಈ ಎರಡೂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಕ್ಷಣ ಗಮನ ಹರಿಸಬೇಕಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್
``೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಲು ಮತದಾರರು ಕಾರಣರಾಗಿದ್ದು, ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಸ್ತುತ ನೂತನ ಸರ್ಕಾರದಲ್ಲಿ ನಾನು ಸಚಿವನಾಗುವ ವಿಶ್ವಾಸವಿದ್ದು, ಈಗಾಗಲೇ ಪಕ್ಷದ ವರಿಷ್ಠರು ಸಹ ಬಹಿರಂಗವಾಗಿ ಭರವಸೆ ನೀಡಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಗಳು ನಡೆಯಬೇಕಾಗಿದ್ದು, ಬಹಳ ಮುಖ್ಯವಾಗಿ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸಿ ಇದರ ಜೊತೆಗೆ ಇನ್ನೂ ಸಣ್ಣ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಿ ನಿರುದ್ಯೋಗ ನಿರ್ಮೂಲನೆಗೆ ಶ್ರಮಿಸಲಾಗುವುದು.''
- ಬಿ.ಕೆ ಸಂಗಮೇಶ್ವರ್, ಶಾಸಕರು, ಭದ್ರಾವತಿ.