ಮುಖ್ಯಮಂತ್ರಿ ಭೇಟಿ ಮಾಡಿದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದ ಕಾರ್ಮಿಕರ ನಿಯೋಗ
![](https://blogger.googleusercontent.com/img/a/AVvXsEiaen5z67uJ9XifC8-UfvAN14HA6ucL6iNLvFkcWLMa2xgF0SSt9dcV-b1QlfJoFgDxRVbwjcuwKav--TWrVkulo9VmC8O77vZ2IWxqz6AF-_kTeL0WC_ftNPv3UFQAUZ-3_Rl00ejsjBZCY3E-2LYYzRMSiFAI_F9AUoNeMBnjIUw8g9L3dZNi56Qnug=w289-h400-rw)
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದ ಕಾರ್ಮಿಕರ ನಿಯೋಗ ಮನವಿ ಮಾಡಿದೆ.
ಭದ್ರಾವತಿ, ಜೂ. ೮ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದ ಕಾರ್ಮಿಕರ ನಿಯೋಗ ಮನವಿ ಮಾಡಿದೆ.
ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ ಚರ್ಚೆ ನಡೆಸಿದ್ದು, ಕಾರ್ಖಾನೆ ಅಭಿವೃದ್ಧಿಪಡಿಸಿ ಬಂಡವಾಳ ತೊಡಗಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರ ೨೦೧೭ರಲ್ಲಿ ಮಂಜೂರು ಮಾಡಿರುವ ಕಬ್ಬಿಣದ ಅದಿರು ಗಣಿಯ ಅಭಿವೃದ್ಧಿ ಕಾರ್ಯಗಳು ಜರುಗುತ್ತಿದ್ದು, ೨೦೨೫ಕ್ಕೆ ಅದಿರು ಉತ್ಪಾದಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಈ ನಡುವೆ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ತೀರ್ಮಾನ ತೆಗೆದುಕೊಂಡಿದೆ. ಈ ಹಿಂದೆ ಕಬ್ಬಿಣದ ಅದಿರು ಗಣಿ ಮಂಜೂರು ಮಾಡಿದ್ದಲ್ಲಿ ಬಂಡವಾಳ ತೊಡಗಿಸಿ ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿತ್ತು. ಈ ಹಿನ್ನಲೆಯಲ್ಲಿ ಕಾರ್ಖಾನೆಗೆ ಉಕ್ಕು ಪ್ರಾಧಿಕಾರ ಸೂಕ್ತ ಬಂಡವಾಳ ತೊಡಗಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುವಂತೆ ನಿಯೋಗ ಕೋರಿತು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು. ಅಲ್ಲದೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ರವರಿಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚನೆ ನೀಡಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು.
ನಿಯೋಗದಲ್ಲಿ ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಪ್ರಧಾನ ಕಾರ್ಯದರ್ಶಿ ಬಸಂತ್‌ಕುಮಾರ್, ಕಾರ್ಯದರ್ಶಿ ಕೆ.ಆರ್ ಮನು, ಖಜಾಂಚಿ ಎಸ್. ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.