ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿ ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾದಲ್ಲಿ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಕೆಂಪೇಗೌಡರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಜೂ. ೨೭ : ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶತನಗಳು ನಮಗೆ ದಾರಿದೀಪವಾಗಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಮಂಗಳವಾರ ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾದಲ್ಲಿ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮನುಷ್ಯನ ಹುಟ್ಟು-ಸಾವು ಸಹಜ. ಆದರೆ ಈ ನಡುವೆ ಸಮಾಜಕ್ಕೆ ನಾವು ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯವಾಗಿದೆ. ನಾಡಪ್ರಭು ಕೆಂಪೇಗೌಡರು ಸೇರಿದಂತೆ ಅನೇಕ ಮಹಾನ್ ನಾಯಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಬದುಕಿಲ್ಲದಿದ್ದರೂ ಸಹ ಮಾನಸಿಕವಾಗಿ ನಮ್ಮೆಲ್ಲರ ಮುಂದೆ ಇಂದಿಗೂ ಉಳಿದುಕೊಂಡಿದ್ದಾರೆ ಎಂದರು.
ಕೆಂಪೇಗೌಡರು ಅಂದು ನಿರ್ಮಿಸಿರುವ ಕೆರೆಕಟ್ಟೆಗಳು, ಅದರಲ್ಲೂ ವಿಶೇಷವಾಗಿ ಪ್ರಸ್ತುತ ಜಗತ್ತಿನ ಎಲ್ಲಾ ರಾಷ್ಟ್ರಗಳ ಗಮನ ಸೆಳೆಯುತ್ತಿರುವ ಬೆಂಗಳೂರು ನಿರ್ಮಾಣ ಕೆಂಪೇಗೌಡರು ಹೊಂದಿರುವ ಜನಪರ ಕಾಳಜಿಗಳು, ದೂರದೃಷ್ಟಿ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ಕೆಂಪೇಗೌಡರನ್ನು ಸ್ಮರಿಸಿಕೊಳ್ಳುವುದು ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಹಿತರಕ್ಷಣಾ ವೇದಿಕೆ ಪ್ರಮುಖರಾದ ಎಸ್. ಕುಮಾರ್, ಬಾಲಕೃಷ್ಣ, ಟಿ. ಚಂದ್ರೇಗೌಡ, ವೆಂಕಟೇಶ್, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಮಣಿ ಎಎನ್‌ಎಸ್, ಆರ್. ಮೋಹನ್‌ಕುಮಾರ್, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಪ್ರಜಾಪ್ರತಿನಿಧಿ ಸುರೇಶ್, ಎಂ.ಎಸ್ ಸುಧಾಮಣಿ, ಚನ್ನಪ್ಪ, ಕಬಡ್ಡಿ ಕೃಷ್ಣೇಗೌಡ, ಮಹೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವೇದಿಕೆ ವತಿಯಿಂದ ಸಿಹಿ ಹಂಚಲಾಯಿತು. ಅಲ್ಲದೆ ಸಾವಿರಾರು ಮಂದಿಗೆ ಬಾಡೂಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು.