ಶಿವಮೊಗ್ಗ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಸೋಮವಾರ ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೌರಿ -ಗಣೇಶ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಗರಿಕ ಶಾಂತಿಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ಭದ್ರಾವತಿ: ಪ್ರತಿಯೊಂದು ಹಬ್ಬಕ್ಕೂ ಒಂದೊಂದು ರೀತಿಯ ಮಹತ್ವವಿರುತ್ತದೆ. ಹಬ್ಬಗಳ ಮಹತ್ವ ಅರಿತು ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಆಚರಣೆಗೆ ಮುಂದಾಗಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು.
ಅವರು ಸೋಮವಾರ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೌರಿ -ಗಣೇಶ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಗರಿಕ ಶಾಂತಿಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ಹಬ್ಬ ಹರಿದಿನಗಳನ್ನು ವಿಜೃಂಭಣೆಯಿಂದ ಆಚರಿಸುವ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ತೆಗೆದುಕೊಳ್ಳಬೇಕು. ಸಮಾಜದ ಎಲ್ಲರ ಮೇಲೂ ಕಾಳಜಿವಹಿಸಬೇಕು. ಕೆಲವರು ಮಾಡುವ ತಪ್ಪಿನಿಂದ ಎಲ್ಲರೂ ತೊಂದರೆ ಅನುಭವಿಸುವಂತಾಗಬಾರದು. ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಸಮಾಜದಲ್ಲಿ ಅನುಭವಿಗಳು, ಚಿಂತಕರು ತಮ್ಮ ಸಲಹೆ ಸಹಕಾರ ನೀಡಬೇಕೆಂದರು.
ಪೊಲೀಸ್ ಇಲಾಖೆ ಜನರ ರಕ್ಷಣೆಗೆ ಸದಾ ಬದ್ದವಾಗಿರುತ್ತದೆ. ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದೆ.ಒಂದು ವೇಳೆ ಸಮಸ್ಯೆಗಳು ಉಲ್ಬಣಗೊಳ್ಳುವ ಲಕ್ಷಣಗಳು ಕಂಡು ಬಂದಲ್ಲಿ ಇಲಾಖೆಗೆ ಮಾಹಿತಿ ನೀಡಿದ್ದಲ್ಲಿ ಇತ್ಯರ್ಥಪಡಿಸಲು ಮುಂದಾಗಲಿದೆ ಎಂದರು.
ವಿವಿಧ ಧರ್ಮದ, ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು ಹಾಗು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮಾತನಾಡಿ, ನಗರದಲ್ಲಿ ಹಲವಾರು ವರ್ಷಗಳಿಂದ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಶಾಂತಿಯುತವಾಗಿ ಹಬ್ಬ ಹರಿದಿನಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಇದೆ ರೀತಿ ಆಚರಿಸಲಾಗುವುದು. ಆದರೂ ಸಹ ಕೆಲವೊಂದು ಸಣ್ಣಪುಟ್ಟ ಘಟನೆಗಳಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಬಡವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಇವುಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಲು ಬದ್ಧವಾಗಿದ್ದೇವೆ ಎಂದರು.
ಸಭೆಯಲ್ಲಿ ಪ್ರಮುಖರಾದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನೆ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಅಂಜುಮಾನ್ ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾಖಾನ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ನಗರಸಭಾ ಸದಸ್ಯ ಆರ್. ಮೋಹನ್ ಕುಮಾರ್, ಕೆ. ಮಂಜುನಾಥ್, ಮಂಗೋಟೆ ರುದ್ರೇಶ್, ಬಾಬಾಜಾನ್, ಅಮೀರ್ ಜಾನ್, ಜೆಬಿಟಿ ಬಾಬು ಸೇರಿದಂತೆ ಇನ್ನಿತರರು ಮಾತನಾಡಿದರು.
ವೇದಿಕೆಯಲ್ಲಿ ತಹಸೀಲ್ದಾರ್ ನಾಗರಾಜ್, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಪೊಲೀಸ್ ಉಪಧೀಕ್ಷಕ ಕೆ.ಆರ್ ನಾಗರಾಜ್, ವೃತ್ತ ನಿರೀಕ್ಷಕರಾದ ಗುರುರಾಜ್, ಜೆ. ಶೈಲ ಕುಮಾರ್, ಲಕ್ಷ್ಮೀಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.