ಭದ್ರಾವತಿಯಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವೀರಶೈವ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
ಭದ್ರಾವತಿ: ಪ್ರಗತಿ ಹಂತದಲ್ಲಿರುವ ಬಿ.ಆರ್ ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಸಮುದಾಯ ಭವನಗಳೆರಡು ಪೂರ್ಣಗೊಂಡರೆ ನಗರಕ್ಕೆ ಮೆರಗು ದೊರೆಯುತ್ತದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
ಅವರು ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ವೀರಶೈವ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂದಿನ ವರ್ಷ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವಾಲ್ಮೀಕಿ ಸಮುದಾಯ ಭವನದಲ್ಲಿ ಆಚರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವರುಷಕೊಮ್ಮೆ ನಡೆಯುವ ಸಮಾಜದ ಕಾರ್ಯಕ್ರಮಕ್ಕೆ ಸಮಾಜ ಬಾಂಧವರೆಲ್ಲರೂ ಭಾಗವಹಿಸುವುದು ಮುಖ್ಯ. ಈ ಕಾರ್ಯಕ್ರಮದ ಯಶಸ್ವಿಯಲ್ಲಿ ಅಧಿಕಾರಿಗಳ ಪಾತ್ರವೂ ಮುಖ್ಯವಾಗಿದ್ದು, ಅಧಿಕಾರಿಗಳ ಪ್ರಯತ್ನ ಶ್ಲಾಘನೀಯ ಎಂದರು.
ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಸವರಾಜ್ ಬಿ ಆನೇಕೊಪ್ಪ ಮಾತನಾಡಿ, ವಾಲ್ಮೀಕಿ ಸಮಾಜದ ಅಭಿವೃದ್ಧಿಗಾಗಿ ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗು ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು. ಜೊತೆಗೆ ಪ್ರಗತಿ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೋರುವ ಮೂಲಕ ಮನವಿ ಸಲ್ಲಿಸಿದರು.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಪೌರಾಯುಕ್ತ ಮನುಕುಮಾರ್, ಸದಸ್ಯರಾದ ಲತಾ ಚಂದ್ರಶೇಖರ್, ಕಾಂತರಾಜ್, ಮಾಜಿ ಸದಸ್ಯೆ ಲಕ್ಷ್ಮೀದೇವಿ, ದಸಂಸ ಮುಖಂಡರಾದ ಚಿನ್ನಯ್ಯ, ರಂಗನಾಥ್, ಶಿವಬಸಪ್ಪ, ಈಶ್ವರಪ್ಪ, ತಮ್ಮಣ್ಣ, ಚಂದ್ರಣ್ಣ, ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಿದ್ಧಾರ್ಥ ಅಂಧರ ಕೇಂದ್ರದ ಗಾಯಕರು ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಪ್ಪ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ನಿಲಯ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಿದರು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.