Monday, December 25, 2023

ಡಿ.೨೬ರಂದು ಜೆಡಿಎಸ್ ಪಕ್ಷದಿಂದ ಧರಣಿ ಸತ್ಯಾಗ್ರಹ

    ಭದ್ರಾವತಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಾಗು ಹೆಚ್ಚುತ್ತಿರುವ ದುರಾಡಳಿತದ ವಿರುದ್ಧ ಡಿ.೨೬ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಜಾತ್ಯಾತೀತ ಜನತಾದಳ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
    ಪಕ್ಷದ ಮುಖಂಡರಾದ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Sunday, December 24, 2023

ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ : ಉಪ್ಪಾರರು ಸಂಘಟನೆಗೊಳ್ಳಲಿ, ಸಮಾಜದ ಮುನ್ನಲೆಗೆ ಬರಲಿ

ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೇಶಾದ್ಯಂತ ರಥಯಾತ್ರೆ

ಉಪ್ಪಾರ ಸಮುದಾಯದ ಜನಜಾಗೃತಿಗಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ಭದ್ರಾವತಿ ನಗರಕ್ಕೆ ಆಗಮಿಸಿತು. ಹಳೇನಗರದ ಬಸವೇಶ್ವರ ವೃತ್ತದಲ್ಲಿ ಉಪ್ಪಾರ ಸಮಾಜದ ಗುರುಗಳಾದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
    ಭದ್ರಾವತಿ: ಉಪ್ಪಾರ ಸಮುದಾಯದ ಜನಜಾಗೃತಿಗಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ನಗರಕ್ಕೆ ಆಗಮಿಸಿತು.
    ಗಾಂಧಿನಗರ ವೃತ್ತಕ್ಕೆ ಆಗಮಿಸಿದ ರಥಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಭಗೀರಥ ಉಪ್ಪಾರ ಸಂಘ ಹಾಗು ತಾಲೂಕು ಸಂಘದ ಪದಾಧಿಕಾರಿಗಳು, ಪ್ರಮುಖರು ಸ್ವಾಗತಿಸಿದರು. ನಂತರ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಉಪ್ಪಾರ ಸಮಾಜದ ಗುರುಗಳಾದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
    ದೇಶಾದ್ಯಂತ ಸುಮಾರು ೧೧ ಕೋಟಿಗೂ ಹೆಚ್ಚಿನ ಜನಸಂಖ್ಯೆಯಲ್ಲಿರುವ ಉಪ್ಪಾರರು ವಿವಿಧ ರಾಜ್ಯಗಳಲ್ಲಿ ಆಯಾ ಪ್ರಾದೇಶಿಕ ಭಾಷೆಗಳಿಗೆ ಅನುಸಾರವಾಗಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಾರೆ. ಉಪ್ಪಾರರನ್ನು ಜನಜಾಗೃತಿಗೊಳಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಸಮಾಜದ ಮುನ್ನಲೆಗೆ ತರುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕೆಂದು ಕರೆ ನೀಡಲಾಯಿತು.  
    ಜಿಲ್ಲಾ ಸಂಘದ ಅಧ್ಯಕ್ಷ ಎಚ್.ಟಿ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಖಜಾಂಚಿ ನಾಗರಾಜ್ ಕಂಕಾರಿ, ಉಪಾಧ್ಯಕ್ಷರಾದ ಬೊಮ್ಮನಕಟ್ಟೆ ಮಂಜುನಾಥ್,  ಉಮೇಶ್ ಕಟ್ಟಾ, ಜಿಲ್ಲಾ ನಿರ್ದೇಶಕ ಎಸ್. ರಾಜಶೇಖರ್, ತಾಲೂಕು ಅಧ್ಯಕ್ಷ ರವಿಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಸಮಾಜದ ಪ್ರಮುಖರಾದ ರವೀಶ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಡಿ.೨೬ರಂದು ಕನ್ನಡ ರಾಜ್ಯೋತ್ಸವ, ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ

    ಭದ್ರಾವತಿ: ಅಪೇಕ್ಷ ನೃತ್ಯ ಕಲಾವೃಂದ, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೬ರ ಮಂಗಳವಾರ ಮಧ್ಯಾಹ್ನ ೩ ಗಂಟೆಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವ, ಸಂಗೀತ ಸಂಭ್ರಮ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
    ಸಂಗೀತ ಸಂಭ್ರಮ ಮಧ್ಯಾಹ್ನ ೩ ಗಂಟೆಗೆ ಆರಂಭವಾಗಲಿದ್ದು, ತಬಲ ವಾದಕ ದೇವನೂರು ರುದ್ರೇಶ್, ರಿದಮ್ ಪ್ಯಾಡ್ ವಾದಕ ಮೋಹನ್‌ಕುಮಾರ್, ಕೀ ಬೋರ್ಡ್ ವಾದಕ ಅಂತೋಣಿ ಮ್ಯಾಥ್ಯೂಸ್, ಗಾಯಕ ಡಾ. ಶ್ರೀಧರ್ ಕುಲಕರ್ಣಿ, ವಿದುಷಿ ಶೃತಿ ಕುಲಕರ್ಣಿ ಮತ್ತು  ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
    ಸಂಜೆ ೬ ಗಂಟೆಗೆ ವಿವಿಧ ಕ್ಷೇತ್ರದ ಸಾಧಕರಿಗೆ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ೨೦೨೨ ಹಾಗು ೨೩ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾ ವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಅಪೇಕ್ಷ ರಾಜ್ಯ ಪ್ರಶಸ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್ ಕನ್ನಡ ಕುವರ/ಕುವರಿ ಪ್ರಶಸ್ತಿ ಹಾಗು ಸಮಾಜ ಸೇವಕ ಸ್ನೇಹಜೀವಿ ಉಮೇಶ್ ವೀರಯೋಧ ಮುರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎಸ್.ಎಸ್ ವಿಜಯಾದೇವಿ, ನಗರಸಭೆ ಸದಸ್ಯೆ ಬಿ.ಟಿ ನಾಗರಾಜ್, ವೈದ್ಯ ಡಾ. ಶಿವಪ್ರಕಾಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಸ್ಥಾಪಕಿ ಲತಾ ರಾಬರ್ಟ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜು ಮತ್ತು ಡಾ. ವಿಷ್ಣು ಸೇವಾ ಸಮಿತಿ ಅಧ್ಯಕ್ಷ ಎಂ. ಶ್ರೀನಿವಾಸ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಭಾನುವಾರ ಅದ್ದೂರಿಯಾಗಿ ಜರುಗಿತು. . ಭಕ್ತರಿಂದ ಈಡುಕಾಯಿ ಹರಕೆ ಸಮರ್ಪಣೆ ನಡೆಯಿತು.
    ಭದ್ರಾವತಿ: ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಭಾನುವಾರ ಅದ್ದೂರಿಯಾಗಿ ಜರುಗಿತು.
    ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ, ರಥಶುದ್ಧಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ೧೨.೩೦ಕ್ಕೆ ಸ್ವಾಮಿಯ ರಥೋತ್ಸವ ನಡೆಯಿತು. ದೇವಸ್ಥಾನದ ಮುಂಭಾಗ ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಶ್ರೀ ಸ್ವಾಮಿಗೆ ಜಯಘೋಷಗಳನ್ನು ಹಾಕುವ ಮೂಲಕ ಸಂಭ್ರಮಿಸಿದರು. ನಗರದ ವಿವಿಧ ಭಜನೆ ತಂಡಗಳಿಂದ ಭಜನೆ ನಡೆಯಿತು.
    ರಥೋತ್ಸವ ಸರ್.ಎಂ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಬಂದು ತಲುಪಿತು. ಭಕ್ತರಿಂದ ಈಡುಕಾಯಿ ಹರಕೆ ಸಮರ್ಪಣೆ ನಡೆಯಿತು. ನಂತರ ಭಕ್ತರಿಗೆ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ಸೇರಿದಂತೆ ಇನ್ನಿತರ ಪ್ರಸಾದ ವಿತರಣೆ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಸೇವಾಕರ್ತರಾದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಅವರಿಂದ ಅನ್ನಸಂತರ್ಪಣೆ ನೆರವೇರಿತು.
    ರಥೋತ್ಸವದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.

Saturday, December 23, 2023

ನಾಗರಕಟ್ಟೆಯಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ಕಾಗದನಗರದ ಶ್ರೀಕ್ಷೇತ್ರ ನಾಗರಕಟ್ಟೆ ಯಲ್ಲಿ ತಾಲೂಕು ವೈಷ್ಣವ ಪರಿಷತ್ ಸಹಯೋಗದೊಂದಿಗೆ ಶನಿವಾರದಂದು ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಆಚರಿಸಲಾಯಿತು.
    ಭದ್ರಾವತಿ: ಕಾಗದನಗರದ ಶ್ರೀಕ್ಷೇತ್ರ ನಾಗರಕಟ್ಟೆ ಯಲ್ಲಿ ತಾಲೂಕು ವೈಷ್ಣವ ಪರಿಷತ್ ಸಹಯೋಗದೊಂದಿಗೆ ಶನಿವಾರದಂದು ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಆಚರಿಸಲಾಯಿತು.
    ಮುಂಜಾನೆ ೬.೩೦ಕ್ಕೆ ಆರಂಭಗೊಂಡ ಪೂಜಾ ಕಾರ್ಯಕ್ರಮಗಳು ರಾತ್ರಿ ೧೦.೩೦ರವರೆಗೆ ಜರುಗಿದವು. ಸಂಜೆ ೭ ಗಂಟೆಗೆ ಸಹಸ್ರ ದೀಪೋತ್ಸವ ನಡೆಸಲಾಯಿತು.
ನಗರಸಭೆ ಸದಸ್ಯ ಬಸವರಾಜ್ ಆನೇಕೊಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ನಾಗಮ್ಮ, ಸಬ್ ಇನ್ಸ್‌ಪೆಕ್ಟರ್ ಕವಿತಾ ಸೇರಿದಂತೆ ಸಹಸ್ರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
    ದೇವಾಲಯದ ಪ್ರಧಾನ ಅರ್ಚಕರಾದ ರಮೇಶ್ ಭಟ್ ತರಳಿಮಠ, ಅರ್ಚಕರಾದ ಚಿನ್ಮಯಿ ಪೂಜೆ ನೆರವೇರಿಸಿದರು. ವೀರಾಂಜನೇಯ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.

ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ವೈಕುಂಠನಾಥ ದರ್ಶನ ಭಕ್ತರನ್ನು ಆಕರ್ಷಿಸಿತು.
ಭದ್ರಾವತಿ : ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.
ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥ ದರ್ಶನ ನಡೆಯಿತು. ವಿಶೇಷವಾಗಿ ಭಕ್ತರಿಗೆ ಲಾಡು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಸ್ಥಾನದ ಸ್ವಾಮಿಯ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮೆಮೊರಿ ಮೇಕರ‍್ಸ್ ವತಿಯಿಂದ ವಿಶೇಷವಾಗಿ ನಿರ್ಮಿಸಲಾದ ವೈಕುಂಠನಾಥ ದರ್ಶನ ಭಕ್ತರನ್ನು ಆಕರ್ಷಿಸಿತು.
ದೇವಸ್ಥಾನದ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್, ಶಾಂತಕುಮಾರ್, ನಾಗೇಶ್ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.


ಭದ್ರಾವತಿ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ದೇವಸ್ಥಾನದ ಸ್ವಾಮಿಯ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ : ಎಸ್. ಮಧುಬಂಗಾರಪ್ಪ

ಭದ್ರಾವತಿ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಶಿಕ್ಷಕರ ವಿವಿಧ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಆ ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳ ಕೊಡುಗೆಯೂ ಪ್ರಮುಖವಾಗಿದ್ದು,  ಓದಿದ ಶಾಲೆಯ ಅಭಿವೃದ್ಧಿಗೆ ಶ್ರಮಿಸುವುದು ಸಹ ಸೇವೆಯೇ ಆಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಹೇಳಿದರು.
    ಅವರು ಶನಿವಾರ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
    ಮುಂಬರುವ ವರ್ಷದಲ್ಲಿ ಇಡೀ ರಾಜ್ಯದಲ್ಲಿ ೧ ರಿಂದ ೭ನೇ ತರಗತಿವರೆಗಿನ ಯಾವ ಮಕ್ಕಳು ಸಹ ಕೆಳಗೆ ನೆಲದ ಮೇಲೆ ಕೂರದಂತೆ ಸಕಲ ವಿದ್ಯಾರ್ಥಿಗಳಿಗೂ ಆಸನದ ವ್ಯವಸ್ಥೆ ಒದಗಿಸಲು ಚಿಂತನೆ ನಡೆಸಿದ್ದು, ೧ ವರ್ಷ ಅವಧಿಯಲ್ಲಿ ಸಂಪೂರ್ಣ ಅನುಷ್ಠಾನಗೊಳಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.
    ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜ್ಞಾನವೇ ದೇಶದ ದೊಡ್ಡ ಆಸ್ತಿ ಎಂದು ತಿಳಿಸಿದ ಅವರು, ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ತೊರೆದು ಒಟ್ಟಾಗಿ ಕೆಲಸ ನಿರ್ವಹಿಸುತ್ತೇವೆ. ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವುದರಿಂದ ಮಲೆನಾಡಿನ ಸರ್ಕಾರಿ ಶಾಲೆಗಳಲ್ಲಿನ ಸಮಸ್ಯೆಗಳು ಖಂಡಿತವಾಗಿ ಬಗೆಹರಿಯುವ ವಿಶ್ವಾಸವಿದೆ ಎಂದರು.
    ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ಯರೇಹಳ್ಳಿ ಸರ್ಕಾರಿ ಶಾಲೆಯ ಊಟದ ಹಾಲ್ ವಿಸ್ತರಣೆಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಗುಣಮಟ್ಟದ ಶಿಕ್ಷಣ ಎಂಬುದು ಪೋಷಕರ ಭ್ರಮೆ. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಚ್ಛಾಶಕ್ತಿ ಇಲ್ಲದಿದ್ದರೆ ಯಾವ ಶಾಲೆಯಲ್ಲಿ ಓದಿದರೂ ಅಷ್ಟೆ ಎಂದರು.
    ವೇದಿಕೆಯಲ್ಲಿ ಜಿ.ಪಂ ಮಾಜಿ ಸದಸ್ಯ ಎಸ್. ಕುಮಾರ್, ತಹಶೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್,  ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗು ಗ್ರಾಮದ ಮುಖಂಡರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಾಲೆಯ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು. ಗಾಯಕ ಹರೋನಹಳ್ಳಿ ಸ್ವಾಮಿ ಪ್ರಾರ್ಥಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಇ. ಚಂದ್ರಶೇಖರ್ ಸ್ವಾಗತಿಸಿದರು.