ಸಂಸದ ಬಿ.ವೈ ರಾಘವೇಂದ್ರ ಕಾರ್ಖಾನೆ ಉಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಿ
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಮುಖಂಡರು, ಬಿ.ವೈ ರಾಘವೇಂದ್ರ ಅವರು ಈಗಲೂ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಹೊರತು ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸಕ್ಕೆ ಬೈಕ್ ರ್‍ಯಾಲಿ ಕೈಗೊಂಡಿದ್ದ ಗುತ್ತಿಗೆ ಕಾರ್ಮಿಕರು `ಭದ್ರಾವತಿಯ ಕರಾಳ ದಿನ'ದ ಅಂಗವಾಗಿ ನಗರದ ಹೊಸಸೇತುವೆ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದರು. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡರಾದ ಎಚ್. ರವಿಕುಮಾರ್, ಅಭಿಲಾಷ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.