Wednesday, November 27, 2024

ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಆಸ್ಪತ್ರೆಯಲ್ಲಿನ ನ್ಯೂನ್ಯತೆಗಳು, ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವ ಭರವಸೆ 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಆಸ್ಪತ್ರೆಗೆ ಬೆಳಿಗ್ಗೆ ಆಗಮಿಸಿದ ಸಚಿವರು ಸ್ಕ್ಯಾನಿಂಗ್, ಡಯಾಲಿಸಿಸ್, ತುರ್ತು ಚಿಕಿತ್ಸಾ ವಿಭಾಗ, ರೋಗಿಗಳ ತಪಾಸಣಾ ಕೊಠಡಿ, ವೈದ್ಯರ ಕೊಠಡಿ, ಔಷಧಿ ವಿತರಣೆ ಕೊಠಡಿ ಸೇರಿದಂತೆ ಇನ್ನಿತರ ಕೊಠಡಿಗಳ ಪರಿಶೀಲನೆ ನಡೆಸಿ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತೆಯರು ಹಾಗು ಸಿಬ್ಬಂದಿಗಳ ಜೊತೆ ಚರ್ಚಿಸಿದರು. 
    ಈ ಸಂದರ್ಭದಲ್ಲಿ ಅಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆಯಲಾಯಿತು. ಅಲ್ಲದೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ನಡುವೆ ಆಸ್ಪತ್ರೆಯಲ್ಲಿನ ನ್ಯೂನ್ಯತೆಗಳ ಕುರಿತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸ್ಥಳೀಯರಿಂದ ಸಚಿವರಿಗೆ ದೂರುಗಳು ಸಹ ಸಲ್ಲಿಕೆಯಾದವು. 


    ಆಸ್ಪತ್ರೆ ಪರಿಶೀಲನೆ ನಂತರ ಮಾತನಾಡಿದ ಸಚಿವರು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗು ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿನ ನ್ಯೂನ್ಯತೆ ಹಾಗು ಸಮಸ್ಯೆಗಳ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಶಾಸಕರು ಹಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳನ್ನು ಸಹ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು. ನಂತರ ಸಚಿವರು ಭದ್ರಾಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಖಾಲಿ ಇರುವ ಜಾಗ ಪರಿಶೀಲನೆ ನಡೆಸಿ ತೆರಳಿದರು.
    ಶಾಸಕರ ಮನವಿ : 
    ಜನಸಂಖ್ಯೆಯಲ್ಲಿ ತಾಲೂಕು ಜಿಲ್ಲೆಯಲ್ಲಿ ೨ನೇ ಸ್ಥಾನದಲ್ಲಿದ್ದು, ಪ್ರಸ್ತುತ ೧೦೦ ಹಾಸಿಗೆಯುಳ್ಳ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ೧೦೦೦ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ಜಾಗದ ಕೊರತೆ ಇದ್ದು, ಅಲ್ಲದೆ ಹಲವು ಸಮಸ್ಯೆಗಳಿಂದ ಕೂಡಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಸುಮಾರು ೮ ಎಕರೆ ೦೫ ಗುಂಟೆ ಜಾಗವಿದ್ದು, ಈ ಜಾಗದಲ್ಲಿ ಹೊಸದಾಗಿ ೧೫೦ ಹಾಸಿಗೆಯ ಆಸ್ಪತ್ರೆ ಹಾಗು ತಾಯಿ ಮತ್ತು ಮಗು ಆಸ್ಪತ್ರೆ ಮಂಜೂರು ಮಾಡುವುದು. 
    ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ಸಿಂಗನಮನೆ(ಬಿ.ಆರ್ ಪ್ರಾಜೆಕ್ಟ್) ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವುದು. ನಗರಸಭೆ ವಾರ್ಡ್ ನಂ.೧ರ ಜೇಡಿಕಟ್ಟೆ ಹಾಗು ವಾರ್ಡ್ ನಂ.೨೫ರ ಬೊಮ್ಮನಕಟ್ಟೆ ಮತ್ತು ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಹಳ್ಳಿಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಶಾಸಕರು ಮನವಿ ಮಾಡಿದ್ದಾರೆ. 
    ವೈದ್ಯರು, ಸಿಬ್ಬಂದಿಗಳ ಬೇಡಿಕೆ: 
    ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿನ ಸಮಸ್ಯೆಗಳು, ಬೇಡಿಕೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ತಾಲೂಕು ನೌಕರರ ಸಂಘದ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. 
    ಇಲಾಖೆಯ ಪ್ರತಿ ವೃಂದಗಳಲ್ಲೂ ಸಾಕಷ್ಟು ಖಾಲಿ ಹುದ್ದೆಗಳಿದ್ದು, ಇದರಿಂದಾಗಿ ಇಲಾಖೆಯ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಅಲ್ಲದೆ ಸಿಬ್ಬಂದಿಗಳಿಗೆ ಕರ್ತವ್ಯದ ಒತ್ತಡಗಳಿಂದಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು. ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು ೬೦೦ ರಿಂದ ೬೫೦ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಎಲ್ಲಾ ವೃಂದಗಳ ಮೇಲ್ವಿಚಾರಣೆ ಹಾಗು ಆಡಳಿತಾತ್ಮಕ ಕೇಂದ್ರ ಕಛೇರಿ ತಾಲೂಕು ಕಛೇರಿಯಾಗಿರುತ್ತದೆ. ಆದರೆ ನಮಗೆ ನಮ್ಮದೇ ಆದ ಪ್ರತ್ಯೇಕ ಕಟ್ಟಡ ಹಾಗೂ ಸಭಾಂಗಣದ ಕೊರತೆ ಇದ್ದು, ಈ ಹಿನ್ನಲೆಯಲ್ಲಿ ಒಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿ ಕಟ್ಟಡ ನಿರ್ಮಾಣ ಮಾಡಿಕೊಡುವಂತೆ ಕೋರಲಾಗಿದೆ. 
    ಇಲಾಖೆಯ ಲೆಕ್ಕಶೀರ್ಷಿಕೆ-೦೨, ೦೩ರ ಅಡಿಯಲ್ಲಿ ಸುಮಾರು ೮೦ ಜನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅನುದಾನದ ಕೊರತೆಯಿಂದಾಗಿ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ. ಇದರಿಂದಾಗಿ ಈ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆಗೊಳಿಸುವ ಮೂಲಕ ವೇತನ ಪಾವತಿಸುವುದು. ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಕಾರ್ಯಕ್ರಮಗಳು ಸೇರಿದಂತೆ ಇಲಾಖಾ ವರದಿಗಳು ಹಾಗು ದಾಖಲಾತಿಗಳನ್ನು ಇಲಾಖಾ ತಂತ್ರಾಂಶದಲ್ಲಿಯೇ ನಮೂದಿಸಬೇಕಾಗಿರುವುದರಿಂದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಡಾಟಾ ಎಂಟ್ರಿ ಆಪರೇಟರ್(ಡಿಇಓ) ಹುದ್ದೆಗಳನ್ನು ಸೃಜಿಸಿ ಮಾನವ ಸಂಪನ್ಮೂಲ ಒದಗಿಸಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡುವುದು ಹಾಗು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳ ಸುರಕ್ಷತೆಗಾಗಿ ಪೊಲೀಸ್ ಚೌಕಿ ಜೊತೆಗೆ ಸಿಬ್ಬಂದಿ ನೇಮಿಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಅಧ್ಯಕ್ಷೆ ಕೆ. ಸುಶೀಲಾ ಬಾಯಿ ಮತ್ತು ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೋಮ್ಲಾಪುರ ಮನವಿ ಮಾಡಿದ್ದಾರೆ. 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯರಿಂದ ದೂರು: 
    ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ನ್ಯೂನ್ಯತೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ದೂರುಗಳು ಸಲ್ಲಿಕೆಯಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ. ತುರ್ತು ಚಿಕಿತ್ಸೆಗಾಗಿ ಬಂದವರನ್ನು ಸಹ ಗಂಟೆಗಟ್ಟಲೆ ಕಾಯಿಸಲಾಗುತ್ತಿದ್ದು, ಇದರಿಂದಾಗಿ ರೋಗಿಗಳು ನರಳುವ ಸ್ಥಿತಿಗೆ ತಲುಪಿ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡದೆ ಹೊರಗಿನ ತಮ್ಮದೇ ಆದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಸಣ್ಣಪುಟ್ಟ ಚಿಕಿತ್ಸೆಗಳಿಗೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗಳಿಗೆ ಬಡ ರೋಗಿಗಳನ್ನು ಕಳುಹಿಸುವ ಮೂಲಕ ಬೇಜವಾಬ್ದಾರಿತನದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಸಾಮಾಜಿಕ ಹೋರಾಟಗಾರ ಸಿ ತೀರ್ಥೇಶ್ ದೂರು ಸಲ್ಲಿಸಿದ್ದಾರೆ. 
    ಅಲ್ಲದೆ ಮತ್ತೊಂದು ದೂರಿನಲ್ಲಿ ನಗರದ ಖಾಸಗಿ ಆಸ್ಪತ್ರೆ ಒಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು, ಕೆಲವೊಂದು ಕಾರಣಗಳನ್ನು ನೆಪವಾಗಿಟ್ಟುಕೊಂಡು ಲಕ್ಷಾಂತರ ಹಣ ಪಡೆದು ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಆ ಆಸ್ಪತ್ರೆ ಹಾಗು ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 
    ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ದೂರು ಸಲ್ಲಿಸಿ, ನಗರ ಪ್ರದೇಶದಲ್ಲಿರುವ ಆಶ್ವತ್ಥ್ ನಗರ ಮತ್ತು ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಲೋಸ ಎಸಗುತ್ತಿದ್ದಾರೆ. ಇದರಿಂದಾಗಿ ಈ ವ್ಯಾಪ್ತಿಯ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ಲತಾ ಚಂದ್ರಶೇಖರ್, ಸರ್ವಮಂಗಳ ಭೈರಪ್ಪ, ಕೋಟೇಶ್ವರ ರಾವ್, ವಿ. ಕದಿರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿದ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಖಾಲಿ ಜಾಗ ಪರಿಶೀಲನೆ ನಡೆಸಿದರು. 

Tuesday, November 26, 2024

ಸರ್ಕಾರಿ ಆಸ್ಪತ್ರೆ ೧೫೦ ಹಾಸಿಗೆಗೆ ಮೇಲ್ದೆರ್ಜೆಗೇರಿಸಿ, ಬಡವರ್ಗದವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ. 
    * ಅನಂತಕುಮಾರ್ 
    ಭದ್ರಾವತಿ : ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸುವಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ಇದುವರೆಗೂ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದಾಗಿ ಈಗಲೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರವನ್ನು ಅವಲಂಬಿಸಬೇಕಾಗಿದೆ. 
    ತಾಲೂಕಿನಲ್ಲಿ ೧ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ೧ ಸಮುದಾಯ ಆರೋಗ್ಯ ಕೇಂದ್ರ ಹಾಗು ೧೧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಈ ಪೈಕಿ ಅಂತರಗಂಗೆ, ಅರಬಿಳಚಿ ಮತ್ತು ದೊಣಬಘಟ್ಟ ಆರೋಗ್ಯ ಕೇಂದ್ರಗಳನ್ನು ೨೪*೭ ಸೇವೆಗೆ ಮೀಸಲಿರಿಸಲಾಗಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ಸೇವೆ ಲಭ್ಯವಾಗುತ್ತಿಲ್ಲ. ಹಲವಾರು ಸಮಸ್ಯೆಗಳಿದ್ದು, ಇದರಿಂದಾಗಿ ಬಡವರ್ಗದವರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.  
    ತಾಲೂಕಿನಲ್ಲಿ ಕೃಷಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸುವಂತಾಗಿದೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿಗೂ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳು ಇಲ್ಲವಾಗಿದ್ದು, ಇದರಿಂದಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸುವುದು ಮುಂದುವರೆದಿದೆ. ಅಲ್ಲದೆ ಕೆಲವು ತಪಾಸಣೆಗಳಿಗೆ ಹೊರಗೆ ಖಾಸಗಿ ನರ್ಸಿಂಗ್ ಹೋಂ ಅಥವಾ ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗುತ್ತಿದೆ. ಅಲ್ಲದೆ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಗತ್ಯವಿರುವಷ್ಟು ವೈದ್ಯರು, ಸಿಬ್ಬಂದಿಗಳು ಇಲ್ಲದಿರುವ ಹಿನ್ನಲೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಲು ಗಂಟೆಗಟ್ಟಲೆ ಕಾಯಬೇಕಾಗಿದೆ. 
    ಖಾಸಗಿ ಹಗಲು ದರೋಡೆ : 
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿನ ಹಲವು ನ್ಯೂನ್ಯತೆಗಳಿಂದ ಬೇಸತ್ತಿರುವ ಬಹುತೇಕ ಜನರು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ಇದನ್ನು ಬಂಡವಾಳವನ್ನಾಗಿಸಿಕೊಂಡಿರುವ ನಗರದ ಕೆಲವು ಖಾಸಗಿ ಆಸ್ಪತ್ರೆಗಳು ಹಗಲು ದರೋಡೆಯಲ್ಲಿ ತೊಡಗಿವೆ. ಬಡರೋಗಿಗಳಿಂದ ಸುಲಿಗೆ ಮಾಡುತ್ತಿದ್ದು, ಬಡವರು ಸಾಲಸೋಲ ಮಾಡಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಈ ನಡುವೆ ಸರ್ಕಾರ ಬಡವರ್ಗದವರಿಗಾಗಿ ಹಲವಾರು ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಅವುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳತ್ತಿಲ್ಲ. ಆರೋಗ್ಯ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳೋ ಅಥವಾ ಆಡಳಿತ ವ್ಯವಸ್ಥೆಯಲ್ಲಿನ ವೈಫಲ್ಯವೋ ತಿಳಿಯದಾಗಿದೆ. 
    ೧೫೦ ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಿ: 
    ಸುಮಾರು ೫೦ ವರ್ಷಗಳಿಗೂ ಹಳೇಯದಾದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಪ್ರಸ್ತುತ ೧೦೦ ಹಾಸಿಗೆಯಿಂದ ೧೫೦ ಹಾಸಿಗೆಗೆ ಮೇಲ್ದೆರ್ಜೆಗೇರಿಸಬೇಕಾಗಿದೆ. ಅಲ್ಲದೆ ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸಬೇಕಾಗಿದೆ. 
ಈ ನಡುವೆ ಅಗತ್ಯವಿರುವ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತಪಾಸಣಾ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಗುಣಮಟ್ಟದ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ತಜ್ಞ ವೈದ್ಯರು, ಸಿಬ್ಬಂದಿಗಳ ಕೊರತೆ ಇಲ್ಲದಂತೆ ಎಚ್ಚರ ವಹಿಸಬೇಕಾಗಿದೆ.  
    ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿಸಲಿ: 
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ನಗರದ ಹೃದಯ ಭಾಗದಲ್ಲಿದ್ದು, ಇದರಿಂದಾಗಿ ತಾಲೂಕಿನ ದೂರದ ಗ್ರಾಮಗಳಲ್ಲಿನ ಬಡ ಜನರು ಹೆಚ್ಚಿನ ಚಿಕಿತ್ಸೆಗೆ ಬಂದು ಹೋಗಲು ಹೆಚ್ಚು ಶ್ರಮಪಡುವಂತಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸಬೇಕಾಗಿದೆ. 
    ಶಾಸಕರಿಂದ ಸರ್ಕಾರಕ್ಕೆ ಪ್ರಸ್ತಾವನೆ : 
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ೧೫೦ ಹಾಸಿಗೆಯುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗು ಭದ್ರಾಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚಿನ ಖಾಲಿ ಜಾಗವಿದ್ದು, ತಾಯಿ-ಮಗು ಆಸ್ಪತ್ರೆ ನಿರ್ಮಿಸಲು ಮತ್ತು ದೊಣಬಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಸುಮಾರು ೮ ಕೋ.ರು. ವೆಚ್ಚದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. 
    ನ.೨೭ರಂದು ಆಸ್ಪತ್ರೆಗೆ ಸಚಿವರ ಭೇಟಿ: 
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ನ.೨೭ರಂದು ಬೆಳಿಗ್ಗೆ ೮.೩೦ಕ್ಕೆ ಭೇಟಿ ನೀಡಲಿದ್ದು, ಆಸ್ಪತ್ರೆ ಪರಿಶೀಲನೆ ನಡೆಸಿ ವೈದ್ಯರು, ಸಿಬ್ಬಂದಿಗಳೊಂದಿಗೆ ಚರ್ಚಿಸಲಿದ್ದಾರೆ. 

ಯೋಗ ಶಿಕ್ಷಕ ಡಿ. ನಾಗರಾಜ್‌ಗೆ ಪ್ರೋತ್ಸಾಹ ಧನ

ಭದ್ರಾವತಿ  ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.  
    ಭದ್ರಾವತಿ :  ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.  
    ಡಿ. ನಾಗರಾಜ್‌ರವರು ಸುಮಾರು ೪ ದಶಕಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಹಾಗು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ, ಬಿರುದುಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರನ್ನು ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಇವರ ಸಾಧನೆಯನ್ನು ಪ್ರಶಂಸಿಸಿ ನಗರಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಲಾಯಿತು. 
    ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಕಾಂಗ್ರೆಸ್ ಹಿಂದುಳಿದ ವಿಭಾಗಗಳ ತಾಲೂಕು ಅಧ್ಯಕ್ಷ  ಬಿ. ಗಂಗಾಧರ್, ನಗರಸಭೆ ಹಿರಿಯ ಸದಸ್ಯ ವಿ.ಕದಿರೇಶ್ ಉಪಸ್ಥಿತರಿದ್ದರು.

ಬಾರಂದೂರು ಗ್ರಾಮ ಪಂಚಾಯಿತಿ ಉಪ ಚುನಾವಣೆ : ಕಿರಣ್ ಗೆಲುವು

ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ೧ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕಿರಣ್ ಗೆಲುವು ಸಾಧಿಸಿದ್ದಾರೆ. 
ಭದ್ರಾವತಿ : ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ೧ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕಿರಣ್ ಗೆಲುವು ಸಾಧಿಸಿದ್ದಾರೆ. 
ಈ ಹಿಂದೆ ಸದಸ್ಯರಾಗಿದ್ದ ಗೋಪಾಲ್ ಬರ್ಗೆ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಒಟ್ಟು ೪ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನ.೨೩ರಂದು ಮತದಾನ ನಡೆದಿದ್ದು, ಸೋಮವಾರ ಎಣಿಕೆ ನಡೆಯಿತು. ಕಿರಣ್ ೨೧೭ ಮತಗಳನ್ನು ಪಡೆದುಕೊಂಡಿದ್ದು, ಒಟ್ಟು ೧೧೭೦ ಮತಗಳಲ್ಲಿ ೮೨೬ ಮತಗಳು ಚಲಾವಣೆಯಾಗಿದ್ದವು. 
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಿರಣ್‌ರವರನ್ನು ಯುವ ಮುಖಂಡ ಬಿ.ಎಸ್ ಬಸವೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.  

ಪಿ.ಟಿ.ಸಿ.ಎಲ್ ಕಾಯ್ದೆ ನಿರ್ಲಕ್ಷಿಸುವ, ಮನಸ್ಸಿಗೆ ಬಂದಂತೆ ಆದೇಶಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ

ಪಿ.ಟಿ.ಸಿ.ಎಲ್ ಕಾಯ್ದೆ ನಿರ್ಲಕ್ಷಿಸುವ ಜೊತೆಗೆ ಉಲ್ಲಂಘನೆ ಮಾಡುತ್ತಿರುವ ಹಾಗು ಮನಸ್ಸಿಗೆ ಬಂದಂತೆ ಆದೇಶಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಾತಿನಿಂದನೆ(ಅಟ್ರಾಸಿಟಿ) ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಮುಂಭಾಗ  ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ : ಪಿ.ಟಿ.ಸಿ.ಎಲ್ ಕಾಯ್ದೆ ನಿರ್ಲಕ್ಷಿಸುವ ಜೊತೆಗೆ ಉಲ್ಲಂಘನೆ ಮಾಡುತ್ತಿರುವ ಹಾಗು ಮನಸ್ಸಿಗೆ ಬಂದಂತೆ ಆದೇಶಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಾತಿನಿಂದನೆ(ಅಟ್ರಾಸಿಟಿ) ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.
    ಅವರು ಮಂಗಳವಾರ ತಾಲೂಕು ಪಂಚಾಯಿತಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಮಾತನಾಡಿ, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು ದೇಶದ ಶೋಷಿತ ಬಡ ವರ್ಗದ ಜನರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಪೈಕಿ ಪಿಟಿಸಿಎಲ್ ಕಾಯ್ದೆ ಸಹ ಒಂದಾಗಿದೆ. ಈ ಕಾಯ್ದೆಯನ್ನು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರು. ಈ ಕಾಯ್ದೆ ಪ್ರಕಾರ ಶೋಷಿತ ಬಡ ವರ್ಗದ ಜನರಿಗೆ ಸರ್ಕಾರದಿಂದ ಮಂಜೂರಾದ ಭೂಮಿಯನ್ನು ಸರ್ಕಾರದ ಅನುಮತಿ ಇಲ್ಲದೆ ಯಾರು ಸಹ ಖರೀದಿಸುವಂತಿಲ್ಲ. ಒಂದು ವೇಳೆ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸಾಲ ನೀಡಿ ಬಲವಂತವಾಗಿ ಭೂಮಿ ಬರೆಸಿಕೊಂಡಿದ್ದಲ್ಲಿ ಅಥವಾ ದಬ್ಬಾಳಿಕೆ ಅಥವಾ ಬೆದರಿಕೆ ಮೂಲಕ ಖರೀದಿಸಿದ್ದಲ್ಲಿ ಪುನಃ ಭೂಮಿಯನ್ನು ಮೂಲ ಮಂಜೂರುದಾರರಿಗೆ ಹಿಂದಿರುಗಿಸಬೇಕು. ಆದರೆ ಕಾಯ್ದೆ ಕುರಿತು ಅರಿವಿದ್ದರೂ ಸಹ ವಿನಾಕಾರಣ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸುವ ಮೂಲಕ ಬಡ ವರ್ಗದವರನ್ನು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. 


    ಈ ನಡುವೆ ಈ ಕಾಯ್ದೆಯನ್ನು ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿ ವರ್ಗ ವಿಫಲವಾಗುತ್ತಿದ್ದು, ಬಹುತೇಕ ಪ್ರಕರಣಗಳಲ್ಲಿ ಈ ಕಾಯ್ದೆಯನ್ನು ಉಲ್ಲಂಘನೆ ಮಾಡುವ ಜೊತೆಗೆ ಮನಸ್ಸಿಗೆ ಬಂದಂತೆ ಆದೇಶಿಸಲಾಗುತ್ತಿದೆ. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಬಡ ವರ್ಗದವರನ್ನು ರಕ್ಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. 
    ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ಪ್ರತಿಭಟನಾ ಧರಣಿ ಸತ್ಯಾಗ್ರಹ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಹಾಗು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು. 
    ಪ್ರಮುಖರಾದ ಅರುಣ್‌ಕುಮಾರ್, ಶಶಿಕುಮಾರ್ ಗೌಡ, ಎನ್. ಮಂಜುನಾಥ್, ವೈ. ಶಶಿಕುಮಾರ್, ಎಂ.ವಿ ಚಂದ್ರಶೇಖರ್, ವಿ ಈರೇಶ್, ಪತ್ರೇಶ್, ಸಂಗಮ್ಮ, ಮಂಜಮ್ಮ, ಸುವರ್ಣಮ್ಮ, ಕಮಲಮ್ಮ, ಗೌರಮ್ಮ, ಟಿ. ಶ್ವೇತ, ಪವಿತ್ರ, ಆಶಾ, ಎಸ್. ಈರೇಶ್, ರುದ್ರೇಶಪ್ಪ, ಸೀನಪ್ಪ, ಚಂದ್ರಮ್ಮ, ನಾಗರತ್ನಮ್ಮ, ಜಯಮ್ಮ, ಲಕ್ಷ್ಮಮ್ಮ,  ಸೇರಿದಂತೆ ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು, ಪಿಟಿಸಿಎಲ್ ಕಾಯ್ದೆಯಿಂದ ವಂಚಿತರಾದ ಫಲಾನುಭವಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Monday, November 25, 2024

ನ.೨೭ರಂದು ಕನ್ನಡ ರಾಜ್ಯೋತ್ಸವ

ಭದ್ರಾವತಿ : ಸಿದ್ಧರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೨೭ರ ಬುಧವಾರ ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಹಾಗು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. 
ಬೆಳಿಗ್ಗೆ ೯ ಗಂಟೆಗೆ ಉದ್ಯಮಿಗಳಾದ ಎ. ಮಾಧು ಮತ್ತು ಮಾದೇವಪ್ಪ ದ್ವಜಾರೋಹರಣ ನೆರವೇರಿಸಲಿದ್ದು, ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕ ಕೃಷ್ಣಮೂರ್ತಿ, ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸದಸ್ಯರಾದ ಎ. ಸಚ್ಚಿದಾನಂದ ಗುಪ್ತ, ಎಚ್.ಪಿ ಶಿವಪ್ಪ ಮತ್ತು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಎಸ್.ಆರ್ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
ಸಂಜೆ ೫ ಗಂಟೆಯಿಂದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಹಾಗು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ೬ರಿಂದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಗೋಪಾಲ್, ವೈ. ರೇಣುಕಮ್ಮ, ಆರ್. ಶ್ರೇಯಸ್ಸು, ಬಿ.ಎಂ ಸಂತೋಷ್, ಕಾಂತರಾಜ್, ಎಚ್. ರವಿಕುಮಾರ್, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

ದೇಶದ ಪ್ರಮುಖ ಸ್ವಯಂ ಸೇವಾ ಸಂಸ್ಥೆಗಳ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪ್ರಕಾಶ್ ವೈ. ನಾಯ್ಕ್

ಭದ್ರಾವತಿಯಲ್ಲಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಕುರಿತು ಯೋಜನಾಧಿಕಾರಿ ಪ್ರಕಾಶ್ ವೈ. ನಾಯ್ಕ್ ಮಾಹಿತಿ ನೀಡಿದರು.  
    ಭದ್ರಾವತಿ: ೧೯೮೨ರಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಮರ್ಥ್ಯ ವರ್ಧನೆಗಾಗಿ ಪ್ರಾರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಮಾರು ೪೦ ವರ್ಷಗಳ ಸುಧೀರ್ಘ ಪ್ರಯಾಣದಲ್ಲಿ ಸ್ವಾವಲಂಬನೆ, ಆರ್ಥಿಕ ಸಾಮರ್ಥ್ಯ, ಕೌಶಲ್ಯಭಿವೃದ್ಧಿಯನ್ನು ಸಬಲೀಕರಣದ ವ್ಯಾಖ್ಯೆಯಲ್ಲಿ ಸೇರಿಸಿಕೊಂಡಿದೆ. ಪ್ರಸ್ತುತ ದೇಶದ ಪ್ರಮುಖ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದು ತಾಲೂಕಿನ ಯೋಜನೆ-೧ರ ಯೋಜನಾಧಿಕಾರಿ  ಪ್ರಕಾಶ್ ವೈ. ನಾಯ್ಕ್ ಹೇಳಿದರು. 
    ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ವೈಖರಿ ಕುರಿತು ಮಾಹಿತಿ ನೀಡಿದರು. ತಾಲೂಕಿನಲ್ಲಿ ೨೦೦೭-೦೮ ರಿಂದ ಸುಮಾರು ೧೭ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮಗಳಲ್ಲಿ ಸುಸ್ಥಿರ ಪ್ರಗತಿಯ ಅನೇಕ ಮಾದರಿಗಳನ್ನು ಪ್ರಾರಂಭಿಸಿದೆ. ತನ್ನ ಪಾಲುದಾರ ಕುಟುಂಬಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಸರ್ಕಾರದ ಪ್ರತಿನಿಧಿಯಾಗಿ ಬಡವರು ಯಾವುದೇ ತೊಂದರೆ ಇಲ್ಲದೆ ಸೌಲಭ್ಯಗಳನ್ನು ಪಡೆಯಲು ನೆರವಿಗನಾಗಿ ಯೋಜನೆಯು ಯಶಸ್ವಿಯಾಗಿದೆ ಎಂದರು. 
    ಸಾಮೂಹಿಕವಾಗಿ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಲು ಗ್ರಾಮಗಳಲ್ಲಿ ಸತ್ಯನಾರಾಯಣ ಪೂಜೆ ಹಾಗೂ ವರಮಹಲಕ್ಷ್ಮಿ ವ್ರತವನ್ನು ಆಯೋಜನೆ ಮಾಡಿ ಜನರಲ್ಲಿ ಧಾರ್ಮಿಕ ಸಂಸ್ಕೃತಿಯ ಮತ್ತು ಸಂಪ್ರದಾಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ೫೧ ಜನ ಸೇವಾಪ್ರತಿನಿಧಿಗಳು, ೩೫ ಜನ ಸಿ.ಎಸ್.ಸಿ ಸೇವಾದಾರರು, ೩೫ ಜನ ಸುವಿಧಾ ಸಹಾಯಕರು, ೨ ಜನ ಶುದ್ಧಗಂಗಾ ಪ್ರೇರೇಕರು ೨೪ ಜನ ಖಾಯಂ ಸಿಬ್ಬಂದಿಗಳು ತಾಲೂಕು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. 
    ನ.೨೬ರಿಂದ ಲಕ್ಷ ದೀಪೋತ್ಸವ : 
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ಬಾರಿ ನ.೨೬ ರಿಂದ ೩೦ರವರೆಗೆ ಲಕ್ಷದೀಪೋತ್ಸವ ಜರುಗಲಿದ್ದು,  ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ನ.೨೯ ಮತ್ತು ೩೦ ರಂದು ೯೨ನೇ ವರ್ಷದ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು, ವಸ್ತು ಪ್ರದರ್ಶನ, ಲಲಿತ ಕಲಾಗೋಷ್ಠಿ ಹಾಗು ಸಂಗೀತ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋರಿದರು. 
    ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಮಾತನಾಡಿ, ಯೋಜನೆಯ ಕಾರ್ಯ ವೈಖರಿಗಳನ್ನು ಪ್ರಶಂಸಿಸಿದರು. ಯೋಜನೆ-೨ರ ಯೋಜನಾಧಿಕಾರಿ ಅಜಯ್‌ಕುಮಾರ್ ಉಪಸ್ಥಿತರಿದ್ದರು.