ಭದ್ರಾವತಿ ಕನಕ ಮಂಟಪ ಮೈದಾನದಲ್ಲಿ ನಡೆದ ೭೬ ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್, ಎ.ಕೆ ನಾಗೇಂದ್ರಪ್ಪ, ಬಿ. ಸಿದ್ದಬಸಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ; ಭಾರತ ದೇಶದ ಸಂವಿಧಾನ ಸರಳವಾದ ಬೃಹತ್ ಸಂವಿಧಾನವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚಿಸಿದರು.
ನಮ್ಮದು ಸಂಸದೀಯ ಸರ್ಕಾರ ಪದ್ದತಿ, ಗಣತಂತ್ರ ವ್ಯವಸ್ಥೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು, ರಾಜ್ಯ ನಿರ್ದೇಶಕ ತತ್ವಗಳನ್ನು ಒಳಗೊಂಡಿದೆ. ನಮ್ಮ ದೇಶದ ಸಂವಿಧಾನ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳ ಏಳಿಗೆಗೆ ಇರುವ ಸಂವಿಧಾನವಾಗಿದೆ. ಅಸಮಾನತೆ ಹೋಗಲಾಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸುತ್ತದೆ. ಬಿ.ಆರ್ ಅಂಬೇಡ್ಕರ್ ಹೇಳುವಂತೆ ಪ್ರಜಾಪ್ರಭುತ್ವ ಎಂದರೆ ಕೇವಲ ಆಡಳಿತ ವಿಧಾನವಲ್ಲ ಅದು ಜೊತೆಯಾಗಿ ಬದುಕುವ, ಮನುಷ್ಯರಿಗೆ ಘನತೆ ಗೌರವ ನೀಡುವ ಕ್ರಮದ ಆಶಯವಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ದೇಶಕ್ಕೆ ಸಂವಿಧಾನವನ್ನು ರೂಪಿಸಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ. ಅವುಗಳಿಗೆ ಗೌರವ ಸಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾ ಧರ್ಮದ, ಎಲ್ಲಾ ಜಾತಿ ಜನಾಂಗದ, ಎಲ್ಲಾ ಭಾಷೆಯ ಜನರು ಸಮಾನತೆ ಸಹಬಾಳ್ವೆಯಿಂದ ಬದುಕಬೇಕೆನ್ನುವುದು ಸಂವಿಧಾನದ ಆಶಯವಾಗಿದೆ. ಅದರಂತೆ ನಾವೆಲ್ಲರೂ ಯಾವುದೇ ತಾರತಮ್ಯ ಮಾಡದೆ ಸಮಾನತೆಯಿಂದ ಜೀವಿಸಬೇಕು ಎಂದರು.
ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಸಂವಿಧಾನದ ಆಶಯದಂತೆ ಕರ್ತವ್ಯ ನಿರ್ವಹಿಸಬೇಕು. ಪ್ರತಿ ಪ್ರಜೆಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ತಾಲೂಕಿನಲ್ಲಿ ಅಭಿವೃದ್ದಿ ಕಾರ್ಯಗಳು ಸಾಕಷ್ಟು ನಡೆಯುತ್ತಿವೆ. ಮುಂದಿನ ೨ ವರ್ಷದ ಅವಧಿಯಲ್ಲಿ ಶೇ.೮೦ರಷ್ಟು ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು.
ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ, ವಿವಿಧ ಶಾಲಾ ಕಾಲೇಜುಗಳ ಎನ್.ಸಿ.ಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ಸೇರಿದಂತೆ ವಿವಿಧ ತಂಡಗಳು ಮಕ್ಕಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಪಥಸಂಚನದ ನೇತೃತ್ವದ ವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ ಅಭಿನಂಧಿಸಲಾಯಿತು.
ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ಆರ್‌ಎಫ್ ಕಮಾಂಡೆಂಟ್ ಪ್ರದೀಪ್, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.