ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಏರ್ಪಡಿಸಲಾಗಿತ್ತು.
ಭದ್ರಾವತಿ : ಇಂದಿಗೂ ಸಮಾಜದಲ್ಲಿ ಮಹಿಳೆಯರನ್ನು ನೋಡುವ ಭಾವನೆ ಬದಲಾಗಿಲ್ಲ. ಅಲ್ಲದೆ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಾಗುತ್ತಿರುವ ದೌರ್ಜನ್ಯಗಳನ್ನು ಗಮನಿಸಿದಾಗ ಮಹಿಳೆಯರಿಗೆ ಎಂದಿಗೂ ಸುರಕ್ಷತೆ ಇಲ್ಲ ಎಂಬ ಭಾವನೆ ಮೂಡುತ್ತಿದೆ ಎಂದು ನಗರದ ಜೆಎಂಎಫ್‌ಸಿ ನ್ಯಾಯಾಲಯದ ನೋಟರಿ ಆರ್.ಎಸ್ ಶೋಭಾ ಕಳವಳ ವ್ಯಕ್ತಪಡಿಸಿದರು.
ಅವರು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಸಮಾಜದಲ್ಲಿ ಯಾವುದೇ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತರಾಗದೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿ ತಮ್ಮ ಇರುವಿಕೆಯನ್ನು, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇಂತಹ ಮಹಿಳೆಯರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.
ಮಹಿಳಾ ಸಮಾಜದ ಯಶೋಧ ವೀರಭದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸಮಾಜದಲ್ಲಿ ಮಹಿಳೆಯರು ಅಬಲೆಯರಲ್ಲ ಸಬಲೆಯರಾಗಿದ್ದಾರೆ. ಸ್ವಾಭಿಮಾನದಿಂದ ಬದುಕು ನಡೆಸಬೇಕು. ಸಮಾಜದ ಅನಿಷ್ಟ ಪದ್ಧತಿಗಳು, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಕಾನೂನು ಬಾಹೀರ ಚಟುವಟಿಕೆಗಳ ವಿರುಧ್ಧ ಹೋರಾಡಬೇಕೆಂದು ಕರೆ ನೀಡಿದರು.
ಸಮಾಜದಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು ಎಂಬುದನ್ನು ಸುಳ್ಳು ಮಾಡಿ ನಾಗರೀಕ ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳಿಂದ ಬಾಳಬೇಕು. ಸರ್ಕಾರ ಮಹಿಳೆಯರಿಗೆ ನೀಡಬೇಕಾದ ಸೌಲಭ್ಯಗಳನ್ನು ಸರಿಯಾಗಿ ಸರಿಯಾದ ಕಾಲಕ್ಕೆ ನೀಡಬೇಕು ಎಂದು ಮನವಿ ಮಾಡಿದರು.
ಇತ್ತೀಚೆಗೆ ರಾಜ್ಯಮಟ್ಟದ ಪ್ರಶಸ್ತಿಗೆ ಪುರಸ್ಕೃತರಾದ ಸಮಾಜದ ಹಿರಿಯ ಸದಸ್ಯೆ ಕಮಲಾ ಕುಮಾರಿ ಹಾಗು ವಿಜಯ ಪ್ರಭು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಯಲ್ಲಿ ಗೌರಮ್ಮ ಶಂಕರಯ್ಯ, ಶೋಭಾ ಗಂಗರಾಜ್, ಜಯಂತಿ ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇಂದಿರಾ ರಮೇಶ್ ಸ್ವಾಗತಿಸಿದರು. ಕಲ್ಪನಾ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ಗೀತಾ ರಘುನಂದನ್ ವಂದಿಸಿದರು.
ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಬಾರಿ ಅದೃಷ್ಟದ ಮಹಿಳೆಯಾಗಿ ಮಲ್ಲಿಕಾಂಬ ಮಲ್ಲಿಕಾರ್ಜುನ ಆಯ್ಕೆಯಾದರು.