ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್‌ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ದ್ವಿತೀಯ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ನಾಟಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಕಲ್ಪನೆಗಳನ್ನು ಮನಮುಟ್ಟುವಂತೆ ಮಾಡಬಹುದು. ಇದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಡಿ. ಪ್ರಸನ್ನ ಹೇಳಿದರು.
ಅವರು ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್‌ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ದ್ವಿತೀಯ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರಿಗೆ ಮಾತುಗಾರಿಕೆ, ಸಂವಹನ, ಹಾವಭಾವ, ಅಭಿನಯ ಮುಂತಾದ ಕೌಶಲ್ಯಗಳು ಅತ್ಯವಶ್ಯಕ. ಈ ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಪರಿಣಾಕಾರಿ ಬೋಧನೆಯಿಂದ ಗುಣಾತ್ಮಕ ಶಿಕ್ಷಣವನ್ನು ನೀಡಲು ಸಾಧ್ಯ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಎಂ. ಶಿವಕುಮಾರ್ ಮಾತನಾಡಿ, ಶಿಕ್ಷಕರಿಗೆ ಶಿಸ್ತು ಮುಖ್ಯ. ಕೇವಲ ಅಂಕಗಳಿಕೆಯೇ ಜೀವನದ ಅತಿದೊಡ್ಡ ಸಾಧನೆಯಲ್ಲ. ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಜೀವನದಲ್ಲಿ ಸಫಲರಾಗುವೇ ಪ್ರಮುಖ ಗುರಿಯಾಗಬೇಕು ಎಂದರು.
ಇಂದಿನ ಯುವ ಜನತೆ ಮೊಬೈಲ್‌ನಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡುತ್ತಿದ್ದು, ಸೃಜನಶೀಲನೆ, ಬುದ್ಧಿವಂತಿಕೆ, ಭಾವನಾತ್ಮಕತೆಯನ್ನು ಕಳೆದುಕೊಂಡು ಕೇವಲ ಯಾಂತ್ರಿಕ ಬದುಕಿಗೆ ಕಾಲಿಡುತ್ತಿದ್ದಾರೆ. ಎಷ್ಟು ಅವಶ್ಯಕತೆಯೋ ಅಷ್ಟೇ ಮೊಬೈಲನ್ನು ಬಳಕೆ ಮಾಡಿಕೊಂಡು ಸಾಮಾಜಿಕ ಸಂವಹನ ಹೆಚ್ಚಿಸಿಕೊಂಡು, ಸಮಾಜದಲ್ಲಿ ಉತ್ತಮ ಮೌಲ್ಯಾಧಾರಿತ, ಧೀಮಂತ ನಾಯಕರು, ಆದರ್ಶ ವ್ಯಕ್ತಿಗಳಾದ ಅಂಬೇಡ್ಕರ್, ಬುದ್ಧ, ಬಸವಣ್ಣನವರ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದರಾಜು ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕ ಎಸ್. ಹನುಮಂತಪ್ಪ ಮಾತನಾಡಿ, ಶಿಕ್ಷಣವೇ ಶಕ್ತಿ, ದೇಶ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಎಂದರು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ ನಿರ್ದೇಶಕರಾದ ಸಾವಿತ್ರಿ ಗಣೇಶಪ್ಪ, ನೇತ್ರಾವತಿ ಸುಭಾಷ್, ಪವನ್ ಕುಮಾರ್, ಪ್ರಜ್ವಲ್‌ಕುಮಾರ್ ಹಾಗು ಕಾಲೇಜಿನ ಬೋಧಕ ಹಾಗು ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.