ಭದ್ರಾವತಿ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಸೋಮವಾರ ಸ್ವಾಮಿಯ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ : ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಸೋಮವಾರ ಸ್ವಾಮಿಯ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ ಸುಮಾರು ೧ ಗಂಟೆಗೆ ಸ್ವಾಮಿಯ ರಥೋತ್ಸವ ಆರಂಭಗೊಂಡಿತು. ಭಕ್ತರು ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು.
ಭಕ್ತರು ಉತ್ತುತ್ತೆ, ಬಾಳೆಹಣ್ಣು ಅಲಂಕೃತಗೊಂಡ ರಥದ ಕಳಸಕ್ಕೆ ಎಸೆದು ರಥ ಎಳೆಯುವ ಮೂಲಕ ಭಕ್ತಿ ಮೆರೆದರು. ವಿವಿಧ ಮಹಿಳಾ ಭಜನಾ ತಂಡಗಳಿಂದ ಭಜನೆ, ಮಂಗಳ ವಾದ್ಯ, ವಿಶೇಷವಾಗಿ ಮಹಿಳೆಯರಿಂದ ಚಂಡೇವಾದ್ಯ ನಡೆಯಿತು. ಈ ನಡುವೆ ಪವಾಡ ಎಂಬಂತೆ ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಗರುಡ ಪಕ್ಷಿ ಆಕಾಶದಲ್ಲಿ ಕಾಣಿಸಿಕೊಂಡು ಶುಭ ಘಳಿಗೆಗೆ ಮುನ್ನುಡಿ ಬರೆದಂತೆ ಕಂಡು ಬಂದಿತು.
ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥಶರ್ಮ, ಸಹಾಯಕ ಅರ್ಚಕ ಶ್ರೀನಿವಾಸ್, ಶಾಸಕ ಬಿ.ಕೆ ಸಂಗಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ಜಿ. ರಾಮಕಾಂತ್ ಹಾಗೂ ಎಸ್ ನರಸಿಂಹಾಚಾರ್, ರವಿ ಮಾಸ್ಟರ್, ಸುದರ್ಶನ್, ಸುಧೀಂದ್ರ, ಶ್ರೀಧರ್, ಅಡುಗೆ ರಂಗಣ್ಣ, ಮಾರುತಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.