ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದ ಸಂತ ಡೋಮಿನಿಕ್ ಶಾಲೆ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ನಾಯಕರ ಪದಗ್ರಹಣ ಸಮಾರಂಭ ಆಯೋಜಿಸಲಾಗಿತ್ತು.
ಭದ್ರಾವತಿ: ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ನಾಯಕತ್ವ ಗುಣ ಬೆಳೆಯುವ ಜೊತೆಯಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ಅವರು ತಾಲೂಕಿನ ಬಾರಂದೂರು ಗ್ರಾಮದ ಸಂತ ಡೋಮಿನಿಕ್ ಶಾಲೆ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ನಾಯಕರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವ ಅರಿತುಕೊಂಡು ಇವುಗಳ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಉನ್ನತ ಸಾಧನೆ ಮಾಡಲು ಪ್ರೇರಣೆ ನೀಡುತ್ತದೆ ಎಂದರು.
ರೋವರ್ ಜಿಲ್ಲಾ ಆಯುಕ್ತ ಕೆ. ರವಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ಬೆಳೆದುಬಂದ ಕುರಿತು ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ ಚಂದ್ರಶೇಖರಯ್ಯ ಸ್ಕೌಟ್ ಮತ್ತು ಗೈಡ್ಸ್ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯಕುಮಾರ್ ಮಾತನಾಡಿ, ಮಕ್ಕಳಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಶಾಲೆಯು ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಎಲ್ಲಾ ವಿಭಾಗಗಳನ್ನು ವಿದ್ಯುಕ್ತವಾಗಿ ಪ್ರಾರಂಭಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಜಿನ್ಫಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ೧೦೦೦ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.