ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಮತ್ತು ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ: ವೀರಶೈವ ಲಿಂಗಾಯತ ಸಮುದಾಯದವರು ಸಮಾಜದಲ್ಲಿನ ಎಲ್ಲರೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುವ ಮೂಲಕ ಸಮುದಾಯಕ್ಕೆ ಗೌರವ ತಂದುಕೊಡುವ ಕೆಲಸ ಮಾಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅವರು ಬುಧವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಶಾಖೆ ವತಿಯಿಂದ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಮತ್ತು ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಯಾರೊಂದಿಗೂ ಬೇಧಭಾವ ತೋರದೆ ಸಮುದಾಯದವರು ಮುನ್ನಡೆಯುವ ಮೂಲಕ ವೀರಶೈವ ಲಿಂಗಾಯತ ಸಮುದಾಯದ ಘನತೆ-ಗೌರವ ಮತ್ತಷ್ಟು ಹೆಚ್ಚಿಸುವಂತಾಗಬೇಕು. ಪ್ರಸ್ತುತ ಒಂದೇ ವೇದಿಕೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರೆಲ್ಲರೂ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸುವ ಮೂಲಕ ಸಮುದಾಯದ ಶಕ್ತಿ ಸಮಾಜಕ್ಕೆ ತೋರಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಮುದಾಯದಲ್ಲೂ ಬಹಳಷ್ಟು ಜನ ಹಿಂದುಳಿದವರು ಇದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಡೆಯಲಿ ಎಂದರು.
ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಮಾತನಾಡಿ, ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಎಂಬುದನ್ನು ಸಮುದಾಯದ ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ಸಮುದಾಯದ ಏಳಿಗೆಗೆ ಪ್ರತಿಯೊಬ್ಬರು ಸಹ ತಮ್ಮ ಕೊಡುಗೆಗಳನ್ನು ನೀಡಬೇಕು. ತಮ್ಮಿಂದ ಏನು ಸಹ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ಸುಮ್ಮನಿರಬೇಕು. ಸಂಘಟನೆಯಲ್ಲಿ ತೊಡಗಿರುವವರಿಗೆ ಯಾವುದೇ ರೀತಿ ತೊಂದರೆ ಕೊಡದಿದ್ದರೆ ಅಷ್ಟೆ ಸಾಕು ಎಂದರು.
ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ ರೇಣುಕ ಪ್ರಸನ್ನ ಸೇರಿದಂತೆ ಇನ್ನಿತರರು ಮಾತನಾಡಿದರು.
ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಮತ್ತು ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ನಟರಾಜ ಸಾಗರನಹಳ್ಳಿ, ಎಂ.ಜಿ ಶಶಿಕಲಾಮೂರ್ತಿ, ರುದ್ರಮುನಿ ಎನ್. ಸಜ್ಜನ್, ಬಳ್ಳೇಕೆರೆ ಸಂತೋಷ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಹಿರಿಯ ಗಣ್ಯರಾದ ಎಚ್.ವಿ ಶಿವರುದ್ರಪ್ಪ, ವಿಶ್ವನಾಥ ಕೋಠಿ, ಡಾ. ವಿಜಯದೇವಿ, ಜಿ.ಕೆ ನವಿಲಪ್ಪ, ಕೆ.ಬಿ ಪರಮೇಶ್ವರಪ್ಪ ಮತ್ತು ಎಚ್.ಎಸ್ ಮಲ್ಲೇಶಪ್ಪ ಸೇರಿದಂತೆ ಇನ್ನಿತರರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಆರಂಭದಲ್ಲಿ ವಟುಗಳಿಂದ ವೇದಘೋಷ ನಡೆಯಿತು. ಅನುಪಮ ಚನ್ನೇಶ್, ಮಮತಾ ಪ್ರಾರ್ಥಿಸಿ, ಆರ್.ಎಸ್.ಶೋಭಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹೆಬ್ಬಂಡಿ ನಟರಾಜ್ ಸ್ವಾಗತಿಸಿ, ನಿವೃತ್ತ ಪ್ರಾಂಶುಪಾಲ ಭುವನೇಶ್ವರ್ ನಿರೂಪಿಸಿದರು.
ರಾಜ್ಯ ಸರ್ಕಾರ ಈ ಹಿಂದೆ ಕೈಗೊಂಡಿದ್ದ ಜಾತಿ ಗಣತಿ ಸಂಬಂಧ ಸಾಕಷ್ಟು ಚರ್ಚೆಗಳು ನಡೆದಿದ್ದು, ವೀರಶೈವ ಲಿಂಗಾಯತ ಸಮುದಾಯದ ಜನಪ್ರತಿನಿಧಿಗಳು ಒಟ್ಟಾಗಿ ಗಣತಿಯಲ್ಲಿನ ಲೋಪದೋಷಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಪುನಃ ಜಾತಿಗಣತಿಗೆ ಆದೇಶಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಮುದಾಯದವರು ಜಾತಿಗಣತಿಗೆ ಬರುವವರಿಗೆ ಕಡ್ಡಾಯವಾಗಿ ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಭವಿಷ್ಯದಲ್ಲಿ ಸಮುದಾಯದ ಏಳಿಗೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು.- ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ.